ಸಾರ್ವಜನಿಕ ಸಮಾರಂಭಗಳ ಮೇಲೆ ತೀವ್ರ ನಿಗಾ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.30- ಕೋವಿಡ್ ಮೂರನೆ ಅಲೆ ಭೀತಿ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿ ನಡೆಯುವ ಸಾರ್ವಜನಿಕ ಸಮಾರಂಭಗಳು ಸೇರಿದಂತೆ ಇನ್ನಿತರ ಕಡೆಗಳಲ್ಲಿ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಕುರಿತು ಬಿಬಿಎಂಪಿ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದರು.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ನೇತೃತ್ವದಲ್ಲಿ ಈಗಾಗಲೇ ಸಭೆ ನಡೆಸಲಾಗಿದ್ದು, ಕೋವಿಡ್ ಸೋಂಕಿನ ಬದಲಾವಣೆ ಮೇಲೆ ಕೆಲ ಮಾರ್ಗಸೂಚಿಗಳ ಜಾರಿಗೆ ಚಿಂತನೆ ನಡೆಸಲಾಗಿದೆ. ಅದರಂತೆ ಸರ್ಕಾರ ಸೂಚಿಸುವ ಮಾರ್ಗಸೂಚಿ, ಸಲಹೆಗಳನ್ನು ಬಿಬಿಎಂಪಿ ಜಾರಿಗೊಳಿಸಲಿದೆ ಎಂದರು.

ಒಳಾಂಗಣ ಹಾಗೂ ಹೊರಾಂಗಣ ಕಾರ್ಯಕ್ರಮ, ಸಮಾರಂಭಗಳಿಗೆ ನಿರ್ಬಂಧ ಹೇರುವ ಕುರಿತು ಯಾವುದೇ ಅಧಿಕೃತ ಆದೇಶ ಹೊರಡಿಸಿಲ್ಲ.ಆದರೆ, ಭಾರೀ ಸಂಖ್ಯೆಯಲ್ಲಿ ಜನ ಜಮಾವಣೆಗೊಳ್ಳುವುದರ ಬಗ್ಗೆ ಬಿಬಿಎಂಪಿ ಅಧಿಕಾರಿಗಳು ನಿಗಾ ವಹಿಸಲಿದ್ದಾರೆ ಎಂದು ತಿಳಿಸಿದರು.

ಕಳೆದ ವಾರದಿಂದ ಸೋಂಕಿಗೆ ಪ್ರಮಾಣ ದ್ವಿಗುಣಗೊಂಡಿದೆ. ಇದರಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ ಎಂದ ಅವರು, ತಾಂತ್ರಿಕ ಸಲಹಾ ಸಮಿತಿಯೂ ರಾಜ್ಯ ಸರ್ಕಾರಕ್ಕೆ ಯಾವ್ಯಾವ ಸಲಹೆಗಳನ್ನು ನೀಡಿದೆ ಎಂಬುದು ನಮಗೆ ಗೊತ್ತಾಗುವುದಿಲ್ಲ. ಆದರೆ, ಸರ್ಕಾರದ ಆದೇಶ ಪಾಲನೆ ಮಾಡುತ್ತೇವೆ ಎಂದು ಗೌರವ್ ಗುಪ್ತ ನುಡಿದರು.

Facebook Comments