ಗುಲ್ಬರ್ಗ ವಿವಿಯಲ್ಲಿ ಏರ್ಪಡಿಸಿದ್ದ ಕನ್ಹಯ್ಯ ಕುಮಾರ್ ಉಪನ್ಯಾಸ ಕಾರ್ಯಕ್ರಮ ರದ್ದು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.15-ತೀವ್ರ ವಿವಾದಕ್ಕೆ ಗುರಿಯಾದ ಹಿನ್ನೆಲೆಯಲ್ಲಿ ಕಲ್ಬುರ್ಗಿ ವಿವಿಯಲ್ಲಿ ಏರ್ಪಡಿಸಲಾಗಿದ್ದ ಜೆಎನ್‍ಯು ವಿದ್ಯಾರ್ಥಿ ಸಂಘದ ಮಾಜಿ ನಾಯಕ ಕನ್ಹಯ್ಯಕುಮಾರ್ ಅವರ ಉಪನ್ಯಾಸ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ. ನಿನ್ನೆಯಷ್ಟೇ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪರಿಮಳ ಅಂಬೇಕರ್ ಅವರು ಇಂದು ನಡೆಸಲು ಉದ್ದೇಶಿಸಲಾಗಿದ್ದ ಕನ್ಹಯ್ಯಕುಮಾರ್ ಉಪನ್ಯಾಸ ಕಾರ್ಯಕ್ರಮಕ್ಕೆ ಕೆಲವು ಷರತ್ತುಗಳನ್ನು ವಿಧಿಸಿ ಅನುಮತಿ ನೀಡಿದ್ದರು.

ಆದರೆ ಇದಕ್ಕೆ ಶ್ರೀರಾಮಸೇನೆ, ಹಿಂದೂಪರ ಹಾಗೂ ಕೆಲವು ಬಿಜೆಪಿ ಸಂಸದರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.  ಕನ್ನಯ್ಯಕುಮಾರ್ ಕಾರ್ಯಕ್ರಮಕ್ಕೆ ಅನುಮತಿ ನೀಡಿದರೆ ಇದಕ್ಕೆ ಪ್ರತಿಯಾಗಿ 15ರಂದು ವಿವಿ ಆವರಣದಲ್ಲಿ ಕುಲಪತಿಗಳ ತೀರ್ಮಾನವನ್ನು ವಿರೋಧಿಸಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದರು.

ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಇದು ತೀವ್ರ ವಿವಾದಕ್ಕೆ ಕಾರಣವಾಗಬಹುದೆಂಬ ಕಾರಣಕ್ಕೆ ವಿವಿ ತನ್ನ ತೀರ್ಮಾನವನ್ನು ಹಿಂದಕ್ಕೆ ಪಡೆದಿದೆ. ಇಂದು ಗುಲ್ಬರ್ಗ ವಿವಿಯ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ, ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಒಕ್ಕೂಟದಿಂದ ಡಾ.ಬಿ.ಆರ್.ಅಂಬೇಡ್ಕರ್ ಕಂಡ ಆಧುನಿಕ ಭಾರತ ನಿರ್ಮಾಣದಲ್ಲಿ ಯುವಕರ ಪಾತ್ರ ಎಂಬ ವಿಷಯದ ಬಗ್ಗೆ ಉಪನ್ಯಾಸ ಏರ್ಪಡಿಸಲಾಗಿತ್ತು.

ಆದರೆ ಕನ್ಹಯ್ಯಕುಮಾರ್ ಬಲಪಂಥೀಯ ವಿಚಾರಧಾರೆಗಳನ್ನು ಪ್ರಬಲವಾಗಿ ವಿರೋಧ ವ್ಯಕ್ತಪಡಿಸುತ್ತಿರುವುದರಿಂದ ಕೆಲವು ಹಿಂದೂಪರ ಸಂಘಟನೆಗಳು ಇವರ ಉಪನ್ಯಾಸಕ್ಕೆ ವಿರೋಧ ವ್ಯಕ್ತಪಡಿಸಿದ್ದವು.

Facebook Comments