ಎಚ್‍ಎಎಲ್ ಪೊಲೀಸ್ ಠಾಣೆಯ ಅಧಿಕಾರಿಗಳು-ಸಿಬ್ಬಂದಿ ಸೇರಿದಂತೆ 12 ಮಂದಿಗೆ ಕೊರೊನಾ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.7- ವೈಟ್‍ಫೀಲ್ಡ್ ವಿಭಾಗದ ಎಚ್‍ಎಎಲ್ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿದಂತೆ 12 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಸೋಂಕಿತರೆಲ್ಲರೂ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈಟ್‍ಫೀಲ್ಡ್ ವಿಭಾಗದ ಡಿಸಿಪಿ ಅನುಚೇತ್ ಈ ಸಂಜೆಗೆ ತಿಳಿಸಿದ್ದಾರೆ.

ಕಳೆದ ಜೂ.27ರಂದು ಈ ಠಾಣೆಯ ಸಿಬ್ಬಂದಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಆ ಠಾಣೆಯನ್ನು ಸೀಲ್‍ಡೌನ್ ಮಾಡಿ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ಕೋವಿಡ್-19 ಪರೀಕ್ಷೆಗೆ ಒಳಪಟ್ಟಿದ್ದರು. ಇದೀಗ ಈ ಠಾಣೆಯ ಇನ್ಸ್‍ಪೆಕ್ಟರ್ ಮತ್ತು ಸಬ್‍ಇನ್ಸ್‍ಪೆಕ್ಟರ್ ಸೇರಿದಂತೆ 10 ಮಂದಿಗೆ ಸೋಂಕು ಇರುವುದು ಪತ್ತೆಯಾಗಿದೆ.

ನಿನ್ನೆ ಒಂದೇ ದಿನ ಈ ವಿಭಾಗದಲ್ಲಿ 15 ಮಂದಿ ಪೊಲೀಸ್ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಒಟ್ಟಾರೆ ಈ ವಿಭಾಗದಲ್ಲಿ ಈವರೆಗೂ 27 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಅವರೆಲ್ಲರೂ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅನುಚೇತ್ ತಿಳಿಸಿದ್ದಾರೆ.

Facebook Comments