ಬಸ್ ಪ್ರಯಾಣ ದರ ಏರಿಸಿ ಜನಸಾಮಾನ್ಯರಿಗೆ ಗಾಯದ ಮೇಲೆ ಸರ್ಕಾರ ಬರೆ ಎಳೆದಿದೆ : ಖಂಡ್ರೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.26- ಬೆಲೆ ಏರಿಕೆಯಿಂದ ಸಂತ್ರಸ್ತರಾಗಿರುವ ಜನಸಾಮಾನ್ಯರ ಗಾಯದ ಮೇಲೆ ಬಸ್ ಪ್ರಯಾಣದರ ಏರಿಕೆ ಮೂಲಕ ಬಿಜೆಪಿ ಸರ್ಕಾರ ಬರೆ ಎಳೆದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, ಜನಸಾಮಾನ್ಯರ ಮೇಲೆ ಬೆಲೆ ಏರಿಕೆ ಪ್ರಹಾರ ದಿನೇ ದಿನೇ ಹೆಚ್ಚಾಗುತ್ತಿದೆ. ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಳವಾಯ್ತು, ಡೀಸಲ್-ಪೆಟ್ರೋಲ್ ಬೆಲೆ ಏರಿಕೆಯಾಗಿದೆ. ಈಗ ಬಸ್ ಪ್ರಯಾಣ ದರ ಏರಿಕೆ ಮೂಲಕ ಮತ್ತೊಂದು ಪ್ರಹಾರ ಮಾಡಿದೆ ಎಂದು ಕಿಡಿಕಾರಿದ್ದಾರೆ.

ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಸಂಪನ್ಮೂಲ ಕ್ರೋಢೀಕರಣದಲ್ಲಿ ಭಾರೀ ಹಿನ್ನಡೆಯಾಗಿದೆ. ಕೇಂದ್ರ ಸರ್ಕಾರ ಕರ್ನಾಟಕವನ್ನು ಎರಡನೇ ದರ್ಜೆ ನಾಗರಿಕರು ಎಂಬಂತೆ ನೋಡುತ್ತಿದೆ. ಇತ್ತ ಕರ್ನಾಟಕ ಸರ್ಕಾರ ಕೂಡ ದಿವಾಳಿ ಅಂಚಿನಲ್ಲಿದೆ. ಇಂತಹ ಸಂದರ್ಭದಲ್ಲಿ ಬಸ್ ಪ್ರಯಾಣ ದರ ಏರಿಕೆ ಜನಸಾಮಾನ್ಯರನ್ನು ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷ ಬಸ್ ಪ್ರಯಾಣ ದರದ ವಿರುದ್ಧ ಸದನ ಒಳಗೆ ಹಾಗೂ ಹೊರಗೆ ಪ್ರತಿಭಟನೆ ನಡೆಸಲಿದೆ ಎಂದು ತಿಳಿಸಿದರು.

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರ ವಿಷಯದಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿ ಶಾಸಕ ಬಸವರಾಜ ಪಾಟೀಲ್ ಯತ್ನಾಳ್ ಅವರನ್ನು ಕೂಡಲೇ ಪಕ್ಷದಿಂದ ಉಚ್ಛಾಟಿಸಬೇಕೆಂದು ಈಶ್ವರ್ ಖಂಡ್ರೆ ಒತ್ತಾಯಿಸಿದ್ದಾರೆ.

ಯತ್ನಾಳ್ ಅವರ ಹೇಳಿಕೆ ಸ್ವಾತಂತ್ರ್ಯ ಸಂಗ್ರಾಮ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿದ ಅಪಮಾನ. ರಾಷ್ಟ್ರಭಕ್ತಿ ಬಗ್ಗೆ ಬಡಾಯಿಕೊಚ್ಚಿಕೊಳ್ಳುವ ಬಿಜೆಪಿ ದೊರೆಸ್ವಾಮಿಯಂತಹ ಹಿರಿಯರನ್ನು ಅಪಮಾನಿಸುತ್ತಿರುವುದು ನೋಡಿಕೊಂಡು ಸುಮ್ಮನಿರುವುದು ಹಲವು ಅನುಮಾನಗಳನ್ನು ಸೃಷ್ಟಿಸಿದೆ ಎಂದು ಹೇಳಿದ್ದಾರೆ.

Facebook Comments