ಉತ್ತರ ಕರ್ನಾಟಕದಲ್ಲಿ ಪ್ರವಾಹದಿಂದ 3000 ಕೋಟಿಗೂ ಅಧಿಕ ನಷ್ಟ : ಆರ್.ಅಶೋಕ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.19- ಉತ್ತರ ಕರ್ನಾಟಕದಲ್ಲಿ ಉಂಟಾದ ಭಾರೀ ಪ್ರವಾಹದಿಂದಾಗಿ ಪ್ರಾಥಮಿಕ ಅಂದಾಜಿನ ಪ್ರಕಾರ ಸುಮಾರು 3000 ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.  ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಕಲಬುರಗಿ, ರಾಯಚೂರು, ಬೀದರ್, ಬಿಜಾಪುರ, ಯಾದಗಿರಿ, ಮುಂಬೈ ಕರ್ನಾಟಕದ ಬೆಳಗಾವಿ ಸೇರಿದಂತೆ ಸುಮಾರು ಹತ್ತು ಜಿಲ್ಲೆಗಳಲ್ಲಿ ನೆರೆ ಹಾವಳಿ ಉಂಟಾಗಿ ರೈತರ ಬೆಳೆ, ಜಾನುವಾರು, ಮನೆ ಸೇರಿದಂತೆ ಸುಮಾರ 3000 ಕೋಟಿ ನಷ್ಟ ಉಂಟಾಗಿದೆ ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ಭಾರೀ ಮಳೆಯಿಂದಾಗಿ ಬೆಳಗಾವಿ, ಚಿಕ್ಕೋಡಿ ಮತ್ತಿತರ ಭಾಗಗಳಿಗೆ ವ್ಯಾಪಕ ಪ್ರಮಾಣದ ನೀರು ಹರಿದು ಬಂದ ಪರಿಣಾಮ ಬೆಳೆದು ನಿಂತ ಬೆಳೆ, ಜಾನುವಾರು, ಮನೆಗಳು ಕುಸಿದು ಬಿದ್ದಿವೆ. ಭೀಮಾ ಮತ್ತು ಕೃಷ್ಣಾನದಿಗೆ ನಿರೀಕ್ಷೆಗೂ ಮೀರಿದ ನೀರು ಬಂದ ಪರಿಣಾಮ ಪ್ರವಾಹ ಉಂಟಾಗಿ ಕೋಟ್ಯಂತರ ರೂ. ನಷ್ಟ ಉಂಟಾಗಿದೆ ಎಂದರು.

ಇನ್ನು ಒಂದು ವಾರದಲ್ಲಿ ಸಂಪೂರ್ಣ ಸಮೀಕ್ಷೆ ನಡೆಯಲಿದ್ದು, ನಷ್ಟದ ಅಂದಾಜು ತಿಳಿಯಲಿದೆ. ಸದ್ಯ ಜಿಲ್ಲಾಧಿಕಾರಿಗಳ ಖಾತೆಯಲ್ಲಿ 666 ಕೋಟಿ ಹಣ ಲಭ್ಯವಿದ್ದು, ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಯಾವುದೇ ರೀತಿಯ ಆರ್ಥಿಕ ಸಮಸ್ಯೆ ಉಂಟಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಬೆಳಗಾವಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿ 88 ಕೋಟಿ, ಕಲಬುರಗಿ 29 ಕೋಟಿ, ಯಾದಗಿರಿ 26 ಕೋಟಿ, ರಾಯಚೂರು 30 ಕೋಟಿ ಸೇರಿದಂತೆ ಒಟ್ಟು 666 ಕೋಟಿ ಹಣ ಸಂಗ್ರಹವಿದೆ ಎಂದು ಮಾಹಿತಿ ನೀಡಿದರು.

