ಬಿಗ್ ನ್ಯೂಸ್ : ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಕೆ.ಸಿ.ರಾಮಮೂರ್ತಿ ದಿಢೀರ್ ರಾಜೀನಾಮೆ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.16-ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಮುಖಂಡ, ರಾಜ್ಯಸಭಾ ಸದಸ್ಯಕೆ.ಸಿ.ರಾಮಮೂರ್ತಿ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ.
ನವದೆಹಲಿಯಲ್ಲಿಂದು ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾಕ್ಷರಾದ ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಮೂಲಗಳ ಪ್ರಕಾರ ಅವರು ಸದ್ಯದಲ್ಲೇ ಬಿಜೆಪಿ ಸೇರಲಿದ್ದಾರೆ ಎಂದು ಹೇಳಾಗುತ್ತಿದ್ದು, ಈ ಕಾರಣಕ್ಕಾಗಿಯೇ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ನಾನು ಕೆಲ ಕಾರಣಗಳಿಗಾಗಿ ಬಿಜೆಪಿ ನಾಯಕರನ್ನು ಭೇಟಿಯಾಗಿದ್ದೆ. ಅದಕ್ಕೂ ನನ್ನ ರಾಜೀನಾಮೆಗೂ ಸಂಬಂಧವಿಲ್ಲ.

ಮುಂದಿನ ರಾಜಕೀಯ ನಿರ್ಧಾರಗಳ ಬಗ್ಗೆ ಎರಡು-ಮೂರು ದಿನಗಳೊಳಗಾಗಿ ನಿರ್ಧಾರ ತೆಗೆದುಕೊಳ್ಳುತ್ತೇನೆ. ಬಿಜೆಪಿ ಸೇರುವ ಕುರಿತು ಸದ್ಯಕ್ಕೆ ನಿರ್ಧಾರ ತೆಗೆದುಕೊಂಡಿಲ್ಲ. ಶೀಘ್ರವೇ ಮುಂದಿನ ನಡೆಯನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದ ಕೆ.ಸಿ.ರಾಮಮೂರ್ತಿ ದಿಢೀರನೆ ರಾಜೀನಾಮೆ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ರಾಜೀನಾಮೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಅಸಮಾಧಾನವಿಲ್ಲ. ನಾನು ಕೆಲವು ವೈಯಕ್ತಿಕ ಕಾರಣಗಳಿಗಾಗಿ ರಾಜೀನಾಮೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದರು. ನನ್ನನ್ನು ರಾಜ್ಯಸಭಾ ಸ್ಥಾನಕ್ಕೆ ಆಯ್ಕೆ ಮಾಡಲು ಸಹಕಾರ ನೀಡಿದ್ದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ,ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ , ಮುಖಂಡರಾದ ಡಾ.ಜಿ.ಪರಮೇಶ್ವರ್ ಸೇರಿದಂತೆ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ.

ಪಕ್ಷದ ವಿಚಾರದಲ್ಲಾಗಲಿ ಅಥವಾ ನಾಯಕರ ವಿಚಾರದಲ್ಲಾಗಲಿ ಟೀಕೆ ಮಾಡುವಂತದ್ದು ಏನೂ ಇಲ್ಲ. ಅಭಿವೃದ್ದಿ ಜೊತೆ ಕೈ ಜೋಡಿಸಬೇಕು ಎಂಬ ದೃಷ್ಟಿಯಿಂದ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದರು. ನನ ರಾಜೀನಾಮೆಯಿಂದ ರಾಜ್ಯಸಭೆಯಲ್ಲಿ ಕೆಲವು ಮಸೂದೆಗಳನ್ನು ಪಾಸ್ ಮಾಡಿಕೊಳ್ಳಲು ಬಿಜೆಪಿಗೆ ಅನುಕೂಲವಾಗುತ್ತದೆ ಎಂಬುದು ಸರಿಯಲ್ಲ.

ನನ್ನಿಂದಾಗಿ ಬಿಜೆಪಿಗೆ ಅನುಕೂಲಗಳಾಗುತ್ತವೆ ಎಂಬುದನ್ನು ಒಪ್ಪುವುದಿಲ್ಲ ಎಂದು ಹೇಳಿದರು. ಮೂಲಗಳ ಪ್ರಕಾರ ರಾಜೀನಾಮೆ ನೀಡುವ ಮುನ್ನ ಅವರು ಮುಖ್ಯಮಂತ್ರಿ ಯಡಿಯೂರಪ್ಪನವರೊಂದಿಗೆ ಮಾತುಕತೆ ನಡೆಸಿಯೇ ಈ ತೀರ್ಮಾನಕ್ಕೆ ಬಂದಿದ್ದಾರೆ ಎಂದು ಹೇಳಲಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin