ಕೋಟಕ್ ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್ ಆತ್ಮಹತ್ಯೆ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.11- ಬ್ಯಾಂಕ್‍ವೊಂದರ ಡೆಪ್ಯೂಟಿ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದಿರಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೋಟಕ್ ಮಹೀಂದ್ರ ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್ ರೋಹಿತ್ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ.

ಜಾರ್ಖಂಡ್ ಮುಖ್ಯಮಂತ್ರಿಯವರ ಮಾಜಿ ಸಲಹೆಗಾರ ಹರೀಂದರ್ ಅವರ ಪುತ್ರರಾದ ರೋಹಿತ್ ಇಂದಿರಾನಗರದ ಫ್ಲಾಟ್‍ನಲ್ಲಿ ವಾಸವಾಗಿದ್ದರು. ರೋಹಿತ್ ಹಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದು, ಕುಟುಂಬದವರು ಹಾಗೂ ಸ್ನೇಹಿತರೊಂದಿಗೆ ಅಷ್ಟಾಗಿ ಮಾತನಾಡುತ್ತಿರಲಿಲ್ಲ. ಒಂಟಿಯಾಗಿರಲು ಬಯಸುತ್ತಿದ್ದರು ಎನ್ನಲಾಗಿದೆ.

ಇವರ ಮನೆಯಿಂದ ಕೆಟ್ಟ ವಾಸನೆ ಬರುತ್ತಿರುವುದನ್ನು ಗಮನಿಸಿದ ಅಕ್ಕಪಕ್ಕದ ನಿವಾಸಿಗಳು ಅನುಮಾನಗೊಂಡು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸುದ್ದಿ ತಿಳಿದ ಇಂದಿರಾನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಬಾಗಿಲು ಒಡೆದು ನೋಡಿದಾಗ ರೋಹಿತ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದ್ದು, ಕೊಳೆತ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದೆ. ರೋಹಿತ್ ಎರಡು-ಮೂರು ದಿನಗಳ ಹಿಂದೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments