ಪೌರತ್ವ ಕಾಯ್ದೆ ತಿದ್ದುಪಡಿ ಪ್ರಚೋದನಕಾರಿ ಹೇಳಿಕೆ ಬೇಡ : ಎಚ್ಕೆಕೆ
ಬೆಂಗಳೂರು, ಡಿ.21- ಪೌರತ್ವ ತಿದ್ದುಪಡಿ ಕಾಯ್ದೆ ಕುರಿತಂತೆ ಯಾವುದೇ ಪಕ್ಷದವರು ಪ್ರಚೋದನ ಕಾರಿ ಹೇಳಿಕೆಗಳನ್ನು ನೀಡಬಾರದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿಳಿಸಿದರು. ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಬೇಕಾದ ಅಗತ್ಯವಿದೆ. ಹೀಗಾಗಿ ಯಾರೂ ಕೂಡ ಕಾಯ್ದೆಗೆ ಸಂಬಂಧಿಸಿದಂತೆ ಜನರನ್ನು ಪ್ರಚೋದಿಸುವಂತಹ ಹೇಳಿಕೆಗಳನ್ನು ನೀಡಬಾರದೆಂದು ಮನವಿ ಮಾಡಿದರು.
ಈ ಸಂಜೆಯೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಯು.ಟಿ. ಖಾದರ್ ಹಾಗೂ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಹೇಳಿಕೆಗಳನ್ನು ಒಪ್ಪಲಾಗುವುದಿಲ್ಲ ಎಂದರು. ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಕೇಂದ್ರ ಸರ್ಕಾರ ಜನರಿಗೆ ಸೂಕ್ತ ರೀತಿಯಲ್ಲಿ ಮನವರಿಕೆ ಮಾಡಿ ಕೊಡಬೇಕು. ಅದರಿಂದಾಗುವ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಹೇಳಿದರು.
ಪಾರತ್ವ ಕಾಯ್ದೆಯನ್ನು ತಮ್ಮ ಪಕ್ಷ ವಿರೋಧಿಸುತ್ತಲೇ ಬಂದಿದೆ. ದೇಶಾದ್ಯಂತ ಜನರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕಾಯ್ದೆ ಅನುಷ್ಠಾನ ಗೊಳಿಸುವುದನ್ನು ಸದ್ಯಕ್ಕೆ ತಡೆ ಹಿಡಿದು ಶಾಂತಿ ಕಾಪಾಡಬೇಕಾಗಿದೆ ಎಂದರು. ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಘಟನೆ ಬಗ್ಗೆ ಸೂಕ್ತ ತನಿಖೆಯಾಗಬೇಕು ಹಾಗೂ ಮೃತಪಟ್ಟವರ ಕುಟುಂಬಗಳಿಗೆ ಸೂಕ್ತ ಪರಿಹಾರವನ್ನು ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.