“ಕಾಂಗ್ರೆಸ್ ನಾಯಕರು ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಿ “

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.2- ಕಾಂಗ್ರೆಸ್ ನಾಯಕರು ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಿ ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಸರ್ಕಾರಕ್ಕೆ ಸೂಕ್ತ ಸಹಕಾರ ನೀಡಿ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಅಶ್ವತ್ಥನಾರಾಯಣ ತಿಳಿಸಿದರು.  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ವರ್ಷ ಗೃಹ ಸಚಿವರಾಗಿ ಸೇವೆ ಸಲ್ಲಿಸಿರುವ ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾರೆ. ಅವರು ಉತ್ತಮ ಆಡಳಿತ ನೀಡಲಿದ್ದು, ಅವರಿಗೆ ಸರಿಯಾದ ಸಹಕಾರವನ್ನು ಕೊಡಿ ಎಂದರು.

75 ವರ್ಷ ತುಂಬಿದವರಿಗೆ ಅಧಿಕಾರ ಇಲ್ಲ ಎಂಬುದು ನಮ್ಮ ಪಕ್ಷದ ಸಿದ್ದಾಂತ. ಹೀಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ಅವರು ತಾವಾಗಿಯೇ ರಾಜೀನಾಮೆ ಕೊಟ್ಟಿದ್ದಾರೆ. ಕೇರಳದ ಶ್ರೀಧರನ್ ವಿಚಾರವೇ ಬೇರೆ. ಯಡಿಯೂರಪ್ಪ ಅವರನ್ನು ಬಲವಂತವಾಗಿ ಕೆಳಗಿಳಿಸಿಲ್ಲ ಎಂದು ಸಮರ್ಥಿಸಿಕೊಂಡರು.

ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ ಬಗ್ಗೆ ಮಾತನಾಡುವ ಕಾಂಗ್ರೆಸ್ ನಾಯಕರು ಅವರ ಆಡಳಿತ ಅವಧಿಯಲ್ಲಿ ಶಾಮನೂರು ಶಿವಶಂಕರಪ್ಪ ಅವರನ್ನು ಏಕೆ ಕೆಳಗಿಳಿಸಿದ್ದೀರಿ? ಅಂಬರೀಶ್ ಅವರು ಏಕೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು? ಜನಾರ್ಧನ್ ಪೂಜಾರಿ ಅವರ ವಿಚಾರದಲ್ಲಿ ಹೇಗೆ ನಡೆದುಕೊಂಡಿದ್ದೀರಿ? ಎಂದು ಪ್ರಶ್ನಿಸಿದರು.

ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್ ಅವರನ್ನು ಗೆಲ್ಲದಂತೆ ನೋಡಿಕೊಂಡಿದ್ದು ಎಷ್ಟರಮಟ್ಟಿಗೆ ಸರಿ, ಡಿಜೆಹಳ್ಳಿ, ಕೆಜೆಹಳ್ಳಿ ಗಲಾಟೆ ವಿಚಾರದಲ್ಲಿ ಶಾಸಕ ಅಖಂಡ ಶ್ರೀನಿವಾಸ್‍ಗೆ ನ್ಯಾಯ ಕೊಡಿಸಲಿಲ್ಲ, ಯುವ ಕಾಂಗ್ರೆಸ್ ಸಮಸ್ಯೆ ಸರಿಪಡಿಸಲಿಲ್ಲ. ಮೊದಲು ನಿಮ್ಮ ಸಮಸ್ಯೆಯನ್ನು ಸರಿಪಡಿಸಿಕೊಳ್ಳಿ ಎಂದು ವಾಗ್ದಾಳಿ ಮಾಡಿದರು.

ಮೆಡಿಕಲ್ ಕಿಟ್ ವಿಚಾರದಲ್ಲಿ ನಡೆದಿದೆ ಎನ್ನಲಾದ ಹಗರಣದ ಆರೋಪ ಕಾಂಗ್ರೆಸ್ ನಾಯಕರ ಆಧಾರ ರಹಿತ ಆರೋಪ. ಚರ್ಚೆಗೆ ಬಾರದೆ ಸದನವನ್ನು ಬಹಿಷ್ಕರಿಸುತ್ತಾರೆ ಎಂದು ಆರೋಪಿಸಿದರು.

Facebook Comments