“ನಾನೇಕೆ ಸಚಿವನಾಗಬಾರದು..?”

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.8- ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ಸಂಪುಟಕ್ಕೆ ನಾನೇಕೆ ಸೇರ್ಪಡೆಯಾಗಬಾರದು ಎಂದು ವಿಧಾನಪರಿಷತ್ ಸದದಸ್ಯ ಹಾಗೂ ಮಾಜಿ ಸಚಿವ ಎಚ್.ವಿಶ್ವನಾಥ್ ಪ್ರಶ್ನಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯಾದರೆ ನೀವು ಕೂಡ ಆಕಾಂಕ್ಷಿಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಹೌದು. ನಾನು ಪ್ರಬಲ ಆಕಾಂಕ್ಷಿ. ನಾನೇಕೆ ಸಚಿವನಾಗಬಾರದು ಎಂದು ಮರು ಪ್ರಶ್ನೆ ಮಾಡಿದರು.

ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು, ಅವರು ಯಾವಾಗ ವಿಸ್ತರಣೆ ಮಾಡುತ್ತಾರೆ ಎಂಬ ಮಾಹಿತಿ ನನಗೆ ಗೊತ್ತಿಲ್ಲ. ಒಂದು ವೇಳೆ ನನಗೆ ಅವಕಾಶ ಕೊಟ್ಟರೆ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಹೇಳಿದರು. ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ದಿನದಿಂದ ದಿನಕ್ಕೆ ಹೊಸ ಹೊಸ ಸ್ವರೂಪ ಪಡೆದುಕೊಳ್ಳುತ್ತಿದೆ.

ಈ ಹಿಂದೆ ಪಂಜಾಬ್‍ನಲ್ಲಿ ಅಲ್ಲಿನ ಯುವ ಜನತೆಯನ್ನು ಡ್ರಗ್ಸ್ ಬಲಿ ಪಡೆದಿತ್ತು. ಪೊಲೀಸ್ ಇಲಾಖೆ ಇನ್ನೂ ಎಚ್ಚೆತ್ತುಕೊಳ್ಳಬೇಕಾದ ಸಮಯ ಬಂದಿದೆ ಎಂದು ಅವರು ತಿಳಿಸಿದರು. ಎಲ್ಲಿಂದ ಡ್ರಗ್ಸ್ ಬರುತ್ತದೆ, ಯಾರು ಮಾರಾಟ ಮಾಡುತ್ತಾರೆ, ಯಾರು ಸೇವಿಸುತ್ತಾರೆ ಎಂಬುದರ ಬಗ್ಗೆ ಪೊಲೀಸರಿಗೆ ಸಂಪೂರ್ಣ ಮಾಹಿತಿ ಇದೆ.

ಪೊಲೀಸ್ ಇಲಾಖೆಯಿಂದ ಮಾತ್ರ ಇದನ್ನು ತಡೆಗಟ್ಟಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಸರ್ಕಾರ ಕೂಡ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಯಾರೇ ಇರಲಿ, ಎಷ್ಟೇ ಪ್ರಭಾವಿಗಳಿರಲಿ ಯಾವುದೇ ಒತ್ತಡಕ್ಕೆ ಮಣಿಯದೆ ಮಟ್ಟಹಾಕಬೇಕೆಂದು ವಿಶ್ವನಾಥ್ ಆಗ್ರಹಿಸಿದರು.

Facebook Comments