‘ಸೋತವರಿಗೆ ಮಂತ್ರಿ ಸ್ಥಾನ ನೀಡುವುದು ಹೈಕಮಾಂಡ್ ನಿರ್ಧಾರ’

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜ.30- ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣರಾದವರು ಹಾಗೂ ವಿಧಾನಸಭೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತವರಿಗೆ ಮಂತ್ರಿಸ್ಥಾನ ನೀಡಬೇಕೇ ಬೇಡವೇ ಎಂಬ ಬಗ್ಗೆ ಬಿಜೆಪಿ ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು.

ವಿಧಾನಸೌಧ ಹಾಗೂ ವಿಕಾಸಸೌಧದ ನಡುವೆ ಇರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಸರ್ವೋದಯ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿ ಮೌನಾಚರಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

ಹಾಲಿ ಇರುವ ಮೂರು ಉಪ ಮುಖ್ಯಮಂತ್ರಿಗಳನ್ನು ಮುಂದುವರೆಸುವುದು, ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಎಲ್ಲಾ ವಿಚಾರಗಳ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ. ನಾವು ಪಕ್ಷದ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದು ಹೇಳಿದರು.

ಸಚಿವ ಸಂಪುಟ ವಿಸ್ತರಣೆ ವಿಳಂಬವಾಗಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ದೆಹಲಿಯಲ್ಲಿ ಇಂದು ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆಯ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ. ಸಂಪುಟ ವಿಸ್ತರಣೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಈಗಾಗಲೇ ಮುಖ್ಯಮಂತ್ರಿಯವರು ಎರಡು, ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳಿದ್ದಾರೆ.

ಅದರಂತೆ ನಡೆದುಕೊಳ್ಳಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷವೆಂದರೆ ತಾಯಿ ಇದ್ದಂತೆ ಪಕ್ಷ ತೆಗೆದುಕೊಳ್ಳುವ ನಿರ್ಣಯಕ್ಕೆ ಎಲ್ಲರೂ ಬದ್ಧರಾಗಿರಬೇಕು. ಇದರಲ್ಲಿ ಯಾವುದೇ ಸಂದೇಹ ಬೇಡ ಎಂದರು.

Facebook Comments

Sri Raghav

Admin