ದೇಶ ವಿರೋಧಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ : ಗೃಹ ಸಚಿವ ಬೊಮ್ಮಾಯಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಫೆ.22- ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗೃಹಸಚಿವ ಬಸವರಾಜ್ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಬೋಧನೆ ಮಾಡುವ ಕಾಯಕ ಮಾಡಬೇಕು. ಒಂದು ವೇಳೆ ದೇಶ ವಿರೋಧಿ ಕೃತ್ಯ ನಡೆಸಲು ಯಾರಾದರೂ ಕುಮ್ಮಕ್ಕು ಕೊಟ್ಟರೆ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಗುಡುಗಿದರು.

ಈಗಾಗಲೇ ಶಿಕ್ಷಣ ಸಂಸ್ಥೆಗಳಿಗೆ ಈ ಸಂಬಂಧ ಸೂಚನೆ ಕೊಡಲಾಗಿದ್ದು, ಇಂತಹ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕೆಂದು ನಿರ್ದೇಶನ ನೀಡಲಾಗಿದೆ. ಕೆಲವು ಕಾಲೇಜುಗಳಲ್ಲಿ ದೇಶ ವಿರೋಧಿ ಚಟುವಟಿಕೆಗಳು ನಡೆಯುತ್ತಿರುವುದು ಗಮನಕ್ಕೆ ಬಂದಿದೆ ಎಂದು ಹೇಳಿದರು.  ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡಲು ಅಂತಾರಾಷ್ಟ್ರೀಯ ಮಟ್ಟದಲ್ಲು ಷಡ್ಯಂತ್ರ ನಡೆಯುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ.

ಯಾವುದೇ ಕಾರಣಕ್ಕೂ ಶಾಂತಿಪ್ರಿಯ ಕರ್ನಾಟಕದಲ್ಲಿ ಶಾಂತಿ ಕದಡಲು ಬಿಡುವುದಿಲ್ಲ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಸರ್ವಸನ್ನದ್ದವಾಗಿದೆ ಎಂದು ಹೇಳಿದರು.
ನಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆಯ ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

Facebook Comments