ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ‘ಮಾಸ್ಕ್ ಡೇ’ ಆಚರಣೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.18- ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೋವಿಡ್ ಸೋಂಕು ಒಬ್ಬರಿಂದ ಒಬ್ಬರಿಗೆ ಹಬ್ಬದಂತೆ ನಿಯಂತ್ರಿಸಲು ಸರ್ಕಾರದ ಜತೆ ಸಾರ್ವಜನಿಕರು ಕೈ ಜೋಡಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದಿಲ್ಲಿ ಮನವಿ ಮಾಡಿದ್ದಾರೆ.

ಬಿಬಿಎಂಪಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕೋವಿಡ್-19 ಸೋಂಕು ಹರಡುವಿಕೆ ತಡೆಯಲು ಹಮ್ಮಿಕೊಂಡಿದ್ದ ಮಾಸ್ಕ್ ದಿನಾಚರಣೆ ಜನಜಾಗೃತಿ ಅಭಿಯಾನದಲ್ಲಿ ಅವರು ಮಾತನಾಡಿದರು.

ರಾಜ್ಯಸರ್ಕಾರ ಕೊರೊನಾ ನಿಯಂತ್ರಿಸಲು ಸಾಕಷ್ಟು ತ್ವರಿತವಾದ ಕ್ರಮಗಳನ್ನು ಕೈಗೊಂಡಿದೆ. ಕೇವಲ ಸರ್ಕಾರದಿಂದ ಮಾತ್ರ ಇದು ಸಾಧ್ಯವಿಲ್ಲ. ನಮ್ಮ ಜತೆ ಸಾರ್ವಜನಿಕರು ಕೈ ಜೋಡಿಸಿದರೆ ಇದನ್ನು ತಹಬದಿಗೆ ತರಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕರ್ನಾಟಕದಲ್ಲಿ ಕೊರೊನಾ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೆಂಟಿಲೇಟರ್ ಬಳಕೆ, ಎನ್95 ಮಾಸ್ಕ್, ಸಾಮಾಜಿಕ ಅಂತರ, ಸಂಚಾರಿ ಫೀವರ್ ಕ್ಲಿನಿಕ್ ಆರಂಭ, ಪ್ರತಿಯೊಬ್ಬರೂ ಮಾಸ್ಕ್ ಧರಿಸುತ್ತಿರುವುದು ಸೇರಿದಂತೆ ಹಲವು ಕ್ರಮಗಳ ಬಗ್ಗೆ ಪ್ರಶಂಸಿಸಿದ್ದಾರೆ ಎಂದರು.

ರಾಜ್ಯದಲ್ಲಿ ಕೊರೊನಾ ಎಂದೋ ನಿಯಂತ್ರಣಕ್ಕೆ ಬರುತ್ತಿತ್ತು. ಆದರೆ, ಕೆಲವು ಕಾರಣಗಳಿಂದ ಸೋಂಕಿನ ಪ್ರಮಾಣ ಹೆಚ್ಚಾಗಿರಬಹುದು. ಇದಕ್ಕೆ ಸಾರ್ವಜನಿಕರು ಆತಂಕಗೊಳ್ಳುವ ಅಗತ್ಯವಿಲ್ಲ. ಸರ್ಕಾರ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.

ವಿಶ್ವ ಆರೋಗ್ಯ ಸಂಸ್ಥೆ ಕೂಡ ಮಾಸ್ಕ್ ಧರಿಸುವುದರಿಂದ ಕೊರೊನಾ ಸೋಂಕು ಹಬ್ಬುವುದನ್ನು ತಡೆಗಟ್ಟಬಹುದು ಎಂದು ಹೇಳಿದೆ. ಹೀಗಾಗಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸುವುದರ ಜತೆಗೆ ಸಾಮಾಜಿಕ ಅಂತರ ಕಾಪಾಡಿಕೊಂಡು ನಿಮ್ಮ ನೆರೆಹೊರೆಯವರಿಗೂ ಇದರ ಬಗ್ಗೆ ಮನವರಿಕೆ ಮಾಡಿ ಎಂದು ಸಿಎಂ ಮನವಿ ಮಾಡಿದರು.

ನಿಮ್ಮನ್ನೂ ಸೇರಿ ಇತರರನ್ನೂ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ. ನಿಮ್ಮ ಮನೆ, ಕಚೇರಿ, ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛತೆಯಿಂದ ಇಟ್ಟುಕೊಳ್ಳಬೇಕು. ಇದರಿಂದ ಮಾತ್ರ ಸೋಂಕು ಹಬ್ಬುವುದನ್ನು ತಡೆಗಟ್ಟಲು ಸಾಧ್ಯವಾಗುತ್ತದೆ.

