‘ಶಾಲೆಗಳನ್ನು ಆರಂಭಿಸುವುದು ಸೂಕ್ತವಲ್ಲ’ ಆರೋಗ್ಯ ಇಲಾಖೆ ಶಿಫಾರಸು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.23 – ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಡಿಸೆಂಬರ್ ತಿಂಗಳವರೆಗೂ ಶಾಲೆಗಳನ್ನು ಆರಂಭಿಸುವುದು ಸೂಕ್ತವಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸರ್ಕಾರಕ್ಕೆ ಶಿಫಾರಸು ಮಾಡಿದೆ.  ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿ ನೀಡಿರುವ ಶಿಫಾರಸ್ಸನ್ನು ಮಂಡನೆ ಮಾಡಲಾಯಿತು.

ಇಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಿಗದಿಯಾಗಿದ್ದರಿಂದ ನಿನ್ನೆ ಡಾ.ಎಂ.ಕೆ.ಸುದರ್ಶನ್ ಅವರ ಅಧ್ಯಕ್ಷತೆಯಲ್ಲಿರುವ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿ ಶಾಲೆಗಳ ಪುನರಾರಂಭದ ಕುರಿತು ಚರ್ಚೆ ನಡೆಸಿದೆ. ಸಭೆಯಲ್ಲಿ ಡಿಸೆಂಬರ್‍ವರೆಗೂ ಶಾಲೆ ತೆರೆಯುವುದು ಸೂಕ್ತವಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ಸೂಚನೆ ಮೇರೆಗೆ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಆಸ್ಪತ್ರೆಗಳಲ್ಲೂ ಸೌಲಭ್ಯ ಹೆಚ್ಚಿಸಲಾಗಿದೆ. ಈಗ ಪ್ರತಿ ದಿನ ಸರಾಸರಿ 1,700 ರಷ್ಟು ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ.

ಕಳೆದ ಎಂಟು ತಿಂಗಳಲ್ಲಿ ಕೈಗೊಂಡ ನಾನಾ ಕ್ರಮಗಳ ಪರಿಣಾಮವಾಗಿ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಆದರೆ ದೆಹಲಿ, ಹರಿಯಾಣ, ಗುಜರಾತ್ ಮೊದಲಾದ ರಾಜ್ಯಗಳಲ್ಲಿ ಸೋಂಕು ಹರಡುವಿಕೆ ವೇಗ ಪಡೆದುಕೊಂಡಿದೆ ಎಂದು ಸಭೆಯಲ್ಲಿ ಚರ್ಚೆಯಾಗಿದೆ.

ಚಳಿಗಾಲ ಇರುವುದರಿಂದ ಸೋಂಕು ಹರಡುವಿಕೆ ಹಾಗೂ ಶ್ವಾಸಕೋಶಕ್ಕೆ ಸಂಬಂಸಿದ ರೋಗಗಳು ತೀವ್ರವಾಗಿ ಬಾಸುತ್ತದೆ. ಸೆಪ್ಟೆಂಬರ್‍ನಲ್ಲಿ ನಡೆದ ಸರ್ವೆ ಪ್ರಕಾರ, ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ, ಡಿಸೆಂಬರ್‍ವರೆಗೂ ಶಾಲೆಗಳನ್ನು ಆರಂಭಿಸುವುದು ಸೂಕ್ತವಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸಮಿತಿ ಈ ಅಭಿಪ್ರಾಯವನ್ನೇ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಡಿಸೆಂಬರ್ ಕೊನೆಯ ವಾರದಲ್ಲಿ ಕೋವಿಡ್ ಪರಿಸ್ಥಿತಿ ನೋಡಿಕೊಂಡು ಶಾಲೆಗಳನ್ನು ತೆರೆಯಲು ಮತ್ತೆ ನಿರ್ಧಾರ ಕೈಗೊಳ್ಳಬಹುದು ಎಂದು ಸಭೆ ಅಭಿಪ್ರಾಯಪಟ್ಟಿದೆ.

Facebook Comments