ನಾಳೆ ಅರಮನೆ ಮೈದಾನದಲ್ಲಿ ಜೆಡಿಎಸ್ ಬೃಹತ್ ಸಮಾವೇಶ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜ.22- ಗ್ರಾಮ ಮಟ್ಟದಿಂದ ರಾಜ್ಯಮಟ್ಟದವರೆಗೆ ಪಕ್ಷವನ್ನು ಬಲಗೊಳಿಸುವ ಉದ್ದೇಶದಿಂದ ನಾಳೆ (ಜ.23) ಅರಮನೆ ಮೈದಾನದಲ್ಲಿ ಜೆಡಿಎಸ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ನಡೆಯುವ ಸಮಾ ವೇಶಕ್ಕೆ ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಸಂಸದರು, 2018, 2019ರ ವಿವಿಧ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿದೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ರಾಜ್ಯಾಧ್ಯಕ್ಷರಾದ ಎಚ್.ಕೆ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಎಲ್ಲಾ ನಾಯಕರು ಮುಖಂಡರು ಪಾಲ್ಗೊಳ್ಳಲಿದ್ದಾರೆ.ಈ ವರ್ಷದ ಮೊದಲ ಸಮಾವೇಶ ಇದಾಗಿದ್ದು, ತಳಮಟ್ಟದಿಂದ ಪಕ್ಷ ಸಂಘಟನೆ ಮಾಡುವುದು ಹಾಗೂ ಮುಂಬರುವ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಉದ್ದೇಶದಿಂದ ಸಮಾವೇಶವನ್ನು ನಡೆಸಲಾಗುತ್ತಿದೆ.

ಲೋಕಸಭೆ ಹಾಗೂ ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನಡೆಯಿಂದ ಕಂಗಾಲಾಗಿರುವ ಮುಖಂಡರು, ಕಾರ್ಯಕರ್ತರಿಗೆ ಧೈರ್ಯ ತುಂಬಿ ಪಕ್ಷ ಸಂಘಟನೆಯಲ್ಲಿ ತೊಡಗಿ ಕೊಳ್ಳುವಂತೆ ಉತ್ತೇಜಿಸಲು ಸಮಾವೇಶವನ್ನು ನಡೆಸಲಾಗುತ್ತಿದೆ. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ 14 ತಿಂಗಳ ಆಡಳಿತದ ಸಂದರ್ಭದಲ್ಲಿ ಉಂಟಾದ ಗೊಂದಲಗಳಿಂದ ಪಕ್ಷದ ಮುಖಂಡರು, ಕಾರ್ಯಕರ್ತರ ಭಾವನೆಗಳಿಗೆ ನಿರೀಕ್ಷಿತ ಮಟ್ಟದಲ್ಲಿ ಸ್ಪಂದಿಸಲು ಸಾಧ್ಯವಾಗದಿರುವುದಕ್ಕೆ ಪಕ್ಷದ ವರಿಷ್ಠರು ಈಗಾಗಲೇ ವಿಷಾದ ವ್ಯಕ್ತಪಡಿಸಿದ್ದಾರೆ.

ಮೈತ್ರಿ ಸರ್ಕಾರದ ಅವಧಿಯಲ್ಲಿ ಉಂಟಾದ ಕಹಿ ಘಟನೆಗಳು ಕಳೆದ ಲೋಕಸಭೆ ಹಾಗೂ ವಿಧಾನಸಭೆ ಉಪಚುನಾವಣೆಯಲ್ಲಿ ಪಕ್ಷಕ್ಕಾದ ಹಿನ್ನಡೆಯನ್ನು ಮರೆತು ಎಲ್ಲರೂ ಒಗ್ಗೂಡಿ ಪಕ್ಷಕ್ಕೆ ಹೊಸ ಚೈತನ್ಯ ತುಂಬಬೇಕಿದೆ ಎಂದು ಮನವಿ ಮಾಡಿದ್ದಾರೆ. ಜೆಡಿಎಸ್ ಪಕ್ಷ ಸಂದಿಗ್ಧ ಪರಿಸ್ಥಿತಿ ಯಲ್ಲಿದ್ದು, ಮುಂದಿನ ದಿನಗಳಲ್ಲಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸಬೇಕಿದೆ. ಅದಕ್ಕಾಗಿ ಎಲ್ಲರೂ ಒಗ್ಗೂಡಿ ಕೆಲಸ ಮಾಡುವಂತೆ ಮನವಿ ಮಾಡಿದ್ದಾರೆ.

ಪಕ್ಷದ ಕಾರ್ಯಕರ್ತರೇ ಆಸ್ತಿಯಾಗಿದ್ದು, ಜೆಡಿಎಸ್ ಪಕ್ಷವನ್ನು ಕಟ್ಟೇ ಕಟ್ಟುತ್ತೇವೆಂಬ ಹಠ ಹೊಂದಿರುವ ಮುಖಂಡರು ಹಾಗೂ ಕಾರ್ಯಕರ್ತರನ್ನು ಸೇರಿಸಿ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಪಕ್ಷ ಸಂಘಟನೆ ಹಾಗೂ ಬಲಗೊಳಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಹೋರಾಟ ಹಾಗೂ ಪಕ್ಷದ ರೂಪುರೇಷೆ ತಯಾರಿಸುವ ಉದ್ದೇಶದಿಂದ ನಡೆಸುತ್ತಿರುವ ಸಮಾವೇಶಕ್ಕೆ ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರು ಆಗಮಿಸ ಬೇಕೆಂದು ಕೋರಿದ್ದಾರೆ.

Facebook Comments