ಅರಮನೆ ಮೈದಾನದಲ್ಲಿ ಜೆಡಿಎಸ್ ಸಮಾವೇಶಕ್ಕೆ ಭರದ ಸಿದ್ಧತೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜ.21- ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಪಕ್ಷಕ್ಕೆ ಹೊಸ ಚೈತನ್ಯ ತುಂಬುವ ಉದ್ದೇಶದಿಂದ ಜ.23ರಂದು ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿರುವ ಸಮಾವೇಶದಲ್ಲಿ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ರಾಜ್ಯಾಧ್ಯಕ್ಷರಾದ ಎಚ್.ಕೆ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಲೋಕಸಭೆ, ರಾಜ್ಯಸಭೆ, ವಿಧಾನಸಭೆ, ವಿಧಾನ ಪರಿಷತ್ ಸದಸ್ಯರು, ಮಾಜಿ ಸಂಸದರು, ಮಾಜಿ ಸಚಿವರು, ಶಾಸಕರು, ಪಕ್ಷದ ಮುಖಂಡರು, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ವಿವಿಧ ಘಟಕಗಳ ಪದಾಧಿಕಾರಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಜೆಡಿಎಸ್ ವರಿಷ್ಠರು ಈ ಮನವಿ ಮಾಡಿದ್ದಾರೆ.

ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ 14 ತಿಂಗಳ ಆಡಳಿತದ ಸಂದರ್ಭದಲ್ಲಿ ಉಂಟಾದ ಗೊಂದಲಗಳಿಂದ ಪಕ್ಷದ ಮುಖಂಡರು, ಕಾರ್ಯಕರ್ತರ ಭಾವನೆಗಳಿಗೆ ನಿರೀಕ್ಷಿತ ಮಟ್ಟದಲ್ಲಿ ಸ್ಪಂದಿಸಲು ಸಾಧ್ಯವಾಗದಿರುವುದಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ. ಮೈತ್ರಿ ಸರ್ಕಾರದ ಅವಧಿಯಲ್ಲಿ ಉಂಟಾದ ಕಹಿ ಘಟನೆಗಳು ಕಳೆದ ಲೋಕಸಭೆ ಹಾಗೂ ವಿಧಾನಸಭೆ ಉಪಚುನಾವಣೆಯಲ್ಲಿ ಪಕ್ಷಕ್ಕಾದ ಹಿನ್ನಡೆಯನ್ನು ಮರೆತು ಎಲ್ಲರೂ ಒಗ್ಗೂಡಿ ಪಕ್ಷಕ್ಕೆ ಹೊಸ ಚೈತನ್ಯ ತುಂಬಬೇಕಿದೆ ಎಂದು ಅವರು ತಿಳಿಸಿದ್ದಾರೆ.

ಜೆಡಿಎಸ್ ಪಕ್ಷ ಸಂದಿಗ್ಧ ಪರಿಸ್ಥಿತಿಯಲ್ಲಿದ್ದು, ಮುಂದಿನ ದಿನಗಳಲ್ಲಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸಬೇಕಿದೆ. ಅದಕ್ಕಾಗಿ ಎಲ್ಲರೂ ಒಗ್ಗೂಡಿ ಕೆಲಸ ಮಾಡುವಂತೆ ಮನವಿ ಮಾಡಿದ್ದಾರೆ. ಪಕ್ಷದ ಕಾರ್ಯಕರ್ತರೇ ಆಸ್ತಿಯಾಗಿದ್ದು, ಜೆಡಿಎಸ್ ಪಕ್ಷವನ್ನು ಕಟ್ಟೇ ಕಟ್ಟುತ್ತೇವೆಂಬ ಹಠ ಹೊಂದಿರುವ ಮುಖಂಡರು ಹಾಗೂ ಕಾರ್ಯಕರ್ತರನ್ನು ಸೇರಿಸಿ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ.

ಪಕ್ಷ ಸಂಘಟನೆ ಹಾಗೂ ಬಲಗೊಳಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಹೋರಾಟ ಹಾಗೂ ಪಕ್ಷದ ರೂಪುರೇಷೆ ತಯಾರಿಸುವ ಉದ್ದೇಶದಿಂದ ನಡೆಸುತ್ತಿರುವ ಸಮಾವೇಶಕ್ಕೆ ಶಾಸಕಾಂಗ ಪಕ್ಷದ ನಾಯಕರಾದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪಾಲ್ಗೊಳ್ಳುತ್ತಿದ್ದಾರೆ. ಹೀಗಾಗಿ ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರು ಆಗಮಿಸಬೇಕೆಂದು ಕೋರಿದ್ದಾರೆ.

Facebook Comments