ಗುರು-ಶಿಷ್ಯರ ಶಕ್ತಿ ಪ್ರದರ್ಶನ

ಈ ಸುದ್ದಿಯನ್ನು ಶೇರ್ ಮಾಡಿ

ಮಂಡ್ಯ/ಮೈಸೂರು, ಏ.12-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡ್ಯ-ಮೈಸೂರು ಲೋಕಸಭಾ ಕ್ಷೇತ್ರಗಳಲ್ಲಿ ಜಂಟಿ ಚುನಾವಣಾ ಪ್ರಚಾರವನ್ನು ಕೈಗೊಂಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಗುರು-ಶಿಷ್ಯರಿಬ್ಬರು ಜಂಟಿ ಚುನಾವಣಾ ಪ್ರಚಾರವನ್ನು ಕೈಗೊಂಡಿದ್ದು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡುತ್ತಿದ್ದಾರೆ. ಬೆಳಗ್ಗೆಯಿಂದ ಸಂಜೆಯವರೆಗೂ ನಿರಂತರವಾಗಿ ವಿವಿಧ ಲೋಕಸಭಾ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಂಡು ಮೈತ್ರಿ ಅಭ್ಯರ್ಥಿಗಳ ಪರವಾಗಿ ರೋಡ್‍ಶೋ, ಬಹಿರಂಗ ಸಮಾವೇಶಗಳಲ್ಲಿ ಪಾಲ್ಗೊಂಡು ಮತ ಯಾಚನೆಯಲ್ಲಿ ತೊಡಗಿದ್ದಾರೆ.

ಇಂದು ಬೆಳಗ್ಗೆ ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ನಾಗಮಂಗಲದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ದೇವೇಗೌಡರು ಮತ್ತು ಸಿದ್ದರಾಮಯ್ಯ ಅವರು ಮೈತ್ರಿ ಅಭ್ಯರ್ಥಿ ನಿಖಿಲ್‍ಕುಮಾರಸ್ವಾಮಿ ಪರವಾಗಿ ಚುನಾವಣಾ ಪ್ರಚಾರ ಕೈಗೊಂಡಿದ್ದರು.

ಬಿಜೆಪಿಯನ್ನು ಸೋಲಿಸಿ ಮೈತ್ರಿ ಅಭ್ಯರ್ಥಿಗಳನ್ನು ಹೆಚ್ಚು ಗೆಲ್ಲಿಸಬೇಕೆಂಬ ಉದ್ದೇಶದಿಂದಲೇ ಕಾಂಗ್ರೆಸ್-ಜೆಡಿಎಸ್ ಪ್ರಸಕ್ತ ಚುನಾವಣೆಯಲ್ಲಿ ಒಗ್ಗೂಡಿವೆ. ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು ಸ್ಥಳೀಯ ಭಿನ್ನಾಭಿಪ್ರಾಯಗಳನ್ನು ಮರೆತು ಮೈತ್ರಿ ಅಭ್ಯರ್ಥಿ ಗೆಲುವಿಗೆ ಶಕ್ತಿ ಮೀರಿ ಶ್ರಮಿಸಬೇಕು ಎಂದು ಕರೆ ನೀಡಿದರು.

ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಂದಿನಂತೆ ಇಲ್ಲೂ ಕೂಡ ವಾಗ್ದಾಳಿ ನಡೆಸಿ ರಾಜ್ಯ ಸರ್ಕಾರ ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳನ್ನು ಜನರಿಗೆ ಮನವರಿಕೆ ಮಾಡಿಕೊಟ್ಟು ಮೈತ್ರಿ ಅಭ್ಯರ್ಥಿ ಪರವಾಗಿ ಮತ ಯಾಚನೆ ಮಾಡಿದರು.

ನಂತರ ಮಳವಳ್ಳಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಉಭಯ ನಾಯಕರು ಪಾಲ್ಗೊಂಡು ಚುನಾವಣಾ ಪ್ರಚಾರ ಕೈಗೊಂಡರು. ಸಂಜೆ ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿ ಸಿ.ಎಸ್.ವಿಜಯ್‍ಶಂಕರ್ ಪರವಾಗಿ ಉಭಯ ನಾಯಕರು ಚುನಾವಣೆ ಪ್ರಚಾರ ಕೈಗೊಂಡು ಮತಯಾಚನೆ ಮಾಡಲಿದ್ದಾರೆ.

ಪರಸ್ಪರ ವಿರುದ್ಧ ನಿಲುವಿನಿಂದ ರಾಜಕೀಯವಾಗಿ ದೂರ ಉಳಿದಿದ್ದ ಗುರು-ಶಿಷ್ಯರು ಈಗ ಒಂದಾಗಿ ಚುನಾವಣೆ ಎದುರಿಸುತ್ತಿರುವುದು ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಉಂಟು ಮಾಡಿದೆ. ಹೀಗಾಗಿ ಮೈತ್ರಿ ಅಭ್ಯರ್ಥಿಗಳು ಸ್ಪರ್ಧಿಸಿರುವ ಕ್ಷೇತ್ರಗಳಲ್ಲಿ ಉಭಯ ಪಕ್ಷಗಳ ನಾಯಕರು ಬಿರುಸಿನ ಚುನಾವಣಾ ಪ್ರಚಾರವನ್ನು ಕೈಗೊಳ್ಳುತ್ತಿದ್ದಾರೆ.

Facebook Comments