ಡಿಕೆಶಿ ಅಭಿಮಾನಿಗಳು ಹಾಗೂ ಕಾರ್ಯಕರ್ತರರಲ್ಲಿ ಡಿ.ಕೆ.ಸುರೇಶ್ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.15- ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ ನಡೆಯಲಿರುವ ಡಿ.ಕೆ.ಶಿವಕುಮಾರ್ ಅವರ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಆಗಮಿಸುವುದು ಬೇಡ ಎಂದು ಡಿಕೆಶಿ ಅವರ ಸಹೋದರ, ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಅವರು ಮನವಿ ಮಾಡಿದ್ದಾರೆ.

ವಿಚಾರಣೆ ಸಂದರ್ಭದಲ್ಲಿ ಹೆಚ್ಚು ಜನರು ನ್ಯಾಯಾಲಯದ ಆವರಣದಲ್ಲಿ ಜಮಾಯಿಸುವುದರಿಂದ ನ್ಯಾಯಾಂಗ ಪ್ರಕ್ರಿಯೆ ಹಾಗೂ ಆಡಳಿತಾತ್ಮಕ ವ್ಯವಸ್ಥೆಗೆ ಸಮಸ್ಯೆ ಎದುರಾಗುತ್ತದೆ. ಈ ಕಾರಣದಿಂದಾಗಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ತಮ್ಮ ಊರುಗಳಲ್ಲೇ ಇರಬೇಕು ಎಂದು ನಾನು ಹಾಗೂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿಕೊಳ್ಳುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾವೆಲ್ಲರೂ ಕಾನೂನಿಗೆ ಗೌರವ ನೀಡಬೇಕಾಗಿರುವುದು ನಮ್ಮ ಕರ್ತವ್ಯ. ಹೀಗಾಗಿ ಆಡಳಿತಾತ್ಮಕ ಹಾಗೂ ನ್ಯಾಯಾಂಗ ಪ್ರಕ್ರಿಯೆ ಸುಗಮವಾಗಿ ಸಾಗಲು ನಾವು ಮನವಿ ಮಾಡುತ್ತಿದ್ದೇವೆ. ನಿಮ್ಮೆಲ್ಲರ ಸಹಕಾರ ಹಾಗೂ ಬೆಂಬಲ ಸದಾ ಸಿಗಲಿದೆ ಎಂಬ ನಿರೀಕ್ಷೆ ನಮಗಿದೆ ಎಂದು ವಿವರಿಸಿದ್ದಾರೆ.

ಕಳೆದ ಶುಕ್ರವಾರ ನಡೆದ ವಿಚಾರಣೆ ಸಂದರ್ಭದಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕೋರ್ಟ್ ಆವರಣದಲ್ಲಿ ಜಮಾಯಿಸಿದ್ದರು. ಈ ವೇಳೆ ಸ್ವತಃ ಡಿ.ಕೆ.ಶಿವಕುಮಾರ್ ಅವರು ಕಾರ್ಯಕರ್ತರ ಬಳಿ ಬಂದು ತಮಗೆ ಬೆಂಬಲ ನೀಡಿದ್ದಕ್ಕೆ ಧನ್ಯವಾದ ತಿಳಿಸಿ ತಮಗೆ ಏನೂ ಆಗುವುದಿಲ್ಲ. ಕಾನೂನಿನ ಹೋರಾಟದಲ್ಲಿ ಜಯಿಸುತ್ತೇವೆ. ಆತಂಕ ಪಡುವ ಅಗತ್ಯವಿಲ್ಲ. ಕೋರ್ಟ್ ಆವರಣದಿಂದ ತೆರಳಿ ತಮ್ಮ ಊರುಗಳಿಗೆ ವಾಪಸಾಗಿ ಎಂದು ಮನವಿ ಮಾಡಿದ್ದನ್ನು ಸ್ಮರಿಸಬಹುದು.

Facebook Comments