ಕೆ.ಜೆ.ಹಳ್ಳಿ ಮತ್ತು ಡಿ.ಜೆ.ಹಳ್ಳಿಯಲ್ಲಿ ದಾಂಧಲೆ : ಮೂವರ ಸಾವು, 110ಕ್ಕೂ ಹೆಚ್ಚು ಮಂದಿ ಅರೆಸ್ಟ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಕಳೆದ ರಾತ್ರಿ ನಗರದ ಕೆ.ಜೆ.ಹಳ್ಳಿ ಮತ್ತು ಡಿ.ಜೆ.ಹಳ್ಳಿಯಲ್ಲಿ ನಡೆದ ದಾಂಧಲೆ ಪ್ರಕರಣದಲ್ಲಿ ಮೃತಪಟ್ಟರವ ಸಂಖ್ಯೆ 3 ಕ್ಕೆ ಏರಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೂ 110ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿದ್ದಾರೆ.

ಇಡೀ ಗಲಭೆಗೆ ಕಾರಣವಾಗಿದ್ದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಸಂಬಂಧಿ ನವೀನ್‍ನನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಕಣ್ಗಾವಲು ಇಟ್ಟಿದ್ದು, ಸದ್ಯ ಕರ್ಪ್ಯೂ ಜಾರಿಯಲ್ಲಿರುವುದರಿಂದ ಮನೆಯಿಂದ ಯಾರೂ ಹೊರ ಬಾರದಂತೆ ಪೊಲೀಸರು ಕಣ್ಗಾವಲು ಇಟ್ಟಿದ್ದಾರೆ.

ಘಟನೆಯಲ್ಲಿ ಯಾವುದಾದರೂ ಸಂಘಟನೆಯ ಕೈವಾಡ ಇರುವ ಕುರಿತಾಗಿ ತನಿಖೆ ನಡೆಸಿ ವರದಿ ನೀಡಲು ರಾಜ್ಯ ಸರ್ಕಾರ ಸೂಚಿಸಿದೆ. ಕೆ.ಜಿ ಹಳ್ಳಿ, ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ನಗರದಾದ್ಯಂತ 144 ಸೆಕ್ಷನ್ ಜಾರಿಯಾಗಿದ್ದು,ಸದ್ಯ ಕರ್ಫ್ಯೂ ಜಾರಿ ಮಾಡಲಾಗಿದೆ.

ಗಲಭೆಗೆ ಕಾರಣರಾದ ಇನ್ನಷ್ಟು ಮಂದಿ ಆರೋಪಗಳನ್ನು ಬಂಧಿಸಲು ಪೊಲೀಸರಿಗೆ ಸೂಚನೆ ಕೊಡಲಾಗಿದೆ.ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನಿನ ಪ್ರಕಾರವೇ ಕ್ರಮ ಜರುಗಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯ ಪೊಲೀಸ್ ಮಹಾನಿದೇರ್ಶಕ ಪ್ರವೀಣ್ ಸೂದ್ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಸೂಚನೆ ಕೊಟ್ಟಿದ್ದಾರೆ.

ಕಳೆದ ರಾತ್ರಿ ಪರಿಸ್ಥಿತಿ ನಿಯಂತ್ರಣ ಮಾಡಲು ಪೊಲೀಸರು ನಡೆಸಿದ ಫೈರಿಂಗ್ ನಲ್ಲಿ 10ಕ್ಕೂ ಹೆಚ್ಚು ದುಷ್ಕರ್ಮಿಗಳಿಗೆ ಗುಂಡಿನೇಟು ತಗಲಿತ್ತು. ಒಬ್ಬರು ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದರೆ, ಗಾಯಗೊಂಡ ಇಬ್ಬರು ದುಷ್ಕರ್ಮಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಅಲ್ಲದೇ ಈ ಪ್ರಕರಣದಲ್ಲಿ 10ಕ್ಕೂ ಹೆಚ್ಚು ಆರೋಪಿಗಳಿಗೆ ಗಾಯವಾಗಿದ್ದು, 10 ಜನರಲ್ಲಿ 6 ಜನ ಆರೋಪಿಗಳು ಪರಾರಿಯಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಆರು ಜನ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಗಲಭೆಗೆ ಸಂಬಂಧಿಸಿದಂತೆ,ನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ.ಡಿಜಿ ಹಳ್ಳಿ ಮತ್ತು ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಸದ್ಯ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಯಿ ತಿಳಿಸಿದ್ದಾರೆ.

