ಮಾಜಿ ಸಂಸದ ಮುದ್ದಹನುಮೇ ಗೌಡರ ಆಪ್ತನ ಮನೆ ಮೇಲೆ ಐಟಿ ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು, ಫೆ.4- ಮಾಜಿ ಸಂಸದ ಎಸ್.ಪಿ.ಮುದ್ದಹನುಮೇ ಗೌಡರ ಆಪ್ತ ಹಾಗೂ ಕಾಂಗ್ರೆಸ್ ಮುಖಂಡ ರಾಯಸಂದ್ರ ರವಿಕುಮಾರ್ ಅವರ ಮನೆಯ ಮೇಲೆ ಐಟಿ ದಾಳಿಯಾಗಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರವಿಕುಮಾರ್ ಅವರ ಮನೆ ಹಾಗೂ ಅವರ ಸಂಬಂಧಿಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಎಸ್‍ಐಟಿ 7ನೆ ಕ್ರಾಸ್‍ನಲ್ಲಿರುವ ರವಿಕುಮಾರ್ ಅವರ ನಿವಾಸದ ಮೇಲೆ ದಾಳಿ ನಡೆಸಿದ 15ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ. ತುರುವೇಕೆರೆ ತಾಲ್ಲೂಕಿನ ರಾಯಸಂದ್ರದಲ್ಲಿರುವ ಮನೆಯ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅದೇ ರೀತಿ ಅವರ ಬ್ಯಾಂಕ್ ಖಾತೆಗಳನ್ನು ಪರಿಶೀಲನೆ ನಡೆಸಿದ್ದು, ಸಿದ್ದಗಂಗಾ ಬಡಾವಣೆಯಲ್ಲಿರುವ ಬಾಡಿಗೆ ಮನೆ ಮಾಲೀಕರ ವಿಚಾರಣೆ ನಡೆಸಿ ಖುದ್ದು ಹಾಜರಾಗಿ ವಿವರಣೆ ನೀಡುವಂತೆ ಐಟಿ ಅಧಿಕಾರಿಗಳು ನೋಟೀಸ್ ಜಾರಿ ಮಾಡಿದ್ದಾರೆ.

ಐಟಿ ದಾಳಿ ನಡೆದಿರುವುದನ್ನು ಒಪ್ಪಿಕೊಂಡಿರುವ ರವಿಕುಮಾರ್ ಅವರು ದಾಳಿಗೆ ಯಾರು ಕುಮ್ಮಕ್ಕು ನೀಡಿದ್ದಾರೆ ಎಂಬ ಬಗ್ಗೆ ನನಗೆ ಗೊತ್ತಿಲ್ಲ. ಆದರೆ ಖುದ್ದು ಹಾಜರಾಗಿ ವಿವರಣೆ ನೀಡುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಅವರ ಸೂಚನೆಯಂತೆ ನಾನು ಐಟಿ ಕಚೇರಿಗೆ ತೆರಳಿ ಅಗತ್ಯ ಮಾಹಿತಿ ನೀಡುತ್ತೇನೆ ಎಂದು ತಿಳಿಸಿದ್ದಾರೆ.

ಹಿನ್ನೆಲೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ರವಿಕುಮಾರ್ ಅವರು ಕೆಲ ವರ್ಷಗಳ ಹಿಂದೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಮಾತ್ರವಲ್ಲ ಮುದ್ದಹನುಮೇಗೌಡರ ಆಪ್ತ ವಲಯದಲ್ಲಿ ಕಾಣಿಸಿಕೊಂಡಿದ್ದ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಪಡೆದು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

Facebook Comments