“ಉಪಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ”

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.23-ಮುಂಬರುವ 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಅನರ್ಹರಿಗೆ ಟಿಕೆಟ್ ನೀಡಬೇಕೇ ಬೇಡವೇ ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ಯಾರೇ ಆಗಲಿ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿರಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥ್‍ನಾರಾಯಣ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಾಲಯದಲ್ಲಿ ಅನರ್ಹ ಶಾಸಕರ ಮೇಲ್ಮನವಿ ಅರ್ಜಿ ವಿಚಾರಣೆ ನಡೆಯುತ್ತಿದೆ. ಒಂದು ವೇಳೆ ವ್ಯತಿರಿಕ್ತವಾದ ತೀರ್ಪು ಬಂದರೆ ಪಕ್ಷದ ತೀರ್ಮಾನವೇನು ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಆ ಬಗ್ಗೆ ಪಕ್ಷವು ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ನ್ಯಾಯಾಲಯದ ತೀರ್ಪು ಬರುವ ಮುನ್ನವೇ ಏನೂ ಹೇಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಅನರ್ಹರು ಅಧಿಕೃತವಾಗಿ ಇನ್ನು ಬಿಜೆಪಿಗೆ ಸೇರ್ಪಡೆಯಾಗಿಲ್ಲ. ಅವರು ವೈಯಕ್ತಿಕ ಕಾರಣಗಳಿಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ಸ್ಪೀಕರ್ ಆದೇಶವನ್ನು ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನಿಸಿದ್ದಾರೆ. ಮೊದಲು ತೀರ್ಪು ಬರಲಿ, ನಂತರ ಏನು ಮಾಡಬೇಕು ಎಂಬುದನ್ನು ಪಕ್ಷವು ತೀರ್ಮಾನಿಸುತ್ತದೆ. ವರಿಷ್ಠರು ತೆಗೆದುಕೊಳ್ಳುವ ಯಾವುದೇ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂದು ಹೇಳಿದರು.

ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲಿ ನಾನು ಏನು ಹೇಳಿದರೂ ಅದು ಗೊಂದಲಕ್ಕೆ ಕಾರಣವಾಗಬಹುದು. ಅನರ್ಹರಿಗೆ ನ್ಯಾಯಾಲಯದಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ. ಈಗಾಗಲೇ ಬಿಜೆಪಿ ಕೂಡ ಉಪಚುನಾವಣೆಗೆ ಭರ್ಜರಿ ಸಿದ್ಧತೆ ಆರಂಭಿಸಿದೆ. 15 ಕ್ಷೇತ್ರಗಳಲ್ಲೂ ಗೆಲ್ಲುವ ಅಭ್ಯರ್ಥಿಗಳೇ ಕಣಕ್ಕಿಳಿಯಲಿದ್ದಾರೆ ಎಂದರು.

ಉಪಚುನಾವಣೆಯಲ್ಲಿ ಮತದಾರರು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ. ನಾವು ಹೆಚ್ಚು ಸ್ಥಾನ ಗಳಿಸುವುದರಲ್ಲಿ ನಾವು ಯಾವುದೇ ಸಂಶಯವಿಲ್ಲ. ಪಕ್ಷ ಸಂಘಟನೆ, ಮುಖ್ಯಮಂತ್ರಿ ಯಡಿಯೂರಪ್ಪನವರ ನಾಯಕತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ. ಫಲಿತಾಂಶ ಬಂದಾಗ ನಿಮಗೆ ಎಲ್ಲವೂ ತಿಳಿಯುತ್ತದೆ ಎಂದು ಅಶ್ವತ್ಥ್‍ನಾರಾಯಣ ಹೇಳಿದರು.

ಚಿಕ್ಕಬಳ್ಳಾಪುರ ಸಂಸದ ಬಿ.ಎನ್.ಬಚ್ಚೇಗೌಡ ಅವರ ಪುತ್ರ ಶರತ್ ಬಚ್ಚೇಗೌಡ ಕಾಂಗ್ರೆಸ್‍ಗೆ ಹೋಗುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ನನಗೆ ಆ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಯಾರೂ ಕೂಡ ಪಕ್ಷ ಬಿಟ್ಟು ಹೋಗುವುದಿಲ್ಲ. ಎಲ್ಲರೂ ನಮ್ಮಲ್ಲೇ ಉಳಿಯುತ್ತಾರೆ. ಊಹಾಪೋಹಗಳಿಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದರು.