ಭಾರೀ ಪ್ರವಾಹಕ್ಕೆ ಸಿಲುಕಿ 500ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿರುವ ಸಾಧ್ಯತೆ ಇದೆ. ಅನೇಕ ಕಡೆ ಮನೆಗಳು ಕುಸಿದು ಬಿದ್ದಿವೆ. ಪರಿಹಾರ ಕಾರ್ಯ ಚುರುಕುಗೊಂಡಿದೆ. ಕೆಲವು ಕಡೆ ಸಣ್ಣಪುಟ್ಟ ಲೋಪದೋಷಗಳು ಉಂಟಾಗಿವೆ ಎಂಬುದನ್ನು ಅಶೋಕ್ ಒಪ್ಪಿಕೊಂಡರು.  ಅಗತ್ಯವಿರುವ ಕಡೆ ಪರಿಹಾರ ಕೇಂದ್ರಗಳನ್ನು ತೆರೆಯಲು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪನವರೇ ಸೂಚನೆ ಕೊಟ್ಟಿದ್ದಾರೆ. ಸದ್ಯ ವಸತಿ ನಿಲಯಗಳು ಖಾಲಿ ಇರುವುದರಿಂದ ಸಂತ್ರಸ್ತರನ್ನು ಅಲ್ಲಿಗೆ ಸ್ಥಳಾಂತರಿಸಲು ನಿರ್ದೇಶಿಸಲಾಗಿದೆ.

ಜನ-ಜಾನುವಾರು, ಮಹಿಳೆಯರು, ಮಕ್ಕಳು ಸೇರಿದಂತೆ ಪ್ರತಿಯೊಬ್ಬರನ್ನು ರಕ್ಷಣೆ ಮಾಡಬೇಕೆಂದು ನಿರ್ದೇಶಿಸಲಾಗಿದೆ. ಹಣಕಾಸಿನ ಸಮಸ್ಯೆ ಮುಂದಿಟ್ಟುಕೊಂಡು ಪರಿಹಾರ ವಿಳಂಬ ಮಾಡಿದರೆ ಅಂತಹ ಅಧಿಕಾರಿಗಳ ವಿರುದ್ದ ಶಿಸ್ತುಕ್ರಮ ಜರುಗಿಸುವುದಾಗಿ ಎಚ್ಚರಿಸಿದರು.  ಸದ್ಯ ಆಶ್ರಯ ಕೇಂದ್ರಗಳಲ್ಲಿ 8 ಸಾವಿರ ಮಂದಿಗೆ ಆಶ್ರಯ ನೀಡಿದ್ದೇವೆ. ಪ್ರತಿಯೊಬ್ಬರಿಗೂ ಪೌಷ್ಟಿಕ ಆಹಾರ ನೀಡಬೇಕೆಂದು ಸೂಚಿಸಲಾಗಿದೆ. ಜೊತೆಗೆ ಎಲ್ಲರಿಗೂ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಥರ್ಮಲ್ ಪರೀಕ್ಷೆ, ವೈದ್ಯರ ನಿಯೋಜನೆ ಸೇರಿದಂತೆ ಹತ್ತು ಹಲವು ಕ್ರಮಗಳನ್ನು ಕೈಗೊಂಡಿದ್ದೇವೆ ಎಂದರು.

ಸರ್ಕಾರ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ವಿಫಲವಾಗಿದೆ ಎಂಬ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ತಿರುಗೇಟು ನೀಡಿದ ಅಶೋಕ್ ಅವರು ಯಾವ ನೈತಿಕತೆ ಇಟ್ಟುಕೊಂಡು ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.  ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಅನೇಕ ಕಡೆ ಬರಗಾಲ ಬಂದಿತ್ತು.

ಆ ವೇಳೆ ಅವರೂ ಸೇರಿದಂತೆ ಸಂಪುಟದ ಸಹೋದ್ಯೋಗಿಗಳು ಯಾವ ರೀತಿ ಬರ ನಿರ್ವಹಣೆ ಮಾಡಿದ್ದಾರೆ ಎಂಬುದು ರಾಜ್ಯದ ಜನತೆಗೆ ಗೊತ್ತು. ಈಗಾಗಲೇ ನಮ್ಮ ಮುಖ್ಯಮಂತ್ರಿ ಸೇರಿದಂತೆ ಅನೇಕರು ಜಿಲ್ಲಾಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಪರಿಹಾರ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸುತ್ತಿದ್ದೇವೆ.
ಅಸ್ತಿತ್ವ ಉಳಿಸಿಕೊಳ್ಳಲು ಸಿದ್ದರಾಮಯ್ಯ ನಮ್ಮ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ. ಇಂತಹ ಆರೋಪಗಳಿಗೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು.

Facebook Comments