ನಿಗದಿತ ಅವಧಿಯೊಳಗೆ ಸ್ಮಾರ್ಟ್ ಸಿಟಿ ಯೋಜನೆ ಪೂರ್ಣಗೊಳ್ಳದಿದ್ದರೆ ಗುತ್ತಿಗೆದಾರರ ವಿರುದ್ಧ ಕ್ರಮ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.17- ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳನ್ನು ನಿಗದಿತ ಕಾಲದೊಳಗೆ ಪೂರ್ಣಗೊಳಿಸದಿದ್ದರೆ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತ ಎಚ್ಚರಿಕೆ ನೀಡಿದ್ದಾರೆ. ನಗರದ ವಿವಿಧ ಪ್ರದೇಶಗಳಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಯೋಜನಾ ಕಾಮಗಾರಿಗಳ ಪ್ರದೇಶಕ್ಕೆ ಬೆಳ್ಳಂ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸುಮಾರು 200 ಕೋಟಿ ರೂ. ವೆಚ್ಚದಲ್ಲಿ ರೇಸ್ ಕೋರ್ಸ್, ರಾಜಭವನ, ಪ್ಲಾನಿಟೋರಿಯಂ ರಸ್ತೆ ಸೇರಿದಂತೆ 14 ಕಡೆ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿದ ನಂತರ ಅವರು ಮಾತನಾಡಿದರು. ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ನಿಗದಿತ ಕಾಲಾವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ತಾಕೀತು ಮಾಡಿದರು.

ಗುತ್ತಿಗೆದಾರರಿಗೆ ನಾನು ಹೊಸ ಗಡುವು ನೀಡುವುದಿಲ್ಲ. ಗುತ್ತಿಗೆ ನಿಯಮಗಳಲ್ಲಿರುವಂತೆ ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು. ಇಲ್ಲದಿದ್ದಲ್ಲಿ ಅಂತಹ ಗುತ್ತಿಗೆದಾರರ ವಿರುದ್ಧ ಇಂಜಿನಿಯರ್‍ಗಳು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಎಚ್ಚರಿಕೆ ನೀಡಿದರು. ಸ್ಮಾರ್ಟ್ ಸಿಟಿ ಎಂಡಿ ಹೆಬ್ಸಿಬಾ ರಾಣಿ, ಮುಖ್ಯ ಎಂಜಿನಿಯರ್ ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.

Facebook Comments