ಉಪಚುನಾವಣೆ ರಣತಂತ್ರ ಹೆಣೆಯಲು ಇಂದು ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.15-ರಾಜ್ಯ ವಿಧಾನಸಭೆ ಉಪಚುನಾವಣೆ ಕಾರ್ಯತಂತ್ರ ರೂಪಿಸುವುದು , ಮಾಜಿ ಸಚಿವರು, ಶಾಸಕರಿಗೆ ಚುನಾವಣಾ ಉಸ್ತುವಾರಿ ಹಂಚಿಕೆ ಮಾಡಲು ಇಂದು ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಶಾಸಕಾಂಗ ಪಕ್ಷದ ಸಭೆ ಇಂದು ಸಂಜೆ ಖಾಸಗಿ ಹೊಟೇಲ್‍ನಲ್ಲಿ ನಡೆಯಲಿದೆ.

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಈಗಾಗಲೇ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಪಕ್ಷದ ಅಧಿಕೃತ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಒಟ್ಟಾಗಿ ಶ್ರಮಿಸಬೇಕು. ಸ್ಥಳೀಯವಾಗಿ ಅಭ್ಯರ್ಥಿಗಳ ಗೆಲುವಿಗೆ ಬೇಕಾದ ಕಾರ್ಯತಂತ್ರಗಳನ್ನು ರೂಪಿಸಿಕೊಳ್ಳಲು ಸಭೆಯಲ್ಲಿ ಮಾರ್ಗದರ್ಶನ ಮಾಡಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಶಾಸಕಾಂಗ ಪಕ್ಷದ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ವಿಧಾನಸಭೆ, ವಿಧಾನಪರಿಷತ್ ಸದಸ್ಯರು ಪಾಲ್ಗೊಳ್ಳಲಿದ್ದಾರೆ.
ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿರುವ ಜೆಡಿಎಸ್ ಶತಾಯಗತಾಯ ಹೋರಾಟ ನಡೆಸಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಮಾಡಬೇಕಾದ ಕಾರ್ಯತಂತ್ರಗಳ ರೂಪುರೇಷೆ ಬಗ್ಗೆ ಗಂಭೀರ ಚರ್ಚೆ ಮಾಡಲಾಗುತ್ತದೆ.

ಉಪಚುನಾವಣೆ ನಡೆಯುವ ಕ್ಷೇತ್ರಗಳ ಅಕ್ಕಪಕ್ಕದ ಕ್ಷೇತ್ರಗಳ ಮುಖಂಡರು, ಆಯಾ ಜಿಲ್ಲಾಧ್ಯಕ್ಷರು, ಮಾಜಿ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರಿಗೆ ಚುನಾವಣೆಯ ಜವಾಬ್ದಾರಿ ನೀಡಲು ಉದ್ದೇಶಿಸಲಾಗಿದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಕಾಂಗ್ರೆಸ್, ಬಿಜೆಪಿಯನ್ನು ಸಮಾನ ದೂರದಲ್ಲಿಟ್ಟು, ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಬೇಕಾಗಿರುವ ಅಗತ್ಯ ಕಾರ್ಯತಂತ್ರ ರೂಪಿಸುವ ಬಗ್ಗೆ ಮಹತ್ವದ ಚರ್ಚೆ ನಡೆಯುತ್ತದೆ.

ಚುನಾವಣೆ ಸಂದರ್ಭದಲ್ಲಿ ದೇವೇಗೌಡರು ಹಾಗೂ ಕುಮಾರಸ್ವಾಮಿಯವರ ಅಧಿಕಾರಾವಧಿಯಲ್ಲಿ ಮಾಡಿರುವ ಅಭಿವೃದ್ಧಿಕಾರ್ಯಗಳು, ಜನಪರ ಕಾರ್ಯಕ್ರಮಗಳನ್ನು ಜನರಿಗೆ ಮನವರಿಕೆ ಮಾಡಿಕೊಟ್ಟು ಮತಯಾಚಿಸುವಂತೆ ಸಲಹೆ ಮಾಡಲಾಗುತ್ತದೆ.

ಮೈತ್ರಿ ಸರ್ಕಾರದ ಅವಧಿಯಲ್ಲಿ ಮಾಡಿರುವ ರೈತರ ಸಾಲ ಮನ್ನಾ, ಬಡವರ ಬಂಧು, ಋಣಮುಕ್ತ ಕಾಯ್ದೆ ಮೊದಲಾದವುಗಳನ್ನು ಜನರ ಮುಂದಿಟ್ಟು ಮತಯಾಚಿಸುವಂತೆ ಮಾರ್ಗದರ್ಶನ ಮಾಡಲಾಗುತ್ತದೆ. ಸಾಲ ಮನ್ನಾ ಪ್ರಯೋಜನ ಪಡೆದ ಕುಟುಂಬಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆಯಲ್ಲಿ ಹೆಚ್ಚು ಮತಗಳಿಸುವ ಬಗ್ಗೆ ಸಮಾಲೋಚನೆ ನಡೆಸಿ ಕಾರ್ಯತಂತ್ರವನ್ನು ರೂಪಿಸಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Facebook Comments