ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಮಹಿಳಾ ಮೀಸಲಾತಿ ನಿರ್ಣಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಫೆ.11- ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರ ಮೀಸಲಾತಿ ಕುರಿತು ಇಂದು ನಡೆದ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.  ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯೆ ಪ್ರಮೀಳಾ ಮಂಡಿಸಿದ ನಿರ್ಣಯವನ್ನು ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಲೀಲಾದೇವಿ ಆರ್.ಪ್ರಸಾದ್ ಹಾಗೂ ಶೀಲಾ ನಾಯಕ್ ಅನುಮೋದಿಸಿದರು.

ಅರಮನೆ ಮೈದಾನದಲ್ಲಿ ರಾಷ್ಟ್ರೀಯ ಮಹಾ ಅಧಿವೇಶನದ ಮುನ್ನ ನಡೆದ ಕಾರ್ಯಕಾರಿಣಿಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಕುಸಿದಿರುವ ಆರ್ಥಿಕ ವ್ಯವಸ್ಥೆಯನ್ನು ಸರಿದಾರಿಗೆ ತರಬೇಕು ಹಾಗೂ ಶಾಸಕಾಂಗದಲ್ಲಿ ಮಹಿಳಾ ಮೀಸಲಾತಿ ಜಾರಿಗೆ ತರಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದು ಸೇರಿದಂತೆ ಕೆಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ.

ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆರ್ಥಿಕ ಸಂಕಷ್ಟದಿಂದ ಜನರನ್ನು ಪಾರು ಮಾಡಲು ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಸ್ವಾತಂತ್ರ್ಯ ಬಂದ ನಂತರ ಈ ಪ್ರಮಾಣದಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿರಲಿಲ್ಲ. ಜಿಡಿಪಿ ತೀವ್ರವಾಗಿ ಕುಸಿದಿದೆ. ಜಿಎಸ್‍ಟಿ, ಗರಿಷ್ಠ ಮುಖಬೆಲೆಯ ನೋಟು ಅಮಾನೀಕರಣದಿಂದಾಗಿ ಸಾಮಾನ್ಯ ಜನರು ತೀವ್ರ ಸಂಕಷ್ಟವನ್ನು ಎದುರಿಸುವಂತಾಗಿದೆ. ಕೈಗಾರಿಕೆಗಳು ಮುಚ್ಚುತ್ತಿದ್ದು, ನಿರುದ್ಯೋಗ ಪ್ರಮಾಣ ಹೆಚ್ಚಾಗುತ್ತಿದೆ.

ಜನರ ಕೊಳ್ಳುವ ಶಕ್ತಿಯೇ ಕಡಿಮೆಯಾಗುತ್ತಿದೆ. ಇಂತಹ ಆರ್ಥಿಕ ಪರಿಸ್ಥಿತಿಯಿಂದ ಪಾರು ಮಾಡಲು ಕ್ರಮ ಕೈಗೊಳ್ಳುವ ಬದಲು ಕೇಂದ್ರ ಸರ್ಕಾರ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದೆ. ಸಿಎಎ, ಎನ್‍ಆರ್‍ಸಿ ವಿರೋಧಿಸಿ ಜಾತ್ಯಾತೀತ ಶಕ್ತಿಗಳು ಹಾಗೂ ಪ್ರಗತಿಪರ ಸಂಘಟನೆಗಳೊಂದಿಗೆ ಜನಾಂದೋಲನ ಕೈಗೊಳ್ಳಲು ಜೆಡಿಎಸ್ ನಿರ್ಣಯ ಕೈಗೊಂಡಿದೆ. ಸಿಎಎ , ಎನ್‍ಆರ್‍ಸಿ ಜಾರಿಯಿಂದ ದೇಶದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆಯಲ್ಲದೆ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಇದರ ವಿರುದ್ದ ಈಗಾಗಲೇ ಜನರು ತೀವ್ರ ಹೋರಾಟ ಮಾಡುತ್ತಿದ್ದಾರೆ.

