ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.11-ಅರಬ್ಬಿ ಸಮುದ್ರದ ಮೇಲ್ಮೈನಲ್ಲಿ ಸುಳಿಗಾಳಿ ಪರಿಣಾಮ ವರುಣನ ಅಬ್ಬರ ಜೋರಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಮಳೆಯ ಅವಾಂತರ ಸೃಷ್ಟಿಯಾಗಿದೆ. ಇಂದು ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಾದ ಬೆಳಗಾವಿ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಗಳ ಕೆಲವು ಕಡೆ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಭಾರತದ ಕರಾವಳಿ ಪ್ರದೇಶಗಳಲ್ಲಿ ಜವಾದ್ ಚಂಡಮಾರುತದ ಪ್ರಭಾವದಿಂದ ಮಳೆಯಾಗುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಅಕ ಮಳೆಯಾಗುವ ನಿರೀಕ್ಷೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಗುಲಾಬ್, ಶಾಹೀನ್ ನಂತರ ಇದೀಗ ಜವಾದ್ ಚಂಡಮಾರುತ ಅಪ್ಪಳಿಸಲಿರುವುದಾಗಿ ಮುನ್ಸೂಚನೆ ನೀಡಿದೆ. ಅಲ್ಲದೇ, ಅ.12 ಮತ್ತು 13ರಂದು ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ರಾಯಚೂರು ತಾಲೂಕಿನ ವಿವಿಧೆಡೆ ಸುರಿದ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಇಡಪನೂರು ಗ್ರಾಮದ ಹಳ್ಳದ ಸೇತುವೆ ಭಾಗಶಃ ಹಾಳಾಗಿವೆ. ಹಳ್ಳ ತುಂಬಿ ಹರಿಯುತ್ತಿದ್ದು ಇಡಪನೂರು  ಪಂಚಮುಖಿ ಮಾರ್ಗ ಬಂದ್ ಆಗಿದೆ. ಹಾಳಾದ ಸೇತುವೆ ಮೇಲೆಯೇ ಜನರು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಮಳೆ ಅವಾಂತರವನ್ನೇ ಸೃಷ್ಟಿಸಿದೆ. ಭಾರೀ ಮಳೆಯಿಂದಾಗಿ ನೀರು ಬಸ್ ನಿಲ್ದಾಣಕ್ಕೆ ನುಗ್ಗಿ ಪ್ರಯಾಣಿಕರು ಪರದಾಡುವಂತಾಯಿತು. ಕೋಟೆನಾಡು ಚಿತ್ರದುರ್ಗದಲ್ಲಿ ಮಳೆ ಅಬ್ಬರಕ್ಕೆ ಹೊಸದುರ್ಗ ತಾಲೂಕಿನ ಮಾಚೇನಹಳ್ಳಿ ಗ್ರಾಮ ಸರ್ಕಾರಿ ಶಾಲೆ ಜಲಾವೃತವಾಗಿತ್ತು. ಶಾಲೆಯೊಳಗಿನ ಪುಸ್ತಕ, ದಾಖಲೆಗಳು, ಪೀಠೋಪಕರಣ, ಆಟದ ಸಾಮಾಗ್ರಿಗಳು ನೀರುಪಾಲಾದ್ವು. ಗ್ರಾಮಸ್ಥರು, ಮಕ್ಕಳು ಶಾಲೆಗೆ ಧಾವಿಸಿ ಶಾಲಾ ಸಾಮಗ್ರಿಗಳನ್ನು ರಕ್ಷಿಸಿದರು.

ಇತ್ತ ಬಾಗಲಕೋಟೆ ಜಿಲ್ಲೆಯಲ್ಲೂ ಧಾರಾಕಾರ ಮಳೆಯಾಗಿದೆ. ಇಳಕಲ್ ತಾಲೂಕಿನ ಬೇಕಮಲದಿನ್ನಿ ಗ್ರಾಮದ ಹಳ್ಳ ತುಂಬಿ ಹರಿದ ಪರಿಣಾಮ ಹುನಗುಂದ-ಕರಡಿ ರಸ್ತೆ ಮಾರ್ಗ ಬಂದ್ ಆಗಿತ್ತು. ಹಳ್ಳದ ನೀರಿನಲ್ಲಿ ಬಸ್ ಸಿಲುಕಿ ಪ್ರಯಾಣಿಕರು ಪರದಾಡುವಂತಾಯ್ತು. ಟ್ರ್ಯಾಕ್ಟರ್ ಮೂಲಕ ಬಸ್ ಹೊರಗೆಳೆಯಲು ಹರಸಾಹಸಪಡುವಂತಾಯಿತು.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ನಿರಂತರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡುವಂತಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ, ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Facebook Comments