ಅಪ್ಪನಾಣೆ ಇಟ್ಟವರಿಗೆ ಜನ ಮತ್ತೊಮ್ಮೆ ಪಾಠ ಕಲಿಸ್ತಾರೆ : ಕುಮಾರಸ್ವಾಮಿ ಕೆಂಡ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.5- ಜೆಡಿಎಸ್ ರಾಜಕೀಯ ಪಕ್ಷವಲ್ಲ ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದು, ಉಪಚುನಾವಣೆಗೆ ಅಭ್ಯರ್ಥಿಯ ಗತಿ ಇಲ್ಲದೆ ಜೆಡಿಎಸ್‍ನವರನ್ನು ಸೆಳೆದ ನಿಮ್ಮದು ರಾಜಕೀಯ ಪಕ್ಷವೇ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.

ಜೆಡಿಎಸ್‍ನಿಂದ ಪ್ರವರ್ದಮಾನಕ್ಕೆ ಬಂದಿದ್ದ, ಜೆಡಿಎಸ್‍ನಿಂದಲೇ ಡಿಸಿಎಂ ಆದ ನಾಯಕರೊಬ್ಬರು, ಸಭೆಯೊಂದರಲ್ಲಿ ಪಕ್ಷದ ಮುಖಂಡರನ್ನು ತಮ್ಮ ಈಗಿನ ಪಕ್ಷಕ್ಕೆ ಸೇರಿಸಿಕೊಳ್ಳುತ್ತಾ ಅದೇ ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡಿರುವುದಕ್ಕೆ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕರ ಹೆಸರನ್ನು ಉಲ್ಲೇಖಿಸದೆ ವಾಗ್ದಾಳಿ ನಡೆಸಿರುವ ಕುಮಾರಸ್ವಾಮಿ, ಭಾರತದ ಅತಿ ಹಳೆಯ ರಾಜಕೀಯ ಪಕ್ಷವಾಗಿರುವ ಕಾಂಗ್ರೆಸ್ ಇಂದು ಯಾವ ಪರಿಸ್ಥಿತಿಯಲ್ಲಿದೆ, ಯಾವ ರಾಜ್ಯಗಳಲ್ಲಿ ಸ್ವಂತ ಬಲದ ಮೇಲೆ ಸರ್ಕಾರ ರಚನೆ ಮಾಡಿದೆ? ಎಲ್ಲೆಲ್ಲಿ ಯಾರು ಯಾರ ಹೆಗಲ ಮೇಲೆ ಕುಳಿತು ರಾಜಕೀಯ ಮಾಡುತ್ತಿದೆ?

ಎಲ್ಲಿಲ್ಲಿ ಯಾರು ಯಾರಿಗೆ ಹೆಗಲಾಗಿದೆ? ಜೆಡಿಎಸ್ ಉಪ್ಪು ತಿಂದ ಆ ಮಹಾನ್ ನಾಯಕರು ಈ ಪ್ರಶ್ನೆಗಳಿಗೆ ಉತ್ತರ ನೀಡುವರೇ ಎಂದು ಪ್ರಶ್ನಿಸಿದ್ದಾರೆ. ಮಿತ್ರಪಕ್ಷಗಳನ್ನೇ ಆಪೋಷನ ಪಡೆದು ಜೀವಿಸುತ್ತಿರುವ, ಜನರಿಂದ ತಿರಸ್ಕಾರವಾಗಿರುವ, ಇತರ ಪಕ್ಷಗಳೊಂದಿಗೆ ಚೌಕಾಸಿಯಲ್ಲಿ ತೊಡಗಿರುವ ಕಾಂಗ್ರೆಸ್ ಭಾರತದಲ್ಲಿ ರಾಜಕೀಯ ಪಕ್ಷವಾಗಿ ಉಳಿದಿದೆಯೇ? ಕಾಂಗ್ರೆಸ್ ತನ್ನ ಅಹಂಕಾರದ ಪ್ರವೃತ್ತಿ ಮುಂದುವರಿಸಿಕೊಂಡು ಹೋದರೆ ಕರ್ನಾಟಕದಲ್ಲೂ ನೆಲೆ ಕಳೆದುಕೊಳ್ಳುವುದರಲ್ಲಿ ಅನುಮಾನಗಳಿಲ್ಲ ಎಂದು ಹೇಳಿದ್ದಾರೆ.

2018ರ ಚುನಾವಣೆಯಲ್ಲಿ ‘ಮಹಾನ್ ನಾಯಕರ ಅಪ್ಪನಾಣೆ, ತಿಪ್ಪರಲಾಗದ ಸವಾಲುಗಳನ್ನು ಜನ ಸೋಲಿಸಿದ್ದಾರೆ. ಆ ಪಕ್ಷ ಅಧಿಕಾರಕ್ಕೆ ಬಾರದು, ಈ ಪಕ್ಷ ಅಕಾರಕ್ಕೆ ಬಾರದು ಎಂದು ಅಪ್ಪನಾಣೆಗಳನ್ನು ಇಟ್ಟವರಿಗೆ ಜನ, ಆಣೆ ಪ್ರಮಾಣದ ಮಹತ್ವ ತಿಳಿಸಿಕೊಟ್ಟಿದ್ದಾರೆ. ಈ ಉಪ ಚುನಾವವಣೆಯಲ್ಲೂ ಅವರಿಗೆ ತಕ್ಕ ಉತ್ತರ ಸಿಗಲಿದೆ. ಅದಕ್ಕಾಗಿ ಕಾಯಲಿ ಎಂದು ವ್ಯಂಗ್ಯವಾಡಿದ್ದಾರೆ.

Facebook Comments

Sri Raghav

Admin