ನಾಳೆಯಿಂದ ವಿಧಾನಸಭಾ ಕ್ಷೇತ್ರವಾರು ಜೆಡಿಎಸ್ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಫೆ.25- ಮುಂಬರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ನಾಳೆಯಿಂದ ವಿಧಾನಸಭಾ ಕ್ಷೇತ್ರವಾರು ಸರಣಿ ಸಭೆಗಳನ್ನು ಜೆಡಿಎಸ್ ನಡೆಸಲಿದೆ. ಬಿಬಿಎಂಪಿ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ಪಕ್ಷ ಸಂಘಟನೆ, ಸದಸ್ಯತ್ವ ನೋಂದಣಿ ಮೊದಲಾದ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲು ನಾಳೆಯಿಂದ ನಗರದ 28 ವಿಧಾನಸಭಾ ಕ್ಷೇತ್ರಗಳ ಸಭೆಗಳನ್ನು ನಡೆಸು ಉದ್ದೇಶಿಸಲಾಗಿದೆ.

ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ಆರ್.ಪ್ರಕಾಶ್ ಅಧ್ಯಕ್ಷತೆಯಲ್ಲಿ ನಾಳೆಯಿಂದ ಮಾ.13ರವರೆಗೂ 28 ವಿಧಾನಸಭಾ ಕ್ಷೇತ್ರಗಳ ಸಭೆ ನಡೆಯಲಿದೆ. ಆಯಾ ವಿಧಾನಸಭಾ ಕ್ಷೇತ್ರಗಳ ಅಧ್ಯಕ್ಷರು, ಪದಾಧಿಕಾರಿಗಳು, ವಾರ್ಡ್ ಅಧ್ಯಕ್ಷರು, ವಿವಿಧ ವಿಭಾಗಗಳ ಪದಾಧಿಕಾರಿ ಗಳು, ಬಿಬಿಎಂಪಿ ಮತ್ತು ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆದೇಶದಂತೆ ಸಭೆಯನ್ನು ನಡೆಸುತ್ತಿದ್ದು, ಚುನಾವಣೆಗೆ ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಸಜ್ಜಗೊಳಿಸಿ ತನ್ನದೇ ಆದ ಚುನಾವಣಾ ಕಾರ್ಯತಂತ್ರ ರೂಪಿಸಲು ಉದ್ದೇಶಿಸಲಾಗಿದೆ. ಪ್ರತಿದಿನ ಎರಡು ವಿಧಾನಸಭಾ ಕ್ಷೇತ್ರಗಳ ಸಭೆಗಳನ್ನು ನಡೆಸಿ ಪಕ್ಷದ ಮುಖಂಡರ ಅಭಿಪ್ರಾಯವನ್ನು ಪಡೆಯಲಾಗುತ್ತದೆ.

ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಿ ಸಂಭಾವ್ಯ ಪಟ್ಟಿಯನ್ನು ಸಿದ್ದಪಡಿಸಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.  ನಾಳೆ ಬೆಳಗ್ಗೆ ಯಲಹಂಕ, ಮಧ್ಯಾಹ್ನ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರಗಳ ಸಭೆ ನಡೆಸಲಾಗುತ್ತದೆ. ಫೆ.27ರಂದು ರಾಜರಾಜೇಶ್ವರಿನಗರ, ದಾಸರ ಹಳ್ಳಿ, ಫೆ.28ರಂದು ಮಹಾಲಕ್ಷ್ಮಿ ಲೇಔಟ್, ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರಗಳ ಸಭೆ ನಡೆಸಲಾಗುತ್ತದೆ. ಹೀಗೆ ನಿರಂತರ ವಾಗಿ ವಿಧಾನಸಭಾ ಕ್ಷೇತ್ರವಾರು ಸರಣಿ ಸಭೆಗಳನ್ನು ನಡೆಸಲಾಗುತ್ತದೆ.

Facebook Comments