ಏ.3ರಿಂದ ಉಪಚುನಾವಣೆ ಅಖಾಡಕ್ಕಿಳಿಯಲಿದ್ದಾರೆ ಜೆಡಿಎಸ್ ನಾಯಕರು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಮಾ.30- ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿ ಸಯ್ಯದ್ ಯಾಸ್ರಬ್ ಆಲಿ ಖಾದ್ರಿ ಪರವಾಗಿ ಜೆಡಿಎಸ್ ನಾಯಕರು ಏ.3ರಿಂದ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ. ಏ.3ರಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ನಾಯಕರು ಬಸವ ಕಲ್ಯಾಣ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ಕೈಗೊಳ್ಳಲಿದ್ದಾರೆ.

ಈಗಾಗಲೇ ಜೆಡಿಎಸ್ ಅಭ್ಯರ್ಥಿ ನಾಮಪತ್ರ ಸಲ್ಲಿಸಿ ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ. ಯಾಸ್ರಬ್ ಆಲಿ ಖಾದ್ರಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಜರಿದ್ದು, ಒಂದು ಸುತ್ತಿನ ಚುನಾವಣಾ ಪ್ರಚಾರವನ್ನು ಮಾಡಿದ್ದಾರೆ.

ಉಪಚುನಾವಣೆಯಲ್ಲಿ ಇದೊಂದೆ ಕ್ಷೇತ್ರಕ್ಕೆ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಜೆಡಿಎಸ್ ನಾಯಕರು ಗೆಲ್ಲಲೇಬೇಕೆಂದು ಪಣ ತೊಟ್ಟಿದ್ದಾರೆ. ಇದಕ್ಕಾಗಿ ಎಲ್ಲ ರೀತಿಯ ಶ್ರಮ ಹಾಕಿ ಪ್ರಚಾರ ನಡೆಸಿ ಮತದಾರರ ಮನ ಗೆಲ್ಲುವ ಸಾಹಸ ಮಾಡಿತೊಡಗಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ನಿರ್ಧರಿಸಲಾಗಿದೆ.

ಈ ಉಪಚುನಾವಣೆಯಲ್ಲಿ ಬಸವ ಕಲ್ಯಾಣ ಕ್ಷೇತ್ರದ ಮೇಲೆ ಮಾತ್ರ ಕೇಂದ್ರೀಕರಿಸಿದ್ದು, ಆ ಕ್ಷೇತ್ರದಲ್ಲೇ ಜೆಡಿಎಸ್ ನಾಯಕರು ನಿರಂತರ ಪ್ರಚಾರವನ್ನು ನಡೆಸಲಿದ್ದಾರೆ. ಕುಮಾರಸ್ವಾಮಿ ಸುಮಾರು ಎರಡು ವಾರಗಳ ಕಾಲ ಕ್ಷೇತ್ರದಲ್ಲೇ ಬೀಡುಬಿಟ್ಟು ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸುವುದಾಗಿ ಈಗಾಗಲೇ ಪ್ರಕಟಿಸಿದ್ದಾರೆ.

Facebook Comments