ಮುಂದಿನ 5 ದಿನ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.18- ರಾಜ್ಯದ ಹಲವೆಡೆ ಈಗಾಗಲೇ ಮಳೆಯ ಅಬ್ಬರ ಜೋರಾಗಿದ್ದು, ಮಲೆನಾಡು, ಕರಾವಳಿ ಭಾಗದಲ್ಲಿ ಉತ್ತಮ ಮಳೆ ಆಗುತ್ತಿದೆ. ಪರಿಣಾಮ ಹಳ್ಳ, ಕೊಳ್ಳ, ನದಿಗಳು ಉಕ್ಕಿ ಹರಿದಿವೆ. ಉತ್ತಮ ಮಳೆ ಆಗುತ್ತಿರುವುದು ಕೃಷಿಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.

ಮುಂಧಿನ ಐದು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಪರಿಣಾಮ ಕಾವೇರಿ ನದಿ ಪಾತ್ರದ ಜನರಲ್ಲಿ ಆತಂಕ ಮನೆ ಮಾಡಿದೆ.

ಒಂದೆಡೆ ಕೊರೊನಾ ಭೀತಿ ಹಾಗೂ ಮತ್ತೊಂದೆಡೆ 2 ವರ್ಷದಿಂದ ಪ್ರಾಕೃತಿಕ ವಿಕೋಪದಿಂದ ನಲುಗಿಹೋಗಿದ್ದ ಕೊಡಗಿನಲ್ಲಿ ಮತ್ತೆ ಮಳೆ ಆರ್ಭಟ ಹೆಚ್ಚಾಗಿದ್ದು, ಸ್ಥಳೀಯರಲ್ಲಿ ಭೀತಿಯನ್ನು ಮೂಡಿಸಿದೆ.

ರಾಜ್ಯದ ಹಲವೆಡೆ ಇಂದು ಸಾಧಾರಣ ಮತ್ತು ಅಲ್ಪಸ್ವಲ್ಪ ಮಳೆಯಾಗುವ ಸಾಧ್ಯತೆಯಿದ್ದು, ಮೋಡ ಮುಸುಗಿದ ವಾತಾವರಣ ನಿರ್ಮಾಣವಾಗಿದೆ. ಕಲಬುರಗಿ, ವಿಜಯಪುರ ಜಿಲ್ಲೆಯ ಇಂಡಿ, ಕೊಪ್ಪಳ, ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ ಹಲವು ಪ್ರದೇಶಗಳಲ್ಲಿ ಅಲ್ಪಸ್ವಲ್ಪ ಮಳೆಯಾಗಲಿದೆ.

ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ರಾಜ್ಯದ ಮಲೆನಾಡು ಭಾಗ ಉತ್ತರ ಕನ್ನಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲೂ ವರುಣ ಅಟ್ಟಹಾಸ ಮೆರೆಯಲಿದ್ದಾನೆ. ದಕ್ಷಿಣ ಕರಾವಳಿ ಭಾಗವಾಗಿರುವ ದಕ್ಷಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಲಬುರಗಿ ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭೀಮಾ ನದಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಜಲಾಶಯಗಳ ಒಳ ಹರಿವು ಸಹ ಹೆಚ್ಚಳವಾಗಿದ್ದು, ಯಾರು ನದಿಯ ದಂಡೆಯ ಕಡೆಗೆ ಹೊಗದಂತೆ ಜಿಲ್ಲಾಧಿಕಾರಿ ಬಿ. ಶರತ್ ಆದೇಶಿಸಿದ್ದಾರೆ.

ಮೂಡಿಗೆರೆ, ಶೃಂಗೇರಿ, ಎನ್.ಆರ್.ಪುರ, ಕೊಪ್ಪದಲ್ಲಿ ಧಾರಾಕಾರ ಮಳೆಯಾಗಿದೆ. ಕೊಟ್ಟಿಗೆಹಾರ, ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ರಾತ್ರಿ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

ಕಳೆದ ಎರಡು ದಿನಗಳಿಂದ ರಾತ್ರಿ ವೇಳೆ ಸುರಿಯುತ್ತಿರುವ ಮಳೆಯಿಂದ ತುಂಗಾ, ಭದ್ರಾ, ಹೇಮಾವತಿ ನದಿಗಳ ಹರಿವಿನ ಮಟ್ಟ ಹೆಚ್ಚಳವಾಗಿದೆ.
ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿವೆ.

ಹೀಗಾಗಿ, ನದಿ ಅಂಚಿನ ಗ್ರಾಮಗಳು ಕಂಗಾಲಾಗಿವೆ. ಅಘನಾಶಿನಿ, ಗಂಗಾವಳಿ, ನೇತ್ರಾವತಿ ನದಿಗಳು ಮೈದುಂಬಿ ಹರಿಯುತ್ತಿವೆ. ಸದ್ಯ, ನದಿ ಅಪಾಯದ ಮಟ್ಟ ತಲುಪಿಲ್ಲ. ಆದರೆ, ಮಳೆ ಹೆಚ್ಚಾದರೆ, ಕೆಲ ಗ್ರಾಮಗಳು ಮುಳುಗುವ ಭೀತಿ ಎದುರಾಗಿದೆ.

ಮಹಾರಾಷ್ಟ್ರ ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಆಗುತ್ತಿದೆ. ಮುಂದಿನ ಒಂದು ವಾರಗಳ ಕಾಲ ಇದೇ ರೀತಿಯ ಮಳೆ ಮುಂದುವರಿಯಲಿದೆ ಎನ್ನಲಾಗಿದೆ. ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.

ಪುಣೆ, ಮುಂಬೈ ಸೇರಿದಂತೆ ಅನೇಕ ಕಡೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿವೆ.