ಜೆಡಿಎಸ್ ಕೂಡ ಇಂತಹ ಜನಪರ ಹೋರಾಟಕ್ಕೆ ಬೆಂಬಲ ನೀಡಲಿದೆ. ಎಚ್.ಡಿ.ದೇವೇಗೌಡರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಮಂಡನೆಯಾಗಿದ್ದ ಶಾಸಕಾಂಗದಲ್ಲಿ ಮಹಿಳಾ ಮೀಸಲಾತಿ ಮಸೂದೆ ಇನ್ನು ಸಂಸತ್‍ನ ಒಪ್ಪಿಗೆ ಪಡೆದಿಲ್ಲ. ಈ ವಿಧೇಯಕಕ್ಕೆ ಅಂದಿನಿಂದಲೂ ಅಡ್ಡಿ ಆತಂಕಗಳು ಎದುರಾಗುತ್ತಲೇ ಇವೆ. ಮಹಿಳಾ ಮೀಸಲಾತಿ ಕಾನೂನನ್ನು ಜಾರಿಗೆ ತರಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಕೈಗೊಳ್ಳಲಾಗಿದೆ.

ಸಾಂಸ್ಥಿಕ ಚುನಾವಣೆ: ಸಾಂಸ್ಥಿಕ ಚುನಾವಣೆಯ ರಾಷ್ಟ್ರೀಯ ಚುನಾವಣಾ ಅಧಿಕಾರಿಯಾಗಿ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಇದೇ ಸಂದರ್ಭದಲ್ಲಿ ನೇಮಕಗೊಂಡರು.  ಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ಸದಸ್ಯತ್ವ ನೋಂದಣಿಯನ್ನು ತೀವ್ರಗೊಳಿಸುವುದು ಮತ್ತು ಕ್ಷೇತ್ರ, ತಾಲ್ಲೂಕು, ಜಿಲ್ಲಾ , ರಾಜ್ಯ ಹಾಗೂ ರಾಷ್ಟ್ರೀಯ ಸಮಿತಿಗಳಿಗೆ ಪಕ್ಷದ ಸಾಂಸ್ಥಿಕ ಚುನಾವಣೆಯನ್ನು ನಡೆಸಲು ತೀರ್ಮಾನಿಸಿದೆ.

ಸಾಂಸ್ಥಿಕ ಚುನಾವಣೆಗೆ ವೇಳಾ ಪಟ್ಟಿ ಪ್ರಕಟಿಸಿ ಅದರಂತೆ ಆಂತರಿಕವಾಗಿ ಚುನಾವಣೆ ನಡೆಸಿ ಪಕ್ಷ ಸಂಘಟನೆಯನ್ನು ಬಲಗೊಳಿಸಲು ಉದ್ದೇಶಿಸಲಾಗಿದೆ. ಶಿಡ್ಲಘಟ್ಟ ಪಿಎಲ್‍ಡಿ ಬ್ಯಾಂಕ್‍ನಲ್ಲಿ 16 ವರ್ಷದ ಬಳಿಕ ಜೆಡಿಎಸ್ ಅಧಿಕಾರ ಪಡೆದಿರುವ ಹಿನ್ನೆಲೆಯಲ್ಲಿ ಸದಸ್ಯರು ದೇವೇಗೌಡರಿಗೆ ಅಭಿನಂದನೆ ಸಲ್ಲಿಸಿದರು.

ಸಮಾರಂಭದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ.ದತ್ತ, ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ, ಮಾಜಿ ಸಚಿವರಾದ ಬಂಡೆಪ್ಪ ಕಾಶಂಪುರ್, ಡಿ.ನಾಗರಾಜಯ್ಯ, ಕೇರಳ, ತೆಲಂಗಾಣ ಸೇರಿದಂತೆ ವಿವಿಧ ರಾಜ್ಯಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

Facebook Comments