ಸರ್ಕಾರಿ ಕಾರ್ಯಕ್ರಮಗಳಿಗೆ ಮಾಧ್ಯಮದವರ ನಿರ್ಬಂಧ : ಎಚ್‍ಡಿಡಿ ಖಂಡನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.13- ಸರ್ಕಾರಿ ಕಾರ್ಯಕ್ರಮಗಳಿಗೆ ಮಾಧ್ಯಮದವರನ್ನು ನಿರ್ಬಂಧಿಸಿರುವುದನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಖಂಡಿಸಿದ್ದಾರೆ. ಜೆಡಿಎಸ್ ಕಚೇರಿಯಲ್ಲಿಂದು ಹಮ್ಮಿಕೊಂಡಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಕಾರ್ಯಕ್ರಮಗಳಿಗೆ ಮಾಧ್ಯಮಗಳನ್ನು ನಿರ್ಬಂಧಿಸಲಾಗಿದೆ ಎಂಬ ವಿಷಯ ಕೇಳಿ ನೋವಾಗಿದೆ. ಈ ಸಂಬಂಧ ಮುಖ್ಯಮಂತ್ರಿಗಳಿಗೆ ಪತ್ರ ಬರೆಯುತ್ತೇನೆ ಎಂದು ಹೇಳಿದರು.

ಒಂದು ವೇಳೆ ಮಾಧ್ಯಮಗಳನ್ನು ನಿರ್ಬಂಧಿಸುವ ಪ್ರವೃತ್ತಿ ಮುಂದುವರಿದರೆ, ಮಾಧ್ಯಮದವರೊಂದಿಗೆ ಸೇರಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗುವುದು ಎಂದು ಎಚ್ಚರಿಸಿದರು.
ಅಧಿವೇಶನಕ್ಕೆ ಮಾಧ್ಯಮದವರನ್ನು ನಿರ್ಬಂಧಿಸಲಾಗಿದೆ ಎಂದು ತಿಳಿದುಕೊಂಡಿದ್ದೆ.

ಆದರೆ ಸರ್ಕಾರಿ ಕಾರ್ಯಕ್ರಮಗಳಿಗೂ ನಿರ್ಬಂಧಿಸಿದರೆ ಹೇಗೆ ಎಂದು ಪ್ರಶ್ನಿಸಿದ ದೇವೇಗೌಡರು ನಾನು ಸದಾ ಮಾಧ್ಯಮದವರೊಂದಿಗೆ ಇರುತ್ತೇನೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶಾಸಕ ಎ.ಟಿ.ರಾಮಸ್ವಾಮಿ, ಮಾಜಿ ಉಪ ಮಹಾಪೌರ ಭದ್ರೆಗೌಡ, ನಗರ ಜೆಡಿಎಸ್ ಘಟಕದ ಅಧ್ಯಕ್ಷ ಆರ್.ಪ್ರಕಾಶ್ ಮತ್ತಿತರರು ಪಾಲ್ಗೊಂಡಿದ್ದರು.

ಚುನಾವಣೆಗೆ ಜೆಡಿಎಸ್ ಸಿದ್ಧತೆ : ಬೆಂಗಳೂರು, ಅ.13- ರಾಜ್ಯ ವಿಧಾನ ಮಂಡಲದ ಅಧಿವೇಶನ ಮುಗಿದ ಬೆನ್ನಲ್ಲೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಚುನಾವಣಾ ಸಿದ್ಧತೆ ಆರಂಭಿಸಿದ್ದಾರೆ. ಮುಂಬರುವ ರಾಜ್ಯ ವಿಧಾನಸಭೆ ಉಪಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಪಕ್ಷದ ಮುಖಂಡರ ಸಭೆಯನ್ನು ನಡೆಸಿದರು.

ಜೆಪಿ ಭವನದಲ್ಲಿಂದು ಕೆ.ಆರ್.ಪೇಟೆ, ಹುಣಸೂರು ಕ್ಷೇತ್ರಗಳ ಜೆಡಿಎಸ್ ಮುಖಂಡರ ಸಭೆ ನಡೆಸಿ ಅಭ್ಯರ್ಥಿಗಳ ಆಯ್ಕೆ ಮತ್ತು ಚುನಾವಣೆ ಸಿದ್ಧತೆ, ಕಾರ್ಯತಂತ್ರಗಳ ಬಗ್ಗೆ ಸಮಾಲೋಚನೆ ನಡೆಸಿದರು. ಅಧಿವೇಶನಕ್ಕೆ ಮುಂಚೆ ಕೂಡ ಅನರ್ಹಗೊಂಡ ಶಾಸಕರ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಪಕ್ಷದ ಮುಖಂಡರ ಸಭೆ ನಡೆಸಿದ್ದರು.

ಕಳೆದ ಲೋಕಸಭೆ ಚುನಾವಣೆ ನಂತರ ಸರಣಿ ಸಭೆಗಳನ್ನು ನಡೆಸುತ್ತಿರುವ ಗೌಡರು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು ಉಪಚುನಾವಣೆಗೆ ಸಂಬಂಧಿಸಿದಂತೆ ಪಕ್ಷವನ್ನು ಸಜ್ಜುಗೊಳಿಸುತ್ತಿದ್ದಾರೆ.

Facebook Comments