ದೆಹಲಿ ಇಎಸ್‍ಐ ಆಸ್ಪತ್ರೆಯಲ್ಲಿ ಬೆಂಕಿ, ರೋಗಿಗಳಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಜು.12- ಇಎಸ್‍ಐ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಆರು ಮಂದಿ ರೋಗಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಸೈದರಾಪುರ್‍ನಲ್ಲಿರುವ ಸ್ಟೇಟ್ ಇನ್ಸುರೆನ್ಸ್ ಮಾಡೆಲ್ ಹಾಸ್ಪಿಟಲ್‍ನ ಮೂರನೇ ಮಹಡಿಯಲ್ಲಿರುವ ಆಪರೇಷನ್ ಥಿಯೇಟರ್‍ನಲ್ಲಿ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.

ಸರಿಯಾದ ಸಮಯಕ್ಕೆ ಅಗ್ನಿಶಾಮಕದವರು ಬಂದು ಬೆಂಕಿ ನಂದಿಸಿದ್ದಾರೆ. ಇದಲ್ಲದಿದ್ದರೆ ಬೆಂಕಿ ಎಲ್ಲ ಕಡೆ ಆವರಿಸಿ ಭಾರೀ ಅನಾಹುತ ಸಂಭವಿಸುತ್ತಿತ್ತು. ಈ ಸಂದರ್ಭದಲ್ಲಿ 6 ಮಂದಿ ರೋಗಿಗಳನ್ನು ರಕ್ಷಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಬೆಳಗ್ಗೆ 9.10ರಲ್ಲಿ ತಮಗೆ ಕರೆಬಂತು. ಕೂಡಲೇ 6ಕ್ಕೂ ಹೆಚ್ಚು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯ ಪ್ರಾರಂಭಿಸಿದೆವು. ಸುಮಾರು 20 ನಿಮಿಷಗಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಲಾಗಿದೆ ಎಂದು ಅಗ್ನಿಶಾಮಕ ದಳದ ಮುಖ್ಯಸ್ಥ ಅತುಲ್ ಗರ್ಗ್ ತಿಳಿಸಿದರು.

ಆಸ್ಪತ್ರೆಯಲ್ಲಿ ಬೆಂಕಿ ಹೇಗೆ ಹೊತ್ತಿಕೊಂಡಿದೆ ಎಂಬುದಕ್ಕೆ ಕಾರಣ ತಿಳಿದುಬಂದಿಲ್ಲ. ಸದ್ಯ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ ಎಂದು ಅವರು ತಿಳಿಸಿದರು.

Facebook Comments