ನಾಳೆ ವಸ್ತುಪ್ರದರ್ಶನ:
ಡೈಡ್ಯಾಕ್ಟ್ ಸಂಸ್ಥೆಯು ಜ್ಞಾನವೃದ್ಧಿ, ಕೌಶಲ್ಯ ವೃದ್ಧಿಸುವ ಸಂಸ್ಥೆಯಾಗಿ ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ಆದ ಕೆಲಸ ಮಾಡುತ್ತಿದೆ. ನಾಳೆ ಬೆಂಗಳೂರಿನಲ್ಲಿ ಈ ಸಂಸ್ಥೆಯು 11ನೇ ವಸ್ತು ಪ್ರದರ್ಶನ ಹಮ್ಮಿಕೊಂಡಿದೆ ಎಂದು ತಿಳಿಸಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಸ್ತುಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ಕಳೆದ 11 ವರ್ಷಗಳಿಂದ ಡೈಡ್ಯಾಕ್ಟ್ ಸಂಸ್ಥೆಯು ಬೆಂಗಳೂರಿನಲ್ಲಿ ಪ್ರತಿವರ್ಷ ಶಿಕ್ಷಣಕ್ಕೆ ಪೂರಕವಾಗುವ ಮತ್ತು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ವಸ್ತುಪ್ರದರ್ಶನ ನಡೆಸುತ್ತಿದೆ.

ವಿದ್ಯಾರ್ಥಿಗಳ ಜ್ಞಾನವೃದ್ಧಿ, ಕೌಶಲ್ಯಾಭಿವೃದ್ಧಿ ಪಡಿಸುವುದು ಸಂಸ್ಥೆಯ ಮೂಲ ಉದ್ದೇಶ. ತಜ್ಞರ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತರುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಈಗಿನ ಕಾಲಕ್ಕೆ ತಕ್ಕಂತೆ ಮಕ್ಕಳನ್ನು ಸ್ಪರ್ಧಾತ್ಮಕ ಯುಗಕ್ಕೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಉಪನ್ಯಾಸ ತಂತ್ರಜ್ಞಾನವನ್ನು ಬೋಧನಾ ವಿಧಾನದಲ್ಲಿ ಅಳವಡಿಸಿಕೊಳ್ಳುವ ಬಗ್ಗೆಯೂ ಸಂಸ್ಥೆ ಕಾರ್ಯೋನ್ಮುಖವಾಗಿದೆ.

ಜೊತೆಗೆ ಶಿಕ್ಷಣದಲ್ಲಿ ಯಾವ ಯಾವ ಬದಲಾವಣೆ ಮಾಡಬೇಕು ಎಂಬ ಬಗ್ಗೆಯೂ ಸಲಹೆ ಮತ್ತು ಮಾರ್ಗದರ್ಶನ ನೀಡುತ್ತಿದ್ದಾರೆ.ವಸ್ತುಪ್ರದರ್ಶನದಲ್ಲಿವ್ಯಕ್ತವಾಗುವ ಅಭಿಪ್ರಾಯಗಳನ್ನು ಕ್ರೋಢೀಕರಿಸಿ ನಮ್ಮ ಸರ್ಕಾರ ಇವುಗಳನ್ನು ಅಳವಡಿಸಿಕೊಳ್ಳಲಿವೆ ಎಂದರು.

ಭವಿಷ್ಯ ಬದಲಾಗಬೇಕೆಂದರೆ ಅದು ಶಿಕ್ಷಣದಿಂದ ಮಾತ್ರ ಸಾಧ್ಯ. ಶಿಕ್ಷಣಕ್ಕೆ ಎಷ್ಟು ಆದ್ಯತೆ ಸಿಗಬೇಕಿತ್ತೋ ಅದು ಅಷ್ಟು ಸಿಗುತ್ತಿಲ್ಲ. ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ. ನಾಳೆ ನಡೆಯಲಿರುವ ವಸ್ತುಪ್ರದರ್ಶನದಲ್ಲಿ ಮುಖ್ಯಮಂತ್ರಿಗಳ ಜೊತೆ ಕೇಂದ್ರ ಮತ್ತು ರಾಜ್ಯ ಶಿಕ್ಷಣ ಸಚಿವರು ಸೇರಿದಂತೆ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗಪಡೆದುಕೊಳ್ಳುವಂತೆ ಮನವಿ ಮಾಡಿದರು.

Facebook Comments