ರೈತರಿಗೆ ಕೂಡಲೇ ಪರಿಹಾರ ನೀಡುವಂತೆ ಸಂಸದ ಡಿ.ಕೆ.ಸುರೇಶ್ ಆಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

ಕುಣಿಗಲ್,ಜೂ.21- ಕೊರೊನಾ ಸಂಕಷ್ಟದಿಂದ ತರಕಾರಿ, ಹಣ್ಣು, ಹೂವುಗಳನ್ನು ಬೆಳೆದು ನಷ್ಟ ಅನುಭವಿಸಿರುವ ರೈತರಿಗೆ ಕೂಡಲೇ ಪರಿಹಾರ ನೀಡುವಂತೆ ಸಂಸದ ಡಿ.ಕೆ.ಸುರೇಶ್ ಅವರು ತಹಸೀಲ್ದಾರ್ ವಿಶ್ವನಾಥ್ ಅವರಿಗೆ ಸೂಚಿಸಿದರು.  ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶಾಸಕ ಡಾ.ಎಚ್.ಡಿ.ರಂಗನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪರಿಹಾರವನ್ನು ಬೆಳೆಗಾರರಿಗೆ ತಕ್ಷಣ ನೀಡುವಂತೆ ಸೂಚಿಸಿದರು.

ಅಲ್ಲದೆ ತಾಲ್ಲೂಕಿನ ಪ್ರತಿ ಗ್ರಾಮಪಂಚಾಯಿತಿಯಲ್ಲೂ 5 ಥರ್ಮಲ್ ಸ್ಕ್ಯಾನಿಂಗ್ ಯಂತ್ರ ಖರೀದಿ ಮಾಡುವಂತೆ ಆದೇಶಿಸಿದರು.  ತಾಲ್ಲೂಕು ವೈದ್ಯಾಧಿಕಾರಿ ಜಗದೀಶ್ ಅವರು ಮಾತನಾಡಿ, ತಾಲ್ಲೂಕಿನಲ್ಲಿ ಇಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಒಬ್ಬರು ಮಹಾರಾಷ್ಟ್ರ ಮೂಲದವರು, ಮತ್ತೊಬ್ಬರು ಮಾಗಡಿ ತಾಲ್ಲೂಕಿನ ವ್ಯಕ್ತಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಇದ್ದು ಈ ಇಬ್ಬರನ್ನೂ ತುಮಕೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದರು.

ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಕೇವಲ ಒಂದು ವೆಂಟಿಲೇಟರ್ ಇದ್ದು ಇನ್ನೊಂದರ ಅವಶ್ಯಕತೆ ಇದೆ ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಂಸದರು ಮತ್ತೊಂದನ್ನು ಡಿಕೆಎಸ್ ಚಾರಿಟಬಲ್ ಟ್ರಸ್ಟ್ ವತಿಯಿಂದ ನೀಡಲಾಗುವುದು ಎಂದು ತಿಳಿಸಿದರು.  ಪ್ರತಿ ಗ್ರಾಮ ಪಂಚಾಯ್ತಿಯಲ್ಲೂ ಮಾದರಿ ಶಾಲೆಗಳನ್ನು ಆರಂಭಿಸಲು ನಿವೇಶನಗಳನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕೆಂದು ಬಿಇಒ ತಿಮ್ಮರಾಜುಗೆ ಡಿ.ಕೆ.ಸುರೇಶ್ ಸೂಚಿಸಿದರು.

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕೊರೊನಾ ಆತಂಕದ ಭಯ ಮೂಡಿಸಿದೆ ಅವರಲ್ಲಿ ಆತ್ಮ ಸ್ಥೈರ್ಯ ತುಂಬಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕೆಂದು ತಾಲ್ಲೂಕು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.  ಸಭೆಯಲ್ಲಿ ತಾಲ್ಲೂಕು ಪಂಚಾಯತ್ ಪ್ರಭಾರಿ ಅಧ್ಯಕ್ಷೆ ವರಲಕ್ಷ್ಮಿ ರಂಗಧಾಮಯ್ಯ, ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಂ, ತಹಸೀಲ್ದಾರ್ ವಿ.ಆರ್.ವಿಶ್ವನಾಥ್, ಡಿವೈಎಸ್ಪಿ ಜಗದೀಶ್ ಪಾಲ್ಗೊಂಡಿದ್ದರು.

Facebook Comments