ಬೈಎಲೆಕ್ಷನ್ ರಿಸಲ್ಟ್ ಬಳಿಕ ಶುರುವಾಗಲಿದೆ ಜೆಡಿಎಸ್ ಗೇಮ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.5- ರಾಜ್ಯ ವಿಧಾನಸಭೆ ಉಪಚುನಾವಣೆ ಫಲಿತಾಂಶ ಪ್ರಕಟಗೊಂಡ ನಂತರ ಪಕ್ಷದ ಚಟುವಟಿಕೆಗಳನ್ನು ತೀವ್ರಗೊಳಿಸಲು ಜೆಡಿಎಸ್ ತೀರ್ಮಾನಿಸಿದೆ. ಉಪಚುನಾವಣೆ ಪ್ರಚಾರದಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ವರಿಷ್ಠರು, ನಾಯಕರು, ಕಾರ್ಯಕರ್ತರು ಪಾಲ್ಗೊಂಡಿದ್ದರು. ಹೀಗಾಗಿ ಇನ್ನೊಂದು ವಾರ ಕಾಲ ಕಾದು ನೋಡುವ ತಂತ್ರವನ್ನು ಅನುಸರಿಸಲಾಗುತ್ತಿದೆ.

ಉಪಚುನಾವಣೆ ಫಲಿತಾಂಶದ ನಂತರ ಪಕ್ಷದ ಮುಂದಿನ ಹೋರಾಟ, ಕಾರ್ಯಕ್ರಮಗಳು, ಸಭೆ-ಸಮಾವೇಶಗಳನ್ನು ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಅಸಮಾಧಾನಗೊಂಡಿರುವ ಪಕ್ಷದ ಕೆಲವು ಮುಖಂಡರು ಸಕ್ರಿಯವಾಗಿ ಪಕ್ಷದ ಕಾರ್ಯಕ್ರಮಗಳಲ್ಲಿ ತೊಡಗಿಕೊಳ್ಳುತ್ತಿಲ್ಲ. ಅಂತಹವರ ಮನವೊಲಿಸುವ ಇಲ್ಲವೆ ಶಿಸ್ತುಕ್ರಮ ಕೈಗೊಳ್ಳುವ ಬಗ್ಗೆ ಚುನಾವಣಾ ಫಲಿತಾಂಶದ ಬಗ್ಗೆ ನಿರ್ಧಾರ ಮಾಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಉಪಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ದೊರೆತರೆ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ದೊರೆಯಲಿದೆ. ಕಾರ್ಯಕರ್ತರಲ್ಲಿನ ಉತ್ಸಾಹ ಇಮ್ಮಡಿಯಾಗಲಿದೆ ಎಂಬ ಲೆಕ್ಕಾಚಾರದಲ್ಲಿ ನಾಯಕರಿದ್ದಾರೆ. ರಾಜಕೀಯ ಪಕ್ಷಗಳ ನಡುವಿನ ಪ್ರತಿಷ್ಠೆಯಾಗಿದ್ದ ಚುನಾವಣೆಗೆ ಇಂದು ಮತದಾನ ನಡೆದಿದ್ದು, ಡಿ.9ರಂದು ಫಲಿತಾಂಶ ಹೊರಬೀಳಲಿದೆ. ಆನಂತರ ಪಕ್ಷದ ರಾಜಕೀಯ ನಡೆ ಹಾಗೂ ಪಕ್ಷ ಸಂಘಟನೆ ಬಗ್ಗೆ ವರಿಷ್ಠರು ತೀರ್ಮಾನ ಕೈಗೊಳ್ಳಲಿದ್ದಾರೆ.

ವಿರೋಧಪಕ್ಷವಾಗಿ ಜನರ ಸಮಸ್ಯೆಗಳ ಪರವಾಗಿ ಹೋರಾಟಗಳನ್ನು ರೂಪಿಸುವುದು, ಜತೆಗೆ ತಳಮಟ್ಟದಿಂದ ಪಕ್ಷಸಂಘಟನೆ ಮಾಡಲು ಅಗತ್ಯವಿರುವ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Facebook Comments