ಹಿರಿಯ ನಾಯಕರನ್ನು ಭೇಟಿ ಮಾಡಿದ ಡಿಕೆಶಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮಾ.14- ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ನಿಯೋಜಿತ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾಂಗ್ರೆಸ್‍ನ ಹಿರಿಯ ನಾಯಕರನ್ನು ಭೇಟಿ ಮಾಡಿ ಸಹಕಾರ ಕೋರಿದ್ದಾರೆ. ನಗರದಲ್ಲಿಂದು ಶಿವಾನಂದ ಸರ್ಕಲ್ ಬಳಿ ಇರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿ ಸುಮಾರು ಒಂದು ಗಂಟೆ ಕಾಲ ಮಹತ್ವದ ಚರ್ಚೆ ನಡೆಸಿದರು.

ಬಳಿಕ ಸದಾಶಿವನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು. ಡಿ.ಕೆ.ಶಿವಕುಮಾರ್ ಅವರ ಭೇಟಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಹಂತ ಹಂತವಾಗಿ ಎಲ್ಲಾ ಪ್ರಮುಖ ನಾಯಕರನ್ನು ಭೇಟಿ ಮಾಡಿ ವಿಶ್ವಾಸ ಗಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ನೇಮಕಾತಿಗೆ ಸಾಕಷ್ಟು ಮಂದಿ ವಿರೋಧ ವ್ಯಕ್ತಪಡಿಸಿದ್ದರು.

ಹೀಗಾಗಿ ಸರಿಸುಮಾರು ಮೂರು ತಿಂಗಳ ಕಾಲ ನೇಮಕಾತಿ ವಿಳಂಬವಾಗಿತ್ತು. ಕೊನೆಗೂ ನೇಮಕಾತಿಯಾಗಿದ್ದು, ವಿರೋಧ ವ್ಯಕ್ತಪಡಿಸಿದವರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲು ಅವರು ಪ್ರಯತ್ನಿಸುತ್ತಿದ್ದಾರೆ. ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಬಹುತೇಕ ಏಪ್ರಿಲ್ ಮೊದಲ ವಾರದಲ್ಲಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ.

Facebook Comments