Wednesday, April 24, 2024
Homeರಾಜ್ಯಮತದಾರರನ್ನು ಸೆಳೆಯಲು ಗ್ಯಾರಂಟಿ ಕಾರ್ಡ್ ಹಂಚಿದ ಕಾಂಗ್ರೆಸ್ ವಿರುದ್ಧ ಜೆಡಿಎಸ್ ದೂರು

ಮತದಾರರನ್ನು ಸೆಳೆಯಲು ಗ್ಯಾರಂಟಿ ಕಾರ್ಡ್ ಹಂಚಿದ ಕಾಂಗ್ರೆಸ್ ವಿರುದ್ಧ ಜೆಡಿಎಸ್ ದೂರು

ಬೆಂಗಳೂರು, ಏ.22- ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರುವಂತಹ ಗ್ಯಾರಂಟಿ ಕಾರ್ಡ್ಗಳನ್ನು ಕಾಂಗ್ರೆಸ್ ಪಕ್ಷದಿಂದ ಮನೆ ಮನೆಗೆ ನೀಡಲಾಗುತ್ತಿದೆ ಎಂದು ಆರೋಪಿಸಿ ಜೆಡಿಎಸ್ ಭಾರತದ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಲೋಕಸಭಾ ಚುನಾವಣೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಪಕ್ಷವು ಮನೆಮನೆಗೆ ಗ್ಯಾರಂಟಿ ಕಾರ್ಡ್ಗಳನ್ನು ಕಾಂಗ್ರೆಸ್ ವಿತರಿಸದಂತೆ ತಡೆಯಲು ಆಯೋಗವು ತ್ವರಿತ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದೆ.

ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಮಾಜಿ ಸಚಿವ ವೆಂಕಟರಾವ್ ನಾಡಗೌಡ, ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ಎಚ್.ಎಂ.ರಮೇಶ್ಗೌಡ, ಆರ್. ಪ್ರಕಾಶ್ ಅವರನ್ನೊಳಗೊಂಡ ಜೆಡಿಎಸ್ ನಿಯೋಗವು ಚುನಾವಣಾ ಆಯೋಗಕ್ಕೆ ನೀಡಿರುವ ದೂರಿನ ಮನವಿ ಪತ್ರವನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯಲ್ಲಿ ಸಲ್ಲಿಸಿದೆ.

ಮತದಾರರ ಮೇಲೆ ಪರಿಣಾಮ ಬೀರುವಂತಹ ಅಂಶವುಳ್ಳ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಿಸದಂತೆ ನಿರ್ಬಂಧಿಸಬೇಕು ಎಂದು ಮನವಿ ಪತ್ರದಲ್ಲಿ ಕೋರಲಾಗಿದೆ. 5 ಗ್ಯಾರಂಟಿಯ ನ್ಯಾಯ ಪತ್ರ ಎಂಬ ಹೆಸರಿನ ಪ್ರಣಾಳಿಕೆಯನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಲೋಕಸಭಾ ಚುನಾವಣೆಗಾಗಿ ಬಿಡುಗಡೆ ಮಾಡಿದೆ.

ಪ್ರಣಾಳಿಕೆಯಲ್ಲಿನ ಅಂಶಗಳನ್ನು ಗ್ಯಾರಂಟಿ ಕಾರ್ಡಿನಲ್ಲಿ ಮುದ್ರಿಸಿ ಸರ್ಕಾರದ ಯೋಜನೆಗಳೆಂಬಂತೆ ಕಾಂಗ್ರೆಸ್ನಿಂದ ಬಿಂಬಿಸಲಾಗುತ್ತಿದೆ ಎಂದು ಆರೋಪಿಸಿದೆ. ಕಾಂಗ್ರೆಸ್ ಪಕ್ಷವು ಹಲವಾರು ಭರವಸೆಗಳು ಮತ್ತು ಆಶ್ವಾಸನೆಗಳನ್ನು ಘೋಷಿಸುವ ಮೂಲಕ ಸಮಾಜದ ವಿವಿಧ ವರ್ಗದವರನ್ನು ತಲುಪಲು ಪ್ರಯತ್ನಿಸಿದ್ದು, ಇದು ಮತದಾರರಿಗೆ ಆಮಿಷ ಒಡ್ಡಿದಂತಾಗುತ್ತದೆ.

ಮತದಾರರಿಗೆ ಈ ರೀತಿಯ ಆಮಿಷಗಳು ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿವೆ ಮತ್ತು ಪ್ರಜಾಪ್ರತಿನಿಧಿ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಮನವಿ ಪತ್ರದಲ್ಲಿ ಆರೋಪಿಸಲಾಗಿದೆ.

RELATED ARTICLES

Latest News