“ಯಾವುದೇ ಗೊಂದಲವಿಲ್ಲದೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲು ಸಿದ್ಧತೆ”

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.22-ಎಸ್‍ಎಸ್‍ಎಲ್‍ಸಿ ಮುಖ್ಯ ಪರೀಕ್ಷೆಯನ್ನು ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದಂತೆ ಸುಸೂತ್ರವಾಗಿ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ತಿಳಿಸಿದ್ದಾರೆ.

ಎಸ್‍ಎಸ್‍ಎಲ್‍ಸಿ ಪೂರ್ವಸಿದ್ಧತಾ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತಂತೆ ಟ್ವೀಟರ್ ಮೂಲಕ ಸ್ಪಷ್ಟೀಕರಣ ನೀಡಿರುವ ಸಚಿವರು, ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಎಸ್‍ಎಸ್‍ಎಲ್‍ಸಿ ಮುಖ್ಯ ಪರೀಕ್ಷೆ ನಡೆಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಹೀಗಾಗಿ ವಿದ್ಯಾರ್ಥಿಗಳು, ಪೋಷಕರು ಗೊಂದಲ, ಆತಂಕಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದ್ದಾರೆ.

ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸುವ ಸಂಬಂಧ ಜಿಲ್ಲಾ ಮಟ್ಟದ ಪೆÇಲೀಸ್ ಅಧಿಕಾರಿಗಳು ಮತ್ತು ಜಿಲ್ಲಾ ಖಜಾನೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ತೀರ್ಮಾನಿಸಲಾಗಿದೆ. ಈ ಹಿಂದಿನ ವ್ಯವಸ್ಥೆಯಂತೆ ಈ ಬಾರಿಯೂ ಮುಖ್ಯಪರೀಕ್ಷೆ ಸುಸೂತ್ರವಾಗಿ ನಡೆಯಲಿದೆ.

ವಿದ್ಯಾರ್ಥಿಗಳು ಮತ್ತು ಪೋಷಕರು ಗಾಬರಿ ಪಡುವ ಅಗತ್ಯವಿಲ್ಲ. ನಿಶ್ಚಿಂತೆಯಿಂದ ವಿದ್ಯಾರ್ಥಿಗಳು ಅಧ್ಯಯನ ಹಾಗೂ ಪರೀಕ್ಷಾ ತಯಾರಿ ಕಡೆ ಗಮನ ಕೊಡಬೇಕು ಎಂದು ಸಲಹೆ ಮಾಡಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ಅನುಚಿತ ವರ್ತನೆ ಪ್ರದರ್ಶಿಸಿರುವ ಶಿಕ್ಷಣಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಸುರೇಶ್‍ಕುಮಾರ್ ತಿಳಿಸಿದ್ದಾರೆ.

ಶಿಕ್ಷಣಾಧಿಕಾರಿ ವಿರುದ್ಧ ಕ್ರಮ: ಅನುಚಿತವಾಗಿ ವರ್ತಿಸಿದ ಶಿಕ್ಷಣಾಧಿಕಾರಿ ವಿರುದ್ಧ ಅಗತ್ಯ ಕ್ರಮ ಜರುಗಿಸಲು ಶಿಕ್ಷಣ ಇಲಾಖೆ ಆಯುಕ್ತರಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.

Facebook Comments

Sri Raghav

Admin