ಉತ್ತರ ಕರ್ನಾಟಕದ ಅನೇಕ ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ, ನದಿ ಅಂಚಿನ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು ಭಾಗದಲ್ಲಿ ಉತ್ತಮ ಮಳೆ ಆಗುತ್ತಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ತುಮಕೂರು, ಕೋಲಾರ, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಭಾಗದಲ್ಲಿ ಇಂದು ಮೋಡ ಕವಿದ ವಾತಾವರಣ ಇದ್ದು, ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.

ಗುಲ್ಬರ್ಗದಲ್ಲಿ ಚಿಮ್ಮನಚೋಡ ಗ್ರಾಮದಲ್ಲಿ ಸಂಗಮೇಶ್ವರ ದೇವಾಲಯ ಇದೆ. ಗುರುವಾರ ಈ ಭಾಗದಲ್ಲಿ ಪ್ರವಾಹ ಉಂಟಾಗಿದ್ದು, ದೇವಾಲಯದಲ್ಲಿದ್ದ ಐವರನ್ನು ರಕ್ಷಣೆ ಮಾಡಲಾಗಿದೆ. ಸಂಗಮೇಶ್ವರ ದೇವಾಲಯದ ಬಳಿ ನಾಗರಾಳ ಜಲಾಶಯ ಇದೆ.

ಇಲ್ಲಿ ಭಾರೀ ಪ್ರಮಾಣದ ನೀರು ಬಿಡಲಾಗಿತ್ತು. ಈ ವೇಳೆ ದೇವಾಲು ಮುಳುಗಿತ್ತು. ನಂತ ನೀರು ಬಿಡುವುದನ್ನು ನಿಲ್ಲಿಸಿ, ದೇವಾಲಯದಲ್ಲಿ ಇರುವವರನ್ನು ರಕ್ಷಣೆ ಮಾಡಲಾಗಿದೆ.ವಿಜಯಪುರದಲ್ಲಿ ಕಳೆದ ಎರಡು ದಿನಗಳಿಂದ ಜಿಟಿಜಿಟಿ ಮಳೆ ಸುರಿಯುತ್ತಿದೆ. ಹೀಗಾಗಿ ಈ ಭಾಗದಲ್ಲಿ ಕೃಷಿ ಚಟುವಟಕೆಗಳು ಭರದಿಂದ ಸಾಗಿವೆ.

ಕೊಡಗು ಜಿಲ್ಲೆಯಲ್ಲಿ ಅಲ್ಲಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ಹವಾಮಾನ ಇಲಾಖೆಯ ಮುನ್ಸೂಚನೆ ಮೇರೆಗೆ ಜಿಲ್ಲಾಡಳಿತ ಯಲ್ಲೋ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರೀ ಮಳೆ ಸಾಧ್ಯತೆ. ಜಿಲ್ಲೆಯಲ್ಲಿ ಮುಂಗಾರು ಚುರುಕಾಗಿದ್ದು, ಜಿಲ್ಲೆ ಸೇರಿದಂತೆ ಹಲವೆಡೆ ಭಾರೀ ಮಳೆಯಾಗುವ ಸಂಭವಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ಸಂಜೆಯಿಂದ ನಾಳೆವರೆಗೆ 115.6 ಮಿ.ಮೀಟರ್ ನಿಂದ 204.4 ಮಿ.ಮೀಟರ್ ಹಾಗೂ ನಂತರದ ದಿನಗಳಲ್ಲಿ 64.5 ಮಿ.ಮೀಟರ್ ನಿಂದ 115.5 ಮಿ.ಮೀಟರ್ ಪ್ರಮಾಣದ ಮಳೆ ಆಗಲಿದೆ ಎಂದು ತಿಳಿಸಿದೆ. ಅಲ್ಲದೇ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಿದೆ.

ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಸಮಸ್ಯೆಗಳು ಎದುರಾದರೆ, ಜಿಲ್ಲಾಡಳಿತ ನೀಡಿರುವ ತುರ್ತು ದೂರವಾಣಿ ಸಂಖ್ಯೆ 08272-221077 ಸಂಪರ್ಕಿಸಲು ಜಿಲ್ಲಾಧಿಕಾರಿ ಅನೀಸ್ ಕೆ. ಜಾಯ್ ಮನವಿ ಮಾಡಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹಲವೆಡೆ ಬೆಳ್ಳಂಬೆಳಗ್ಗೆ ಮಳೆ ಆರಂಭವಾಗಿದ್ದು, ಸೋನೆ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ.

ಧಾರವಾಡ ಜಿಲ್ಲೆಯಲ್ಲಿ ಕಿಲ್ಲರ್ ಕೊರೊನಾ ರಣಕೇಕೆ ಹಾಕುತ್ತಿದೆ. ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಶತಕದ ಗಡಿ ದಾಟಿದೆ. ಹೀಗಾಗಿ ಕೊರೊನಾ ವೈರಸ್ ಹರಡುವುದನ್ನ ತಡೆಗಟ್ಟಲು ಜಿಲ್ಲಾಡಳಿತ ಲಾಕ್‍ಡೌನ್ ಕಠಿಣಗೊಳಿಸಲು ಮುಂದಾಗಿದೆ. ಜನರು ಮಾತ್ರ ಧಾರಾಕಾರ ಮಳೆಯನ್ನು ಸಹ ಲೆಕ್ಕಿಸದೇ ಖರೀದಿ ಮಾಡುವುದರಲ್ಲಿ ತಲ್ಲೀನರಾಗಿದ್ದಾರೆ.

Facebook Comments

Sri Raghav

Admin