ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಜೂ. 28 ರಂದು ಜೆಡಿಎಸ್ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.24- ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ವಿದ್ಯುತ್ ದರ, ಆಹಾರ ಪದಾರ್ಥಗಳ ಬೆಲೆ ಏರಿಕೆ ವಿರೋಧಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿರುದ್ಧ ಜೆಡಿಎಸ್ ಜೂ. 28 ರಂದು ನಗರದಲ್ಲಿ ಪ್ರತಿಭಟನೆ ನಡೆಸಲಿದೆ. ಜೆಡಿಎಸ್ ಕಚೇರಿ ಜೆಪಿ ಭವನದಿಂದ ಅಂದು ಮೂಲಕ ಕೆ.ಜಿ.ರಸ್ತೆಯ ಕಂದಾಯ ಭವನದವರೆಗೆ ಪಾದಯಾತ್ರೆ ನಡೆಸಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುತ್ತದೆ.

ಈಗಾಗಲೇ ಹಾಸನ ಸೇರಿದಂತೆ ವಿವಿಧ ಜಿಲ್ಲಾಕೇಂದ್ರಗಳಲ್ಲಿ ಬೆಲೆ ಏರಿಕೆ ವಿರುದ್ಧ ಜೆಡಿಎಸ್ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ. ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುವ ಸಂಬಂಧ ಜೆಡಿಎಸ್ ಬೆಂಗಳೂರು ನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಿ ರೂಪುರೇಷೆ ಸಿದ್ಧಪಡಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯ ಹೆಚ್.ಕೆ. ಕುಮಾರಸ್ವಾಮಿ ಬೆಂಗಳೂರು ನಗರದ ಅಧ್ಯಕ್ಷ ಆರ್. ಪ್ರಕಾಶ್, ವಿಧಾನ ಪರಿಷತ್ ಸದಸ್ಯರಾದ ತಿಪ್ಪೇಸ್ವಾಮಿ, ರಮೇಶಗೌಡ, ಮಾಜಿ ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ ಮೊದಲಾದವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದೆ‌.

ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ. ಅಗತ್ಯವಸ್ತುಗಳ ಬೆಲೆ ಏರಿಕೆಯಿಂದ ಆಗುತ್ತಿರುವ ತೊಂದರೆ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಟ್ಟು ಸರ್ಕಾರದ ಗಮನ ಸೆಳೆಯಲು ಪ್ರತಿಭಟನೆ ಮಾಡಲಾಗುತ್ತಿದೆ.

ಕೋವಿಡ್ ಸಂಕಷ್ಟದ ಸಮಯದಲ್ಲಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ವಿದ್ಯುತ್ ದರ ಹೆಚ್ಚಳವಾಗಿರುವುದು ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದಿರುವ ಜೆಡಿಎಸ್ ನಾಯಕರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೆಲೆ ಏರಿಕೆಗೆ ಕಡಿವಾಣ ಹಾಕುವ ಮೂಲಕ ಸಂಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದ್ದಾರೆ.

Facebook Comments