ಸದ್ಯದಲ್ಲೇ ಜೆಡಿಎಸ್ ಕೋರ್ ಕಮಿಟಿ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜ.13- ಮಕರ ಸಂಕ್ರಾಂತಿ ಹಬ್ಬ ಕಳೆಯುತ್ತಿದ್ದಂತೆ ಪಕ್ಷಕ್ಕೆ ಚೈತನ್ಯ ತುಂಬಲು ಮುಂದಾಗಿರುವ ಜೆಡಿಎಸ್ ವರಿಷ್ಠರು ಸದ್ಯದಲ್ಲೇ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ. ಕೋರ್ ಕಮಿಟಿ ಸದಸ್ಯರ ಪಟ್ಟಿಯನ್ನು ಕೂಡ ಸದ್ಯದಲ್ಲೇ ಬಿಡುಗಡೆ ಮಾಡಲಿದ್ದು, ಮುಂದಿನ ವಾರ ಪಕ್ಷದ ಕೋರ್ ಕಮಿಟಿ ಸಭೆ ನಡೆಸಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಸಭೆಯಲ್ಲಿ ತಳಮಟ್ಟದಿಂದ ಪಕ್ಷ ಬಲಪಡಿಸುವುದು, ಸದಸ್ಯತ್ವ ನೋಂದಣಿಯನ್ನು ಹೆಚ್ಚು ಮಾಡುವುದು, ಪಕ್ಷ ಸಂಘಟನೆಗೆ ಆದ್ಯತೆ ನೀಡುವುದು, ಪ್ರಚಲಿತ ರಾಜಕೀಯ ವಿದ್ಯಮಾನಗಳು, ರಾಜ್ಯದ ಜನರು ಎದುರಿಸುತ್ತಿರುವ ಸಮಸ್ಯೆಗಳು ಮೊದಲಾದ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಅಲ್ಲದೆ, ಮುಂಬರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸುವ ಬಗ್ಗೆಯೂ ಕೂಡ ಗಂಭೀರ ಚರ್ಚೆ ನಡೆಸಲಾಗುತ್ತಿದೆ.

ಆಂತರಿಕವಾಗಿ ಪಕ್ಷದಲ್ಲಿ ಬದಲಾವಣೆ ತರುವ ವಿಚಾರವಾಗಿಯೂ ಕೋರ್ ಕಮಿಟಿ ಸಭೆಯಲ್ಲಿ ಸಮಾಲೋಚನೆ ನಡೆಸಲಾಗುತ್ತದೆ. ಜನಪರ ಹೋರಾಟ ರೂಪಿಸುವುದು, ಪಕ್ಷ ಸಂಘಟನೆಗೆ ಒತ್ತು ನೀಡಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು, ಇದಕ್ಕಾಗಿ ತಂಡಗಳನ್ನು ರಚಿಸಿ ರಾಜ್ಯದಲ್ಲಿ ಪ್ರವಾಸ ಕೈಗೊಳ್ಳುವ ಬಗ್ಗೆಯೂ ಚರ್ಚೆಯಲ್ಲಿ ಸಮಾಲೋಚನೆ ನಡೆಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೂಡ ಪಕ್ಷ ಸಂಘಟನೆಗೆ ಒತ್ತು ನೀಡುವಂತೆ ಕರೆ ನೀಡಿದ್ದಾರೆ. ಸಂಕ್ರಾಂತಿ ನಂತರ ಪಕ್ಷ ಸಂಘಟನೆಗೆ ಹೆಚ್ಚು ಆದ್ಯತೆ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಎಲ್ಲ ಹಂತದ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರಿಗೆ ಜವಾಬ್ದಾರಿ ನೀಡಿ ರಾಷ್ಟ್ರೀಯ ಪಕ್ಷಗಳಿಗೆ ಪರ್ಯಾಯವಾಗಿ ರಾಜ್ಯದಲ್ಲಿ ಜೆಡಿಎಸ್ ಬಲಗೊಳಿಸಲು ಪೂರಕವಾಗಿ ಕಾರ್ಯಕ್ರಮ ರೂಪಿಸುವ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Facebook Comments