ಇಂದು ಸಂಜೆ ಜೆಡಿಎಸ್ ಎಂಎಲ್‍ಸಿಗಳ ಜೊತೆ ಎಚ್‍ಡಿಕೆ-ಎಚ್‍ಡಿಡಿ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ನ.12- ಅಸಮಾಧಾನಗೊಂಡಿರುವ ಪಕ್ಷದ ಮುಖಂಡರನ್ನು ಸಮಾಧಾನಪಡಿಸಿ ಚುನಾವಣೆಗೆ ಸಿದ್ದತೆ ನಡೆಸುವ ಹಿನ್ನೆಲೆಯಲ್ಲಿ ಇಂದು ಸಂಜೆ ಜೆಡಿಎಸ್ ಮಹತ್ವದ ಸಭೆ ನಡೆಯಲಿದೆ.  ಜೆಡಿಎಸ್ ಕೇಂದ್ರ ಕಚೇರಿ ಜೆಪಿಭವನದಲ್ಲಿ ವಿಧಾನಪರಿಷತ್‍ನ ಎಲ್ಲ ಸದಸ್ಯರ ಸಭೆಯನ್ನು ಕರೆಯಲಾಗಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪಾಲ್ಗೊಳ್ಳಲಿದ್ದಾರೆ.

ಗೌಡರು ಹಾಗೂ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ನಡೆಯಲಿರುವ ಸಭೆಯಲ್ಲಿ ಕೆಲವು ವಿಧಾನಪರಿಷತ್ ಸದಸ್ಯರ ಅಸಮಾಧಾನವನ್ನು ಪರಿಹರಿಸಲು ಉದ್ದೇಶಿಸಲಾಗಿದೆ.
ಮಾಜಿ ಸಚಿವ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಸಭೆ ಸೇರಿದ್ದ ಜೆಡಿಎಸ್‍ನ ವಿಧಾನಪರಿಷತ್ ಸದಸ್ಯರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ್ದರು.

ನಂತರ ಗೌಡರು ವಿಧಾನಪರಿಷತ್ ಸದಸ್ಯರ ಸಭೆ ನಡೆಸಿ ಅಸಮಾಧಾನ ಹೋಗಲಾಡಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಅಲ್ಲದೆ ಕುಮಾರಸ್ವಾಮಿ ಅವರೊಂದಿಗೂ ಸಭೆ ನಡೆಸುವುದಾಗಿ ಹೇಳಿದ್ದರು.  ಕುಮಾರಸ್ವಾಮಿ ಅವರು ವಿದೇಶ ಪ್ರವಾಸ ಕೈಗೊಂಡಿದ್ದ ಹಿನ್ನೆಲೆಯಲ್ಲಿ ನವೆಂಬರ್ ಮೊದಲ ವಾರದಲ್ಲಿ ನಡೆಯಬೇಕಿದ್ದ ವಿಧಾನಪರಿಷತ್ ಸದಸ್ಯರ ಸಭೆಯನ್ನು ಮುಂದೂಡಲಾಗಿತ್ತು.

ಸಂಜೆ ನಡೆಯುವ ಸಭೆಯಲ್ಲಿ ವಿಧಾನಪರಿಷತ್‍ನ ಶಿಕ್ಷಕರ ಕ್ಷೇತ್ರಗಳಿಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆ , ಪಕ್ಷ ಸಂಘಟನೆ, ಮುಂಬರುವ ವಿಧಾನಸಭೆ ಉಪಚುನಾವಣೆ ಬಗ್ಗೆ ಗಂಭೀರ ಚರ್ಚೆ ನಡೆಸಲಾಗುತ್ತದೆ. ಮೈತ್ರಿ ಸರ್ಕಾರದ ಅವಧಿಯಲ್ಲಿ ಕುಮಾರಸ್ವಾಮಿ ಅವರು ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಕೆಲವರು ಅಸಮಾಧಾನಗೊಂಡಿರುವ ಬಗ್ಗೆಯೂ ಚರ್ಚೆ ನಡೆಸಿ ಸಮಾಧಾನಪಡಿಸುವ ಸಾಧ್ಯತೆಗಳಿವೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

Facebook Comments