ದೇಶಾದ್ಯಂತ ಭಾರೀ ಮಳೆ ಎಚ್ಚರಿಕೆ..! ಕರ್ನಾಟಕದ ಈ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.8- ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಭಾರತೀಯ ಹವಾಮಾನ ಇಲಾಖೆ ಇಂದು ಮತ್ತು ನಾಳೆ ಧಾರಾಕಾರ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಏಳು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಗಂಟೆಗೆ 50 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದೆ.3.6 ಮೀಟರ್ ಎತ್ತರದ ಅಲೆಗಳು ಏಳುವ ಸೂಚನೆ ಇದೆ. ಮೀನುಗಾರರು ಆ.11ರ ತನಕ ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ ಎಂದು ಭಾರತೀಯ ಹವಾವಾನ ಇಲಾಖೆ ಮುನ್ಸೂಚನೆ ನೀಡಿದೆ.ದಾವಣಗೆರೆ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಇನ್ನು, ಉತ್ತರ ಒಳನಾಡಿನಲ್ಲೂ ಸಹ ಸಾಧಾರಣ ಮಳೆಯಾಗಲಿದೆ. ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ನಿರೀಕ್ಷೆ ಇದೆ.

ರಾಜ್ಯದ ಮಲೆನಾಡು ಭಾಗದಲ್ಲಿ ಇಂದು ಕೊಂಚ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಉಡುಪಿ ಜಿಲ್ಲೆಯಾದ್ಯಂತ ಅಧಿಕ ಮಳೆಯಾದರೆ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.ನಿನ್ನೆ ಬೆಂಗಳೂರಿನ ಬೊಮ್ಮನಹಳ್ಳಿಯ ಸಿಂಗಸಂದ್ರದಲ್ಲಿ 13 ಮಿಮೀ ಮಳೆಯಾಗಿದೆ. ಅದೇ ರೀತಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ರೆಂಜÁಳದಲ್ಲಿ 120 ಮಿಮೀ ಮಳೆಯಾಗಿದೆ. ನಿನ್ನೆ ರಾಜ್ಯದಲ್ಲಿ ಅತ್ಯಧಿಕ ಮಳೆಯಾಗಿರುವ ಪ್ರದೇಶ ಇದಾಗಿದೆ.

ಕಳೆದ ನಾಲ್ಕೈದು ದಿನಗಳಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುತ್ತಿದೆ. ಜುಲೈ ತಿಂಗಳಾಂತ್ಯದಲ್ಲಿ ಕೊಂಚ ಬಿಡುವು ಕೊಟ್ಟಿದ್ದ ಮಳೆರಾಯ ಮತ್ತೆ ತನ್ನ ಆರ್ಭಟ ತೋರಿಸುತ್ತಿದ್ದಾನೆ. ಇಂದೂ ಸಹ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗುವ ನಿರೀಕ್ಷೆ ಇದೆ. ಜುಲೈನಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸುರಿದ ಧಾರಾಕಾರ ಮಳೆಗೆ ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸುಮಾರು 31,360 ಮಂದಿಯನ್ನು ತಗ್ಗು ಪ್ರದೇಶಗಳಿಂದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಸುಮಾರು 22,417 ಜನರು 237 ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಪ್ರಕಾರ, ಸುಮಾರು 283 ಗ್ರಾಮಗಳು, 45 ತಾಲೂಕುಗಳು ಮಳೆಯ ಹೊಡೆತಕ್ಕೆ ಸಿಕ್ಕಿದ್ದು, 36,498 ಜನರು ಅಕ್ಷರಶಃ ನಲುಗಿದ್ದಾರೆ.

ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಈ ವರ್ಷ ಮಳೆಯಿಂದಾಗಿ 9 ಮಂದಿ ಸಾವನ್ನಪ್ಪಿದ್ದು, ಮೂರು ಜನರು ಕಣ್ಮರೆಯಾಗಿದ್ದಾರೆ. ಸುಮಾರು 3,502 ವಿದ್ಯುತ್ ಕಂಬಗಳು ಧರೆಗುರುಳಿವೆ. 342 ಟ್ರಾನ್ಸ್‍ಫಾರ್ಮರ್‍ಗಳು ಹಾನಿಯಾಗಿದ್ದು, ಹಲವಾರು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಆಗುಂಬೆ ಮತ್ತು ಕುಕ್ಕೆ ಸುಬ್ರಮಣ್ಯದಲ್ಲಿ ತಲಾ 10 ಸೆಂಮೀ ಮಳೆಯಾಗಿದೆ. ಮಡಿಕೇರಿಯಲ್ಲಿ 9, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ 7 ಸೆಂಮೀ ಮಳೆ ಸುರಿದಿದೆ. ಕಾರ್ಕಳದಲ್ಲಿ 5, ಕುಂದಾಪುರ ಮತ್ತು ಕೊಪ್ಪದಲ್ಲಿ 4 ಸೆಂಮೀ ಮಳೆಯಾಗಿದೆ.

ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2 ಮನೆಗಳಿಗೆ ಪೂರ್ಣ ಹಾನಿಯಾಗಿದೆ. 6 ಮನೆಗಳು ಭಾಗಶಃ ಜಖಂಗೊಂಡಿವೆ. 46 ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ಬೆಟ್ಟಗೆರೆಯಲ್ಲಿ ಬಸ್ ನಿಲ್ದಾಣ ಕುಸಿದು ಬಿದ್ದಿದೆ. ಕೊಡಗು ಜಿಲ್ಲೆಯ ಮಡಿಕೇರಿ, ನಾಪೋಕ್ಲು, ಕಕ್ಕಬ್ಬೆ, ಬಕ್ಕ, ಭಾಗಮಂಡಲದಲ್ಲಿ ಶನಿವಾರ ಉತ್ತಮ ಮಳೆಯಾಗಿದೆ. ಮುಕ್ಕೋಡ್ಲು-ಹೆಮ್ಮೆತ್ತಾಳು ಸಣ್ಣ ಸೇತುವೆಗೆ ಹಾನಿಯಾಗಿದೆ. ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಮಳೆಯಾಗಿದೆ. ಅಂಕೋಲಾ, ಹೊನ್ನಾವರ, ಭಟ್ಕಳ, ಮುಂಡಗೋಡ, ಶಿರಸಿ ಭಾಗದಲ್ಲಿಯೂ ಶನಿವಾರ ಮಳೆ ಸುರಿದಿದೆ.

ಕೊಡಗು ಮಳೆ ವಿವರ ಕೊಡಗು ಜಿಲ್ಲೆಯಲ್ಲಿ ಸರಾಸರಿ 41.08 ಮಿಮೀ ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗೆ 1865.72 ಮಿಮೀ ಮಳೆ ಸುರಿದಿದೆ. ಮಡಿಕೇರಿ ತಾಲೂಕಿನಲ್ಲಿ 63.23 ಮಿಮೀ, ವಿರಾಜಪೇಟೆ ತಾಲೂಕಿನಲ್ಲಿ 18.70 ಮಿಮೀ ಮತ್ತು ಸೋಮವಾರಪೇಟೆ ತಾಲೂಕಿನಲ್ಲಿ 41.30 ಮಿಮೀ ಮಳೆಯಾಗಿದೆ.

ಮಹಾರಾಷ್ಟ್ರ ಭಾಗದಲ್ಲಿ ಮಳೆ ಕಡಿಮೆಯಾಗಿದ್ದು, ಕೃಷ್ಣಾ ನದಿಗೆ ಹರಿದು ಬರುವ ನೀರಿನ ಪ್ರಮಾಣದಲ್ಲಿಯೂ ಇಳಿಕೆಯಾಗಿದೆ. ಆಲಮಟ್ಟಿ ಜಲಾಶಯಕ್ಕೆ 1,08,844 ಕ್ಯುಸೆಕ್ ಒಳಹರಿವು ಇದೆ. ನಾರಾಯಣಪುರ ಜಲಾಶಯಕ್ಕೆ 45,484 ಕ್ಯುಸೆಕ್ ನೀರು ಹರಿದುಬರುತ್ತಿದೆ. ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು ಭದ್ರಾ ಜಲಾಶಯಕ್ಕೆ 19,402 ಕ್ಯುಸೆಕ್, ಲಿಂಗನಮಕ್ಕಿ ಜಲಾಶಯಕ್ಕೆ 24,716 ಕ್ಯುಸೆಕ್ ನೀರು ಹರಿದು ಬರುತ್ತಿದೆ.

ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು ಕಾವೇರಿ ನದಿಯ ನೀರಿನ ಮಟ್ಟವೂ ಹೆಚ್ಚಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್‍ಎಸ್ ಜಲಾಶಯಕ್ಕೆ 21.454 ಕ್ಯುಸೆಕ್ ನೀರು ಹರಿದುಬರುತ್ತಿದೆ. ಜಲಾಶಯ ಪೂರ್ಣ ಮಟ್ಟ 38.04 ಮೀಟರ್ ಆಗಿದೆ. ಇಂದಿನ ನೀರಿನ ಮಟ್ಟ 35.82 ಮೀಟರ್.

Facebook Comments