“ಸತತ 5 ಬಾರಿ ಶಾಸಕರಾದ ಹಾಲಾಡಿ ಶ್ರೀನಿವಾಸಶೆಟ್ಟಿ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡಿ “

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.22-ಉಡುಪಿ ಜಿಲ್ಲೆ ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಸತತ 5 ಬಾರಿ ಗೆದ್ದಿರುವ ಬಿಜೆಪಿಯ ಹಿರಿಯ ಮುಖಂಡ ಹಾಗೂ ಸಜ್ಜನ ರಾಜಕಾರಣಿ ಹಾಲಾಡಿ ಶ್ರೀನಿವಾಸಶೆಟ್ಟಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಬೆಂಗಳೂರು ಬಂಟರ ಸಂಘ ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಂಟರ ಸಂಘದ ಅಧ್ಯಕ್ಷ ಆರ್.ಉಪೇಂದ್ರಶೆಟ್ಟಿ , ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಸತತ 5 ಬಾರಿ ಗೆದ್ದು ದಾಖಲೆ ನಿರ್ಮಿಸಿರುವ ಹಾಗೂ ಈ ಭಾಗದ ಕುಂದಾಪುರದ ವಾಜಪೇಯಿ ಎಂದೇ ಖ್ಯಾತಿ ಹೊಂದಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಹಿರಿತನವನ್ನು ಪರಿಗಣಿಸದಿರುವುದು ಇಡೀ ಬಂಟ ಸಮುದಾಯಕ್ಕೆ ಮಾಡಿದ ಅವಮಾನ ಎಂದು ದೂರಿದರು.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಕಾಸರಗೋಡು, ಕೇರಳ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಬಂಟ ಸಮುದಾಯವು ತಮ್ಮದೇ ಆದ ಛಾಪು ಮೂಡಿಸಿದೆ. ಶೈಕ್ಷಣಿಕ , ಸಾಮಾಜಿಕ , ಔದ್ಯೋಗಿಕ, ಸಾಂಸ್ಕøತಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲೂ ಬಂಟ ಸಮುದಾಯ ಸೇವೆ ಸಲ್ಲಿಸುತ್ತಾ ಬಂದಿದೆ. ಆದರೂ ಈ ಸಮುದಾಯವನ್ನು ಕಡೆಗಣಿಸಿರುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ಹಾಲಾಡಿ ಶ್ರೀನಿವಾಸಶೆಟ್ಟಿ ಅವರು ಸಜ್ಜನ ರಾಜಕಾರಣಿ ಎಂದೇ ಗುರುತಿಸಿಕೊಂಡವರು. ಎಂದಿಗೂ ಪಕ್ಷವಿರೋಧಿ ಚಟುವಟಿಕೆ ನಡೆಸಿದವರಲ್ಲ. ಪಕ್ಷದ ಶಿಸ್ತನ್ನು ಉಲ್ಲಂಘಿಸಿದವರಲ್ಲ. ಮುಖ್ಯಮಂತ್ರಿ ಯಡಿಯೂರಪ್ಪನವರು ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳುತ್ತಾರೆಂಬ ನಿರೀಕ್ಷೆ ಇತ್ತು. ಯಾವ ಕಾರಣಕ್ಕಾಗಿ ಮಂತ್ರಿ ಸ್ಥಾನ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಮುಖ್ಯಮಂತ್ರಿ ಯಡಿಯೂರಪ್ಪ ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ನಳೀನ್‍ಕುಮಾರ್ ಕಟೀಲ್ ಅವರು ಸಂಪುಟಕ್ಕೆ ತೆಗೆದುಕೊಳ್ಳುವಂತೆ ವರಿಷ್ಠರಿಗೆ ಮನವಿ ಮಾಡಬೇಕು. ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಬಿಜೆಪಿಯ ಭದ್ರಕೋಟೆಯಾಗಿದೆ. ಹಾಲಾಡಿ ಅವರನ್ನು ಕಡೆಗಣಿಸಿರುವುದರಿಂದ ನಿಷ್ಠಾವಂತ ಬಿಜೆಪಿ ಕಾರ್ಯಕರ್ತರು ಕೂಡ ಬೇಸರಗೊಂಡಿದ್ದಾರೆ. ಅವರಿಗೆ ಮಂತ್ರಿ ಸ್ಥಾನ ನೀಡದಿದ್ದರೆ ಬಂಟ ಸಮುದಾಯ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠಕಲಿಸಲಿದೆ ಎಂದು ಎಚ್ಚರಿಸಿದರು.

ಶುಕ್ರವಾರ ಬೆಳಗ್ಗೆ 9.30 ರಿಂದ 10ಗಂಟೆಯವರೆಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮೌನ ಪ್ರತಿಭಟನೆ ನಡೆಸಲಾಗುವುದು. ದಕ್ಷಿಣ ಕನ್ನಡ, ಉಡುಪಿ, ಕರಾವಳಿ ಸೇರಿದಂತೆ ಎಲ್ಲಾ ಸಂಘಟನೆಗಳ ಮುಖಂಡರು ಪಕ್ಷಾತೀತವಾಗಿ ಬೆಂಬಲಿಸಬೇಕೆಂದು ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಸಂಘದ ಗೌರವಕಾರ್ಯದರ್ಶಿ ಮಧುಕರ ಎಂ.ಶೆಟ್ಟಿ ಮತ್ತಿತರರು ಹಾಜರಿದ್ದರು.

Facebook Comments

Sri Raghav

Admin