ಗ್ರಾ. ಪಂ. ಚುನಾವಣೆ ನಡೆಸಲು ಜಿಲ್ಲಾಧಿಕಾರಿಗಳ ಅಭಿಪ್ರಾಯ ಕೇಳಿದ ಆಯೋಗ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 23- ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆ ನಡೆಸುವ ಬಗ್ಗೆ ಅಭಿಪ್ರಾಯ ನೀಡುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ರಾಜ್ಯ ಚುನಾವಣಾ ಆಯೋಗ ನಿರ್ದೇಶನ ನೀಡಿದೆ.

ಮತದಾರರ ಪಟ್ಟಿ ತಯಾರಿಸಿ ಹೊಸ ತಿದ್ದುಪಡಿಯಂತೆ ಮೀಸಲಾತಿ ನಿಗದಿಪಡಿಸಿ ಗ್ರಾಮ ಪಂಚಾಯ್ತಿಗಳಿಗೆ ಸಾರ್ವತ್ರಿಕ ಚುನಾವಣೆ ನಡೆಸಬೇಕಾಗಿರುವುದರಿಂದ ಜಿಲ್ಲಾಧಿಕಾರಿಗಳು ತಮ್ಮ ಅಭಿಪ್ರಾಯವನ್ನು ಇ-ಮೇಲ್‍ನಲ್ಲಿ ನೀಡುವಂತೆ ಆಯೋಗ ತಿಳಿಸಿದೆ.

ಈ ಸಂಬಂಧ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆಯೋಗ ಪತ್ರ ಬರೆದಿದ್ದು, ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ಅಧಿನಿಯಮ 1993ರ ಪ್ರಕರಣ 5ಕ್ಕೆ ತಿದ್ದುಪಡಿ ಮಾಡಿದ್ದು, ಮೀಸಲಾತಿಯನ್ನು 10 ವರ್ಷ ಬದಲಿಗೆ 5 ವರ್ಷಗಳು ಎಂದು ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಹೊರಡಿಸಿದೆ.

ಹೊಸದಾಗಿ ತಿದ್ದುಪಡಿಯಂತೆ ಮೀಸಲು ಸ್ಥಾನಗಳನ್ನು ನಿಗದಿ ಪಡಿಸಬೇಕಾಗಿದೆ. ಈ ನಡುವೆ ಜಿಲ್ಲಾಡಳಿತ ಹಾಗೂ ತಾಲ್ಲೂಕು ಕಚೇರಿಯ ಅಧಿಕಾರಿ ಸಿಬ್ಬಂದಿಗಳು ಕೊರೊನಾ ನಿಯಂತ್ರಣ ಕಾರ್ಯದಲ್ಲಿ ತೊಡಗಿಕೊಂಡಿರುವುದು ಆಯೋಗದ ಗಮನಕ್ಕೆ ಬಂದಿದೆ.

ಇಂತಹ ಸಂದರ್ಭದಲ್ಲಿ ಚುನಾವಣೆ ನಡೆಸುವ ಬಗ್ಗೆ ಅಭಿಪ್ರಾಯ ನೀಡುವಂತೆ ನಿರ್ದೇಶಲಾಗಿದೆ. ಲಾಕ್‍ಡೌನ್ ಜಾರಿಯಾದ ನಂತರ ಮತದಾರರ ಪಟ್ಟಿ ತಯಾರಿಕೆ ಪ್ರಕ್ರಿಯೆ ಹಾಗೂ ಚುನಾವಣೆ ಸಿದ್ದತೆಗಳನ್ನು ಸ್ಥಗಿತಗೊಳಿಸಲಾಗಿತ್ತು.

ಜೂನ್‍ನಿಂದ ಆಗಸ್ಟ್ ವರೆಗೆ ಸುಮಾರು 5800 ಗ್ರಾಮ ಪಂಚಾಯ್ತಿಗಳ ಅವಧಿ ಮುಕ್ತಾಯವಾಗಲಿದ್ದು, ಆಯೋಗವು ಆ ಪಂಚಾಯ್ತಿಗಳಿಗೆ ಅವಧಿ ಮುಗಿಯುವ ಪೂರ್ವದಲ್ಲಿ ಸಾರ್ವತ್ರಿಕ ಚುನಾವಣೆ ನಡೆಸಲು ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಈ ಸಂಬಂಧ ಮತದಾರರ ಪಟ್ಟಿಯನ್ನು ತಯಾರಿಸಲು ಸೂಚಿಸಲಾಗಿತ್ತು ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಅವಧಿ ಪೂರ್ಣಗೊಳ್ಳುವ ಮುನ್ನ ಗ್ರಾಮ ಪಂಚಾಯ್ತಿಗಳಿಗೆ ಚುನಾವಣಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕಾಗಿರುವುದರಿಂದ ಜಿಲ್ಲಾಧಿಕಾರಿಗಳ ಅಭಿಪ್ರಾಯವನ್ನು ಆಯೋಗ ಕೋರಿದೆ.

Facebook Comments

Sri Raghav

Admin