ಕೆ.ಜೆ.ಹಳ್ಳಿ ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ, ಡಿಸಿಪಿ ಕಾರು ಜಖಂ, ಶಾಸಕರ ಮನೆ ಎದುರು ಕಲ್ಲು ತೂರಾಟ ಸೇರಿದಂತೆ ಬಂಧಿತರ ವಿರುದ್ಧ 10ಕ್ಕೂ ಹೆಚ್ಚು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದ್ದು,ಪೊಲೀಸರಿಗೆ ಸರ್ಕಾರ ಸಂಪೂರ್ಣ ಮುಕ್ತ ಸ್ವಾತಂತ್ರ್ಯ ನೀಡಿದೆ.

ದಾಂಧಲೆಗೆ ಸಂಬಂಧಿಸಿದಂತೆ ಸ್ಥಳದಲ್ಲಿನ ಸಿಸಿ ಕ್ಯಾಮರಾ ಮತ್ತು ಮೊಬೈಲ್ ನಲ್ಲಿ ಸೆರೆ ಹಿಡಿದಿರುವ ದೃಶ್ಯಾವಳಿಗಳನ್ನು ಸಂಗ್ರಹಿಸಲು ಪೊಲೀಸರಿಗೆ ಗೃಹ‌ ಸಚಿವರು ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.

ಈ ಪ್ರಕರಣದಲ್ಲಿ 100ಕ್ಕೂ ಹೆಚ್ಚು ಪೊಲೀಸರಿಗೆ ಗಾಯವಾಗಿದ್ದು, ಗಾಯಗೊಂಡ ಪೊಲೀಸರಿಗೆ ನಗರದ ಹಲವು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.ತಲೆ, ಬೆನ್ನು, ಮುಖಕ್ಕೆ ಸೇರಿದಂತೆ ಹಲವು ಕಡೆ ಗಂಭೀರ ಗಾಯಗಳಾಗಿವೆ.

ಕಳೆದ ತಡರಾತ್ರಿ ಡಿ.ಜೆ.ಹಳ್ಳಿ ಮತ್ತು ಕೆ.ಜೆ.ಹಳ್ಳಿಯಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉದ್ರಿಕ್ತರ ಗುಂಪು ದಾಂಧಲೆ ನಡೆಸಲಾಗಿತ್ತು.ಪೊಲೀಸ್ ಠಾಣೆಗಳ ಮೇಲೆ ಕಲ್ಲು, ಬಾಟಲಿ ತೂರಾಟ ನಡೆಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ, ಅಶ್ರುವಾಯು ಸಿಡಿಸಿದ್ದಾರೆ.

ಪರಿಸ್ಥಿತಿ ಹತೋಟಿಗೆ ಬಾರದಿದ್ದಾಗ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಸದ್ಯ ಬೂದಿ ಮುಚ್ಚಿದ ಕೆಂಡದಂತೆ ಆಗಿರುವ ಡಿ.ಜೆ.ಹಳ್ಳಿ ಮತ್ತು ಕೆ.ಜೆ.ಹಳ್ಳಿಯಲ್ಲಿ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಕರ್ಫ್ಯೂ ಜಾರಿಗೊಳಿಸಿದ್ದಾರೆ.

ಕಾವಲ್ ಭೈರಸಂದ್ರದಲ್ಲಿರುವ ಮೂರು ಅಂತಸ್ತಿನ ಮನೆ ಬೆಂಕಿಗಾಹುತಿಯಾಗಿದೆ. ಶಾಸಕರ ಮನೆ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಪಾಳು ಮನೆಯಂತೆ ಭಾಸವಾಗುತ್ತಿದೆ. ಪರಿಣಾಮ ಅಕ್ಕಪಕ್ಕದ ರಸ್ತೆ, ಮನೆಗಳಲ್ಲಿ ನೀರವ ಮೌನ ಆವರಿಸಿದೆ. ಸದ್ಯಕ್ಕೆ ಪೊಲೀಸರು ಕೆಜಿ ಹಳ್ಳಿಗೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನ ಬಂದ್ ಮಾಡಿದ್ದರು.

ಪುಲಕೇಶಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸೋದರಳಿಯ ನವೀನ್, ಒಂದು ಸಮುದಾಯದ ವಿರುದ್ಧ ಪೋಸ್ಟ್ ಹಾಕಿದ್ದಾರೆ ಎಂಬ ಆರೋಪವಿದೆ.

Facebook Comments

Sri Raghav

Admin