ಕೋವಿಶೀಲ್ಡ್ ಲಸಿಕೆಯ 2ನೇ ಡೋಸ್ ಪಡೆದ ರಾಜ್ಯಪಾಲರು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.15- ಕೊರೊನಾ ಸೋಂಕಿನ ನಿಯಂತ್ರಣಕ್ಕೆ ರಾಜ್ಯಪಾಲ ವಜುಭಾಯಿವಾಲಾ ಅವರು ಎರಡನೇ ಹಂತದ ಲಸಿಕೆಯನ್ನು ಇಂದು ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಪಡೆದುಕೊಂಡಿದ್ದಾರೆ. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಬಿ.ಆರ್.ವೆಂಕಟೇಶಯ್ಯ ಅವರ ಉಸ್ತುವಾರಿಯಲ್ಲಿ ಶುಶ್ರೂಷಕರಾದ ವೇದಾ ಅವರು ರಾಜ್ಯಪಾಲರಿಗೆ ಕೋವಿಶೀಲ್ಡ್‍ನ ಎರಡನೇ ಹಂತದ ಲಸಿಕೆ ನೀಡಿದರು.

ನಂತರ ಸುದ್ದಿಗಾರರ ಜತೆ ಮಾತನಾಡಿದ ರಾಜ್ಯಪಾಲರು, ಕೊರೊನಾ ಸೋಂಕಿನ ನಿಯಂತ್ರಣಕ್ಕೆ ರಾಜ್ಯದ ನಾಗರೀಕರು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. 45 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆಯಬೇಕು ಎಂದು ಕರೆ ನೀಡಿದ್ದಾರೆ.

ಲಸಿಕೆ ಉಚಿತವಾಗಿ ಲಭ್ಯವಾಗುತ್ತಿದ್ದು, ಸುರಕ್ಷಿತವಾಗಿದೆ. ಕೊರೊನಾ ನಿಯಂತ್ರಣಕ್ಕಾಗಿ ಎಲ್ಲರೂ ಲಸಿಕೆ ಪಡೆಯುವುದು ಅಗತ್ಯವಿದೆ ಎಂದು ಹೇಳಿದರು.ಸೋಂಕಿನ ನಿಯಂತ್ರಣಕ್ಕಾಗಿ ಸರ್ಕಾರ ರೂಪಿಸಿರುವ ಮಾರ್ಗಸೂಚಿಗಳನ್ನು ಎಲ್ಲರೂ ಪಾಲನೆ ಮಾಡಬೇಕು.

ಕೈಗಳನ್ನು ಆಗಾಗ್ಗೆ ತೊಳೆದುಕೊಂಡು, ಸಾಮಾಜಿಕ ಅಂತರ ಕಾಪಾಡಿಕೊಂಡು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಸಲಹೆ ನೀಡಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ವೈದ್ಯರು, ವಿಜ್ಞಾನಿಗಳು ಹಗಲಿರುಳು ಶ್ರಮಿಸುತ್ತಿರುವುದನ್ನು ಮನವರಿಕೆ ಮಾಡಿಕೊಂಡು ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.

Facebook Comments

Sri Raghav

Admin