ನಾಳೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.22- ಪ್ರಸಕ್ತ ವಿಧಾನಮಂಡಲದ ಅಧಿವೇಶನದಲ್ಲಿ ಪಕ್ಷ ಪ್ರಸ್ತಾಪಿಸಬೇಕಿರುವ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲು ನಾಳೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

ನಾಳೆ ಬೆಳಗ್ಗೆ 9.30ಕ್ಕೆ ವಿಧಾನಸೌಧದ ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

ಈ ಸಂಬಂಧ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾದ ಬಂಡೆಪ್ಪ ಕಾಶ್ಯಂಪೂರ್ ಅವರು ತಮ್ಮ ಪಕ್ಷದ ಎಲ್ಲಾ ಶಾಸಕರಿಗೂ ಸಭೆಗೆ ಹಾಜರಾಗುವಂತೆ ಮನವಿ ಮಾಡಿದ್ದಾರೆ. ಅಧಿವೇಶನದಲ್ಲಿ ಯಾವ ಯಾವ ವಿಷಯಗಳ ಬಗ್ಗೆ ಆದ್ಯತೆ ನೀಡಿ ಚರ್ಚೆ ಮಾಡಬೇಕು.

ಪಕ್ಷ ಯಾವ ನಿಲುವು ತಳೆಯಬೇಕು ಹಾಗೂ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ.

ಎಪಿಎಂಸಿ ತಿದ್ದುಪಡಿ ವಿಧೇಯಕ, ಭೂ ಸುಧಾರಣೆ ತಿದ್ದುಪಡಿ ವಿಧೇಯಕವನ್ನು ಈಗಾಗಲೇ ವಿರೋಧಿಸಿರುವ ಜೆಡಿಎಸ್, ಸದನದಲ್ಲಿ ಈ ವಿಚಾರವನ್ನು ಪ್ರಮುಖವಾಗಿ ಪ್ರಸ್ತಾವಿಸುವ ಸಾಧ್ಯತೆಗಳಿವೆ.

ನೆರೆ ಹಾವಳಿ, ಅತಿವೃಷ್ಟಿ, ನಿರುದ್ಯೋಗ, ಕೊರೊನಾದಿಂದ ಉಂಟಾಗಿರುವ ಆರ್ಥಿಕ ಸಂಕಷ್ಟ ಮೊದಲಾದ ವಿಚಾರಗಳ ಬಗ್ಗೆ ಸದನದಲ್ಲಿ ಪ್ರಸ್ತಾಪಿಸುವ ಬಗ್ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ.

Facebook Comments