ಬಿಎಸ್ವೈ ಆಡಿಯೋ ವಿಚಾರದಲ್ಲಿ ಸಿದ್ದರಾಮಯ್ಯ ಅವರ ಕುತಂತ್ರವಿದೆ : ಶೆಟ್ಟರ್
ನವದೆಹಲಿ, ನ.೫-ಬಿಜೆಪಿ ಮುಖಂಡರ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುತಂತ್ರವಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಟೀಕೆ ಮಾಡಲು ಯಾವುದೇ ಅಸ್ತ್ರವಿಲ್ಲದೆ ಆಡಿಯೋ ಮುಂದಿಟ್ಟುಕೊಂಡು ಟೀಕೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷವನ್ನು ಟೀಕಿಸಿದರು. ಆಡಿಯೋದ ಬ್ರಹ್ಮ ಯಾರು ಎಂಬುದು ಗೊತ್ತಾಗಬೇಕು. ಬಿಜೆಪಿ ಮುಖಂಡರ ಸಭೆಯಲ್ಲಿ ನಡೆದಂತಹ ವಿಚಾರ ಸಿದ್ದರಾಮಯ್ಯ ಅವರಿಗೆ ಹೇಗೆ ಗೊತ್ತು? ಇದರಲ್ಲಿ ಸಿದ್ದರಾಮಯ್ಯ ಅವರ ಕುತಂತ್ರವಿದೆ ಎಂದು ಆಪಾದಿಸಿದರು.
ಬಿಜೆಪಿ ಮುಖಂಡರ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನರ್ಹ ಶಾಸಕರ ಕುರಿತು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ರೆಕಾರ್ಡ್ ಮಾಡಿದ್ದು ಯಾರು? ಬಹಿರಂಗಪಡಿಸಿದ್ದು ಯಾರು? ಎಲ್ಲಾ ವಿಚಾರಗಳು ಹೊರಗೆ ಬರಬೇಕಿದೆ ಎಂದರು. ಸುಪ್ರೀಂಕೋರ್ಟ್ನಲ್ಲಿ ಅನರ್ಹ ಶಾಸಕರ ಕೇಸನ್ನು ವಿಳಂಬ ಮಾಡುವ ಉದ್ದೇಶದಿಂದ ಆಡಿಯೋ ಪ್ರಕರಣವನ್ನು ಕಾಂಗ್ರೆಸ್ ಪ್ರಸ್ತಾಪಿಸುತ್ತಿದೆ ಎಂದು ವ್ಯಂಗ್ಯವಾಡಿದರು.