ರಾಜ್ಯ ಸಭೆ-ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಮಹತ್ವದ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.1-ಮುಂಬರುವ ರಾಜ್ಯ ಸಭೆ ಹಾಗೂ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕರ ಹಾಗೂ ಪಕ್ಷದ ಪ್ರಮುಖರ ಮಹತ್ವದ ಸಭೆ ಸದ್ಯದಲ್ಲೆ ನಡೆಸಲು ಉದ್ದೇಶಿಸಲಾಗಿದೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತದೆ.

ಕಳೆದ ಎರಡು ತಿಂಗಳಿನಿಂದ ರಾಜ್ಯದಲ್ಲಿ ತಾಂಡವವಾಡುತ್ತಿರುವ ಕೊರೋನಾ ವೈರಾಣು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವೈಫಲ್ಯ, ಪಕ್ಷ ಸಂಘಟನೆ ಮೊದಲಾದ ವಿಚಾರಗಳ ಬಗ್ಗೆ ಸಭೆಯಲ್ಲಿ ಸಮಾಲೋಚನೆ ನಡೆಸಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಕೋವಿಡ್-19 ರಾಜ್ಯದಲ್ಲಿ ಕಂಡುಬಂದ ನಂತರ ಪಕ್ಷದ ಕಾರ್ಯಕ್ರಮಗಳು ನಡೆದಿಲ್ಲದಿರುವುದರಿಂದ ನಮ್ಮ ನಾಯಕರ ನೇತೃತ್ವದಲ್ಲಿ ನಡೆಯುವ ಸಭಯಲ್ಲಿ ಮುಂದಿನ ನಿಧಾರದ ಬಗ್ಗೆ ಸಮಾಲೋಚನೆ ನಡೆಸಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ತಿಳಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್ ನಿಯಂತ್ರಿಸುವಲ್ಲಿ ವಿಫಲವಾಗಿವೆ. ಈಗಾಗಲೇ ಉಭಯ ಸರ್ಕಾರಗಳು ಘೋಷಿಸಿರುವ ಪ್ಯಾಕೇಜ್‍ಗಳು ಜಾರಿಯಾಗಿಲ್ಲ. ಫಲಾನುಭವಿಗಳಿಗೂ ತಲುಪಿಲ್ಲದಿರುವ ವಿಚಾರ ಪ್ರಮುಖವಾಗಿ ಸಭೆಯಲ್ಲಿ ಚರ್ಚೆ ಮಾಡಲಾಗುತ್ತದೆ.

ಕೋವಿಡ್‍ನಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತವಾಗಿರುವುದು, ಸಾಮಾನ್ಯ ಜನರು ಅನುಭವಿಸುತ್ತಿರುವ ಸಂಕಷ್ಟದ ವಿಚಾರಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಕೈಗೊಳ್ಳುವ ಹೋರಾಟದ ರೂಪು ರೇಷೆ ಬಗ್ಗೆ ಸಮಾಲೋಚನೆ ನಡೆಸಲಾಗುತ್ತದೆ ಎಂದು ಅವರು ಹೇಳಿದರು.

ಸದ್ಯಕ್ಕೆ ಕೊರೋನಾ ವೈರಾಣು ನಿಯಂತ್ರಣಕ್ಕೆ ಬರುವ ಸಾಧ್ಯತೆ ಇಲ್ಲದಿರುವ ಈ ಸಂದರ್ಭದಲ್ಲಿ ಪಕ್ಷದ ಸಂಘಟನೆ ಯಾವ ರೀತಿ ಮಾಡಬೇಕು ಹಾಗೂ ಸದಸ್ಯತ್ವ ನೋಂದಣಿ ಮುಂದುವರೆಸುವ ಬಗ್ಗೆಯೂ ಚಿಂತನೆ ನಡೆಸಲಾಗುವುದು.

ವಿಧಾನ ಸಭೆಯಿಂದ ಚುನಾಯಿತರಾಗಿದ್ದ ರಾಜ್ಯ ಸಭೆಯ ನಾಲ್ವರು ಹಾಗೂ ವಿಧಾನ ಪರಿಷತ್ತಿನ ಏಳು ಸದಸ್ಯರು ಇದೇ ತಿಂಗಳು ನಿವೃತ್ತಿಯಾಗಲಿದ್ದು, ನಿವೃತ್ತಿಯಿಂದ ತೆರವಾಗುವ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ. ಈ ಸಂಬಂಧ ಶಾಸಕರ ಹಾಗೂ ಪಕ್ಷದ ಮುಖಂಡರ ಅಭಿಪ್ರಾಯವನ್ನು ಪಡೆಯುವ ಸಾಧ್ಯತೆಗಳಿವೆ ಎಂದು ಕುಮಾರಸ್ವಾಮಿ ತಿಳಿಸಿದರು.

Facebook Comments