ರಾಜ್ಯದ ವಿವಿಧೆಡೆ ಭಾರೀ ಮಳೆ, ಸಂಚಾರ ಅಸ್ತವ್ಯಸ್ತ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.22- ರಾಜ್ಯದ ವಿವಿಧೆಡೆ ವರುಣನ ಅಬ್ಬರ ಜೋರಾಗಿದ್ದು , ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಉತ್ತರ ಕರ್ನಾಟಕ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ.

ಹಾವೇರಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲೆಯ ಬ್ಯಾಡಗಿ ಸೇರಿದಂತೆ ಮತ್ತಿತರೆಡೆ ಉತ್ತಮ ಮಳೆಯಾಗುತ್ತಿದ್ದು , ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ.ಮಳೆಯಿಂದ ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿದ್ದು, ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಭಟ್ಕಳದಲ್ಲಿ ತಗ್ಗು ಪ್ರದೇಶದಲ್ಲಿರುವ ಅಂಗಡಿ ಮಳಿಗೆಗಳಿಗೆ ನೀರು ನುಗ್ಗಿದೆ. ಭಾರೀ ಮಳೆಯಿಂದಾಗಿ ಉಡುಪಿ, ಭಟ್ಕಳ ಮಾರ್ಗದಲ್ಲಿ ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಗಿತ್ತು. ವಾಹನ ಸವಾರರು ಹಾಗೂ ಪ್ರಯಾಣಿಕರು ಕೆಲ ಕಾಲ ಪರದಾಡಿದ ಪರಿಸ್ಥಿತಿ ನಿರ್ಮಾಣವಾಗಿತ್ತು.

ವಿರಾಜಪೇಟೆ ತಾಲ್ಲೂಕಿನಲ್ಲಿ ಜಡಿ ಮಳೆಯಿಂದಾಗಿ ಮಣ್ಣು ದಿಬ್ಬಗಳು ಕುಸಿದಿವೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದ ಕರ್ಕಿನಾಕಾ ಬಳಿ ಬೃಹದಾಕಾರದ ಹಳೆಯ ಆಲದ ಮರವೊಂದು ಉರುಳಿ ಬಿದ್ದಿದ್ದು , ಹೆದ್ದಾರಿ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.

ಕೂಡಲೇ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಬೆಂಗಳೂರು, ತುಮಕೂರು ಸೇರಿದಂತೆ ಮತ್ತಿತರೆಡೆ ಸಾಧಾರಣ ಮಳೆಯಾಗುತ್ತಿದ್ದು , ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ.

Facebook Comments

Sri Raghav

Admin