ಕಾಶ್ಮೀರ ಗಡಿಯಲ್ಲಿ ವಿಧ್ವಂಸಕ ಕೃತ್ಯ ವಿಫಲಗೊಳಿಸಿದ ಸೇನೆ, 5 ಉಗ್ರರು ಹತ, ಯೋಧ ಹುತಾತ್ಮ

ಈ ಸುದ್ದಿಯನ್ನು ಶೇರ್ ಮಾಡಿ

ಶ್ರೀನಗರ, ಏ.5-ಜಮ್ಮು ಮತ್ತು ಕಾಶ್ಮೀರದಲ್ಲಿ ಗಡಿ ಮೂಲಕ ನುಸಳಿ ಭಾರೀ ವಿಧ್ವಂಸಕ ಕೃತ್ಯಕ್ಕೆ ಪಾಕಿಸ್ತಾನಿ ಬೆಂಬಲಿತ ಉಗ್ರಗಾಮಿಗಳು ನಡೆಸಿದ ಯತ್ನವೊಂದನ್ನು ಭಾರತೀಯ ಭದ್ರತಾ ಪಡೆಗಳು ವಿಫಲಗೊಳಿಸಿವೆ. ಈ ಕಾರ್ಯಾಚರಣೆಯಲ್ಲಿ ಐವರು ಭಯೋತ್ಪಾದಕರನ್ನು ಸೇನೆ ಹೊಡೆದುರುಳಿಸಿದ್ದು, ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಕಾಶ್ಮೀರ ಕಣಿವೆ ಕಣಿವೆಯ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‍ಒಸಿ) ಬಳಿ ನಡೆದ ಈ ಕಾರ್ಯಾಚರಣೆಯಲ್ಲಿ ಕೆಲವು ಯೋಧರಿಗೂ ಗಾಯಗಳಾಗಿವೆ ಎಂದು ರಕ್ಷಣಾ ವಕ್ತಾರರೊಬ್ಬರು ತಿಳಿಸಿದ್ದಾರೆ.

ಉತ್ತರ ಕಾಶ್ಮೀರದ ಕೆರನ್ ವಲಯದ ಗಡಿ ಪ್ರದೇಶದಲ್ಲಿ ಉಗ್ರಗಾಮಿಗಳ ನುಸುಳುವಿಕೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಕಟ್ಟೆಚ್ಚರ ವಹಿಸಿರುವ ಭಾರತೀಯ ಭದ್ರತಾಪಡೆಗಳು ಎಲ್‍ಒಸಿ ಬಳಿ ಐವರು ನುಸುಳುಕೋರ ಉಗ್ರರನ್ನು ಹೊಡೆದುರುಳಿಸಿದ್ದಾರೆ ಎಂದು ರಕ್ಷಣಾ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ತಿಳಿಸಿದ್ದಾರೆ.

ಹತರಾದ ಭಯೋತ್ಪಾದಕರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಗ್ರರ ನಿಗ್ರಹ ಕಾರ್ಯಾಚರಣೆಯಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದು, ಕೆಲವು ಸೈನಿಕರಿಗೆ ಗಾಯಗಳಾಗಿವೆ. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.

ಕಾಶ್ಮೀರದ ಗಡಿ ಭಾಗದಲ್ಲಿ ಭಾರೀ ಹಿಮಪಾತ ಮತ್ತು ಪ್ರತಿಕೂಲ ಹವಾಮಾನದ ಪ್ರಯೋಜನ ಪಡೆದು ಒಳ ನುಸುಳಿ ವಿಧ್ವಂಸಕ ಕೃತ್ಯ ಎಸಗಲು ಉಗ್ರರು ಯತ್ನಿಸಿದ್ದ ಸಂಗತಿ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ನಿನ್ನೆ ಬೆಳಗ್ಗೆ ಯೋಧರೊಂದಿಗೆ ನಡೆಸ ಗುಂಡಿನ ಕಾಳಗದಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದರು. ಮೃತ ಉಗ್ರಗಾಮಿಗಳಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಕಾಶ್ಮೀರ ಕಣಿವೆಯ ಕುಲ್ಗಾಮ್ ಜಿಲ್ಲೆಯ ಹರ್ದ್‍ಮಂದ್ ಗುರಿ ಗ್ರಾಮದಲ್ಲಿ ಉಗ್ರರು ಅವಿತಿಟ್ಟುಕೊಂಡಿದ್ದಾರೆ ಎಂಬ ಖಚಿತ ಸುಳಿವಿನ ಮೇರೆಗೆ ಭದ್ರತಾಪಡೆಗಳು ಆ ಪ್ರದೇಶವನ್ನು ಸುತ್ತುವರಿಯಿತು. ಇದೇ ಸಂದರ್ಭದಲ್ಲಿ ನಕ್ಸಲರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದಾಗ ಯೋಧರೂ ಪ್ರತಿ ದಾಳಿ ನಡೆಸಿದರು.

ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಅವರಿಂದ ಎಕೆ-47 ರೈಫಲ್‍ಗಳು, ಗುಂಡುಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಸೇನಾಕಾರಿಯೊಬ್ಬರು ತಿಳಿಸಿದ್ದಾರೆ.

Facebook Comments

Sri Raghav

Admin