ರಾಜ್ಯಾದ್ಯಂತ ಪೊಲೀಸ್ ಕಣ್ಗಾವಲಿನಲ್ಲಿ ಎಫ್‍ಡಿಎ ಪರೀಕ್ಷೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಫೆ.28-ಬಿಗಿ ಪೊಲೀಸ್ ಬಂದೋ ಬಸ್ತ್ ನಲ್ಲಿ ರಾಜ್ಯಾದ್ಯಂತ ಇಂದು ಸುಮಾರು 1054 ಕೇಂದ್ರಗಳಲ್ಲಿ ಪ್ರಥಮದರ್ಜೆ ಸಹಾಯಕ (ಎಫ್‍ಡಿಎ )ಹುದ್ದೆಗಳಿಗೆ ಪರೀಕ್ಷೆ ನಡೆಯಿತು. 1253 ಎಫ್‍ಡಿಎ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಜನವರಿ 24ರಂದು ಪರೀಕ್ಷೆ ನಡೆಯಬೇಕಿತ್ತು. ಆದರೆ ಆ ಸಂದರ್ಭದಲ್ಲಿ ಕೆಪಿಎಸ್‍ಸಿಯ ಸಿಬ್ಬಂದಿಗಳು ಸೇರಿದಂತೆ ಕೆಲವರು ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಿದ್ದರು.

ಹೀಗಾಗಿ ಪರೀಕ್ಷೆ ದಿಢೀರ್ ರದ್ದಾಗಿತ್ತು. ಆದರೆ ಈ ಬಾರಿ ಅತ್ಯಂತ ಎಚ್ಚರಿಕೆಯ ಕ್ರಮಗಳನ್ನು ಅನುಸರಿಸಿದ್ದ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‍ಸಿ), ಕರ್ನಾಟಕ ಸೆಕ್ಯೂರ್ಡ್ ಎಕ್ಸಾಮಿನೇಷನ್ ಸಿಸ್ಟಮ್ ಅಳವಡಿಸಿಕೊಂಡು ಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ತಲುಪಿಸಿದೆ.

ಮೂರು ಹಂತದ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಪ್ರಶ್ನೆ ಪತ್ರಿಕೆ ಸಾಗಾಣಿಕೆ ಮಾಡುವ ವಾಹನಗಳಿಗೆ ಜಿಪಿಎಸ್ ಅಳವಡಿಸಿ ಬಿಗಿಬಂದೋಬಸ್ತ್ ಆಯೋಜಿಸುವ ಮೂಲಕ ಸಾಕಷ್ಟು ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿತ್ತು.

ಸುಮಾರು 3.57 ಲಕ್ಷ ಮಂದಿ ಎಫ್‍ಡಿಎ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದರು. ಮೊದಲ ಹಂತದಲ್ಲಿ ಪರೀಕ್ಷೆ ರದ್ದಾಗಿದ್ದರಿಂದ 2ನೆ ಹಂತದಲ್ಲಿ ಎರಡೂವರೆ ಲಕ್ಷಕ್ಕೂ ಹೆಚ್ಚು ಪ್ರವೇಶ ಪತ್ರವನ್ನು ಡೌನ್‍ಲೋಡ್ ಮಾಡಿಕೊಂಡಿದ್ದರು. ಇಂದು ಸಿಸಿಟಿವಿ ಹಾಗೂ ಪೊಲೀಸರ ಕಣ್ಗಾವಲಿನಲ್ಲಿ 1054 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದಾರೆ.

ಬೆಂಗಳೂರಿನಲ್ಲಿ ಕೆಲವರು ತಡವಾಗಿ ಪರೀಕ್ಷಾ ಕೇಂದ್ರಕ್ಕೆ ಬಂದ ಕಾರಣಕ್ಕಾಗಿ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಯಿತು. ರಾಜ್ಯಾದ್ಯಂತ ಕೆಲವು ಕಡೆಗಳಲ್ಲಿ ಸಣ್ಣಪುಟ್ಟ ಗೊಂದಲಗಳನ್ನು ಹೊರತುಪಡಿಸಿ ಉಳಿದಂತೆ ಪರೀಕ್ಷೆ ಸುಖಾಂತ್ಯವಾಗಿ ನಡೆದಿದೆ.

Facebook Comments

Sri Raghav

Admin