ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಫೆ.24- ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಜೆಡಿಎಸ್‍ಅನ್ನು ಪಕ್ಷವೆಂದು ಪರಿಗಣಿಸುವುದಿಲ್ಲ ಎಂದು ಲಘುವಾಗಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಇಂದಿನ ಮೇಯರ್-ಉಪಮೇಯರ್ ಚುನಾವಣೆಯಲ್ಲಿ ನಮ್ಮ ಶಕ್ತಿ ಏನೆಂಬುದನ್ನು ತೋರಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಎಲ್ಲಿದೆ, ಅದಕ್ಕೆ ಶಕ್ತಿಯೇ ಇಲ್ಲ ಎಂಬೆಲ್ಲ ರೀತಿ ಲಘುವಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಮಾತನಾಡಿದ್ದಾರೆ. ಅಲ್ಲದೆ, ಜೆಡಿಎಸ್ ಬಗ್ಗೆ ದ್ವೇಷದ ಮನೋಭಾವ ವ್ಯಕ್ತಪಡಿಸಿದ್ದಾರೆ. ಅವರಿಗೆ ಜೆಡಿಎಸ್ ಶಕ್ತಿ ಮನವರಿಕೆ ಮಾಡಿಕೊಡಲು ಸ್ಪರ್ಧೆ ಮಾಡಿದ್ದೇವೆ. ಮೈಸೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮೂರೂ ಪಕ್ಷಗಳಿಗೂ ಸ್ಪಷ್ಟ ಬಹುಮತವಿಲ್ಲ. ಕಾಂಗ್ರೆಸ್, ಬಿಜೆಪಿ ನಡುವೆ ಸಮಾನ ಅಂತರ ಕಾಯ್ದುಕೊಳ್ಳಲು ಸ್ಪರ್ಧೆ ಮಾಡಿದ್ದೇವೆ ಎಂದು ಹೇಳಿದರು.

ಕಾಂಗ್ರೆಸ್-ಜೆಡಿಎಸ್ ಮೈತ್ರಿಯನ್ನು ಮೈಸೂರು ಮಹಾನಗರ ಪಾಲಿಕೆಯಲ್ಲಿ ಮುಂದುವರೆಸುವ ಇಚ್ಛೆ ಇತ್ತು. ಆದರೆ, ಸಿದ್ದರಾಮಯ್ಯ ಅವರ ನಡವಳಿಕೆಯಿಂದ ಮೈತ್ರಿ ಮುರಿದು ಬೀಳುವಂತಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕೈಯನ್ನು ಕೂಡ ಕಟ್ಟಿಹಾಕಿದ್ದಾರೆ ಎಂದು ತಿಳಿಸಿದರು.

ಜೆಡಿಎಸ್ ಕಿಂಗ್ ಮೇಕರ್ ಎಂಬ ಪ್ರಶ್ನೆ ಉದ್ಬವಿಸುವುದಿಲ್ಲ. 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಅಧಿಕಾರಕ್ಕೆ ಬರಬೇಕೆಂಬ ಗುರಿ ಇಟ್ಟುಕೊಂಡು ಹೋರಾಟ ಮಾಡುತ್ತಿದ್ದೇವೆ. ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರ ಸೂಚನೆಯಂತೆ ಈ ಚುನಾವಣೆಯಲ್ಲಿ ಅಧಿಕಾರ ಸಿಗದಿದ್ದರೂ ಚಿಂತೆಯಿಲ್ಲ. ಕಾಂಗ್ರೆಸ್-ಬಿಜೆಪಿ ನಡುವೆ ಸಮಾನ ಅಂತರ ಕಾಯ್ದುಕೊಂಡು ಜನರ ವಿಶ್ವಾಸ ಗಳಿಸುವ ಪ್ರಯತ್ನ ಮಾಡುತ್ತಿದ್ದೇವೆ.

ಉತ್ತರ ಕರ್ನಾಟಕದ ನೀರಾವರಿ ಹಾಗೂ ಕಾವೇರಿ ಜಲಾನಯನದ ನೀರಾವರಿ ವಿಚಾರವನ್ನು ಬಿಜೆಪಿ ಸರ್ಕಾರ ಕಡೆಗಣಿಸಿದೆ. ಕೇಂದ್ರ ಸರ್ಕಾರವೂ ರಾಜ್ಯವನ್ನು ಲಘುವಾಗಿ ಪರಿಗಣಿಸಿದೆ. ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡರೆ ಆತ್ಮಹತ್ಯೆ ಮಾಡಿಕೊಂಡಂತಾಗುತ್ತದೆ. ಹೀಗಾಗಿ ರಾಜ್ಯದ ನೆಲ-ಜಲದ ವಿಚಾರದಲ್ಲಿ ಎರಡೂ ಪಕ್ಷಗಳ ನಡುವೆ ಅಂತರ ಕಾಯ್ದುಕೊಂಡು ಎಲ್ಲಾ 224 ಕ್ಷೇತ್ರಗಳಲ್ಲೂ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇವೆ ಎಂದು ಕುಮಾರಸ್ವಾಮಿ ತಿಳಿಸಿದರು.

Facebook Comments