ಸಾಮಾಜಿಕ ಜಾಗೃತಿ ಇಲ್ಲದಿದ್ದರೆ ಸರ್ಕಾರದ ಯಾವ ಕೆಲಸಗಳೂ ಯಶಸ್ವಿಯಾಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.
ಕೊರೊನಾ ನಿಯಂತ್ರಿಸಲು ವೈದ್ಯರು, ನರ್ಸ್, ಆಶಾ ಕಾರ್ಯಕರ್ತೆಯರು ಸೇರಿದಂತೆ ಹಲವಾರು ಸಿಬ್ಬಂದಿಗಳು ಹಗಲು-ರಾತ್ರಿ ಎನ್ನದೆ ಕೆಲಸ ಮಾಡಿದ್ದಾರೆ. ಅವರ ಸೇವೆಗೆ ನಾನು ಚಿರಋಣಿಯಾಗಿದ್ದೇನೆ. ಇದಕ್ಕಾಗಿ ನಮ್ಮ ಸರ್ಕಾರ ವಿಶೇಷವಾಗಿ ಅವರನ್ನು ಅಭಿನಂದಿಸುವುದಾಗಿ ತಿಳಿಸಿದರು.

ಇಂದು ಸಾಂಕೇತಿಕವಾಗಿ ರಾಜ್ಯಾದ್ಯಂತ ಮಾಸ್ಕ್ ದಿನಾಚರಣೆ ಮಾಡುತ್ತಿದ್ದೇವೆ. ಇದು ಪ್ರತಿಯೊಬ್ಬರಲ್ಲೂ ಜನಜಾಗೃತಿ ಮೂಡಬೇಕೆಂಬ ಸದುದ್ದೇಶದಿಂದ ಆಚರಣೆ ಮಾಡಲಾಗುತ್ತಿದೆ. ಹೀಗೆ ಎಲ್ಲ ಕಡೆ ಜಾಗೃತಿ ಅಭಿಯಾನ ಹಮ್ಮಿಕೊಳ್ಳಬೇಕಾದ ಅಗತ್ಯವಿದೆ ಎಂದು ಸಿಎಂ ಹೇಳಿದರು.

ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ 10 ಲಕ್ಷ ಮಾಸ್ಕ್ ವಿತರಣೆ ಮಾಡಿದ ಆರ್ಕೆ ಟ್ರಸ್ಟ್ಗೆ ಸಿಎಂ ಅಭಿನಂದನೆ ಸಲ್ಲಿಸಿದರು. ಇದಕ್ಕೂ ಮುನ್ನ ಬೆಳಗ್ಗೆ ವಿಧಾನಸೌಧದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿಯಿಂದ ಕಬ್ಬನ್ಪಾರ್ಕ್ವರೆಗೆ ಕಾಲ್ನಡಿಗೆ ಜಾಥಾ ನಡೆಸಲಾಯಿತು.

ಈ ವೇಳೆ ಭಾರತದ ನಿವೃತ್ತ ಕ್ರಿಕೆಟ್ ಆಟಗಾರ ಅನಿಲ್ ಕುಂಬ್ಳೆ, ಪವರ್ ಸ್ಟಾರ್ ಪುನಿತ್ ರಾಜ್ಕುಮಾರ್, ನಟಿ ರಾಗಿಣಿ ದ್ವಿವೇದಿ, ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಅಶ್ವತ್ಥ ನಾರಾಯಣ್, ಸಚಿವರಾದ ಆರ್.ಅಶೋಕ್, ಡಾ.ಕೆ.ಸುಧಾಕರ್, ಸಿ.ಟಿ.ರವಿ, ಎಸ್.ಟಿ.ಸೋಮಶೇಖರ್, ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ ಸೇರಿದಂತೆ ಸಂಸದರು, ಶಾಸಕರು, ಬಿಬಿಎಂಪಿ ಸದಸ್ಯರು, ಪೊಲೀಸ್ ಅಕಾರಿಗಳು, ವಿವಿಧ ಇಲಾಖೆಯ ಸಿಬ್ಬಂದಿ ಪಾಲ್ಗೊಂಡಿದ್ದರು.

 

Facebook Comments

Sri Raghav

Admin